ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಗೋಹತ್ಯೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Published 6 ಫೆಬ್ರುವರಿ 2024, 15:15 IST
Last Updated 6 ಫೆಬ್ರುವರಿ 2024, 15:15 IST
ಅಕ್ಷರ ಗಾತ್ರ

ಬೀದರ್‌: ಗೋ ಹತ್ಯೆ ತಡೆಯಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

ಪಕ್ಷದ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದವರೆಗೆ ಬಿಜೆಪಿ ಮುಖಂಡರು, ಶಾಸಕರು ಹಾಗೂ ಕಾರ್ಯಕರ್ತರು ರ್‍ಯಾಲಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಶಾಸಕ ಪ್ರಭು ಚವಾಣ್‌ ಮಾತನಾಡಿ, ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ನಮ್ಮ ಸರ್ಕಾರವಿದ್ದಾಗ ಗೋವುಗಳ ಹತ್ಯೆ ತಡೆಯಲು ತಂದಿದ್ದ ಕಾಯ್ದೆಯನ್ನು ರದ್ದುಪಡಿಸಲಾಗಿದೆ. ಗೋಶಾಲೆಗಳಿಗೆ ಸೂಕ್ತ ಅನುದಾನ ನೀಡುತ್ತಿಲ್ಲ. ರಾಜ್ಯ ಸರ್ಕಾರ ಮೂಕ ಪ್ರಾಣಿಗಳ ಮೇಲೆ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿದರು.

ಮೂಕಪ್ರಾಣಿಗಳ ಶಾಪ ರಾಜ್ಯ ಸರ್ಕಾರಕ್ಕೆ ತಟ್ಟಲಿದೆ. ಶೀಘ್ರದಲ್ಲಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ರೈತರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನ ಕೊಡುತ್ತಿಲ್ಲ. ರೈತರ ನೆರವಿಗೆ ಬರುತ್ತಿಲ್ಲ ಎಂದು ದೂರಿದರು.

ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜಾನುವಾರು ಹತ್ಯೆ ಮತ್ತು ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಅದಕ್ಕೆ ಪೂರಕವಾಗಿ ಅನೇಕ ಕ್ರಮಗಳನ್ನು ಜರುಗಿಸಲಾಗಿತ್ತು. ಚೆಕ್‍ಪೋಸ್ಟ್‌ಗಳನ್ನು ತೆರೆದು, ಗೋವುಗಳನ್ನು ಕಸಾಯಿಖಾನೆಗಳಿಗೆ ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ, ಈಗ ಆ ಕೆಲಸವಾಗುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಶಾಸಕ ಶರಣು ಸಲಗರ ಮಾತನಾಡಿ, ಗೋವುಗಳ ಸಾಕಣೆ ಮಾಡುವವರಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಪ್ರೋತ್ಸಾಹ ಧನ ಕೊಡುತ್ತಿದ್ದೆವು. ಈಗ ಅದನ್ನು ಕೊಡುತ್ತಿಲ್ಲ. ಶೀಘ್ರ ಪ್ರೋತ್ಸಾಹ ಧನ ಕೊಡಬೇಕು. ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೇಕು. ಕಸಾಯಿಖಾನೆಗಳನ್ನು ಬಂದ್ ಮಾಡಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಗೋಹತ್ಯೆ ತಡೆಯಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಗ್ರಾಮ ಮಟ್ಟದಿಂದ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಯರನಳ್ಳಿ, ಮಾಧವ ಹೊಸೂರೆ, ಬೀದರ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೇಂದ್ರ ಪೂಜಾರಿ, ಬೀದರ್‌ ನಗರ ಘಟಕದ ಅಧ್ಯಕ್ಷ ಶಶಿ ಹೊಸಳ್ಳಿ, ಔರಾದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಪನ್ನಾಳೆ, ಪ್ರಮುಖರಾದ ರಾಜಶೇಖರ ನಾಗಮೂರ್ತಿ, ರಾಜಕುಮಾರ ಪಾಟೀಲ ನೆಮತಾಬಾದ, ಬಾಬುರಾವ ಕಾರಬಾರಿ, ನರೇಶ ಗೌಳಿ, ವಿಕ್ರಂ ಮುದಾಳೆ, ನಿತಿನ್‌ ನವಲಕೇರೆ, ಸಂಜು ಭೀಮನಗರ, ಭೂಷಣ ಫಾಟಕ್‌, ರೋಶನ್‌ ವರ್ಮಾ, ವೀರು ದಿಗ್ವಾಲ್, ಹಣಮಂತ ಬುಳ್ಳಾ, ನವಿನ್‌ ಚಿಟ್ಟಾ, ಬಸವರಾಜ ಪವಾರ, ಶಿವಪುತ್ರ ವೈದ್ಯ, ಶ್ರೀನಿವಾಸ ಚೌಧರಿ ಇತರರಿದ್ದರು.

ಗೋಶಾಲೆಗಳಿಗೆ ಸೂಕ್ತ ಅನುದಾನ ಕೊಡಿ ಕಸಾಯಿಖಾನೆಗಳನ್ನು ಬಂದ್‌ ಮಾಡಿಸಿ ಸಾರ್ವಜನಿಕ ಸ್ಥಳದಲ್ಲಿ ಮಾಂಸ ಮಾರಾಟ ತಡೆಯಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT