ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಧರಣಿ

7
ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅವ್ಯವಹಾರ

ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಧರಣಿ

Published:
Updated:
Deccan Herald

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಧರಣಿ ಸತ್ಯಾಗ್ರಹ ನಡೆಸಿದರು.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಕಳುಹಿಸಿದರು. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸ್ಥಾಪನೆ ಹಾಗೂ ಆಸ್ಪತ್ರೆ ನಿರ್ಮಾಣದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಭ್ರಷ್ಟಾಚಾರ ನಿಗ್ರಹ ದಳ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಹಾಗೂ ಅವರ ಸಂಬಂಧಿಗಳೂ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಎಸಿಬಿ ತನಿಖೆಯಿಂದ ಅವ್ಯವಹಾರ ಬೆಳಕಿಗೆ ಬರಲು ಸಾಧ್ಯವಿಲ್ಲ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಕಂಪ್ಯೂಟರ್‌ಗಳನ್ನು ಸುಡುವ ಪ್ರಯತ್ನ ನಡೆದಿದೆ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯು ಆಡಳಿತ ಮಂಡಳಿಯ ತಪ್ಪು ನಿರ್ಣಯಗಳಿಂದಾಗಿ ಹಾನಿ ಅನುಭವಿಸಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ಆಡಳಿತ ಮಂಡಳಿಯನ್ನು ವಜಾಗೊಳಿಸಬೇಕು. ಆಡಳಿತಾಧಿಕಾರಿಯನ್ನು ನೇಮಿಸಿ ಕಾರ್ಖಾನೆಗೆ ₹ 100 ಕೋಟಿ ಅನುದಾನ ಒದಗಿಸಬೇಕು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಳೆದ ವರ್ಷ ಕಬ್ಬು ಪೂರೈಸಿದ ರೈತರ ₹ 59 ಕೋಟಿ ಬಾಕಿ ಹಣ ಕೊಡಿಸಬೇಕು ಎಂದು ಆಗ್ರಹಿಸಿದರು.

ಅಧಿಕಾರಕ್ಕೆ ಬರುವ ಮುನ್ನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದೀಗ ನೂರೆಂಟು ನೆಪ ಹೇಳಿ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ. ಮುಖ್ಯಮಂತ್ರಿ ವಚನ ಭ್ರಷ್ಟರಾಗದೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಿ.ಕೆ. ಸಿದ್ರಾಮ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜಯಕುಮಾರ ಕಾಂಗೆ, ಈಶ್ವರಸಿಂಗ್ ಠಾಕೂರ್, ಬಾಬುರಾವ್ ಕಾರಭಾರಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಎಸ್.ಪಾಟೀಲ ಗಾದಗಿ, ಮುಖಂಡರಾದ ಬಾಬುರಾವ್ ಮದಕಟ್ಟಿ, ದತ್ತಾತ್ರೇಯ ತೂಗಾಂವಕರ್, ಸೋಮನಾಥ ಪಾಟೀಲ, ಶಿವರಾಜ ಗಂದಗೆ, ಶಿವರಾಜಸಿಂಗ್ ರಾಜಪೂತ್, ಅರಹಂತ ಸಾವಳೆ, ಜಗನ್ನಾಥ ಪಾಟೀಲ, ವಿಶ್ವನಾಥ ಪಾಟೀಲ, ಶಿವಪುತ್ರಪ್ಪ ಗೌರ, ಕಿರಣ ಪಾಟೀಲ, ವೀರಣ್ಣ ಹಲಗೆ, ರೌಫೊದ್ದಿನ್ ಕಚೇರಿವಾಲೆ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !