ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

7
ಸಚಿವರ ಕಚೇರಿ ಸಿಬ್ಬಂದಿಯ ಬಳಿ ದಾಖಲೆ ಇಲ್ಲದ ನಗದು ಪತ್ತೆ

ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Published:
Updated:
Prajavani

ಬೀದರ್: ಸಚಿವ ಪುಟ್ಟರಂಗಶೆಟ್ಟಿ ಕಚೇರಿ ಸಿಬ್ಬಂದಿಯ ಬಳಿ ದಾಖಲೆ ಇಲ್ಲದ ಹಣ ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸಚಿವರ ಕಚೇರಿ ಬೆರಳಚ್ಚುಗಾರ ಮೋಹನ್ ಬಳಿ ದಾಖಲೆ ಇಲ್ಲದ ₹ 25.76 ಲಕ್ಷ ನಗದು ಪತ್ತೆಯಾಗಿದೆ. ಸರ್ಕಾರ ಪ್ರಕರಣವನ್ನು ಎಸಿಬಿಗೆ ವಹಿಸಿದೆ. ಆದರೆ, ಪುಟ್ಟರಂಗಶೆಟ್ಟಿ ಸಚಿವ ಸ್ಥಾನದಲ್ಲಿ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಸರ್ಕಾರದಲ್ಲಿ ಇರುವ ಪ್ರಭಾವಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುವ ಸಾಧ್ಯತೆಯ ಕಾರಣ ಸಿಬಿಐಗೆ ಒಪ್ಪಿಸಬೇಕು. ಸಚಿವ ಪುಟ್ಟರಂಗಶೆಟ್ಟಿ ಅವರ ರಾಜೀನಾಮೆ ಪಡೆದುಕೊಳ್ಳಬೇಕು. ಪ್ರಕರಣದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್ ದರ ಕಡಿಮೆ ಮಾಡಿದರೂ ರಾಜ್ಯ ಸರ್ಕಾರ ಅವುಗಳ ಮೇಲಿನ ಸುಂಕ ಕಡಿತಗೊಳಿಸಿಲ್ಲ. ಸಾಲ ಮನ್ನಾ ಘೋಷಣೆ ಮಾಡಿದರೂ ಈವರೆಗೆ ಮನ್ನಾ ಮಾಡಿಲ್ಲ. ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಕಡಿಮೆ ಮಾಡಲು ಹಾಗೂ ಸಾಲ ಮನ್ನಾ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರಸಿಂಗ್ ಠಾಕೂರ್, ಬಾಬುರಾವ್ ಕಾರಬಾರಿ, ಸ್ಲಂ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುವಾಲಿ, ಮುಖಂಡರಾದ ಬಾಬುರಾವ್ ಮದಕಟ್ಟಿ, ಸುಭಾಷ ಮಡಿವಾಳ, ಮಹೇಶ ಪಾಲಂ, ಹಣಮಂತ ಬುಳ್ಳಾ, ಸಂಜು ಸ್ವಾಮಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !