ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಯುವ ಮೋರ್ಚಾ ಸಂಕಲ್ಪ ಯಾತ್ರೆಗೆ ಚಾಲನೆ

ನರೇಂದ್ರ ಮೋದಿಗೆ ಮತ್ತೆ ಪ್ರಧಾನಿಯಾಗಿಸುವ ಕನಸು
Last Updated 21 ಡಿಸೆಂಬರ್ 2018, 14:00 IST
ಅಕ್ಷರ ಗಾತ್ರ

ಬೀದರ್: ‘2019ರ ಲೋಕಸಭೆ ಚುನಾವಣೆಯಲ್ಲೂ ಬಹುಮತ ಪಡೆದು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬೀದರ್‌ನಿಂದ ರಾಜ್ಯದಾದ್ಯಂತ ಸಂಕಲ್ಪ ಯಾತ್ರೆ ಆರಂಭಿಸಲಾಗಿದೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಹೇಳಿದರು.

‘ಸಂಕಲ್ಪ ಯಾತ್ರೆಯೊಂದಿಗೆ ಚುನಾವಣಾ ಪ್ರಚಾರವನ್ನೂ ಆರಂಭಿಸಲಾಗಿದೆ. ಪ್ರಚಾರಕ್ಕೆ ಯುವ ಶಕ್ತಿಯನ್ನು ಬಳಸಿಕೊಳ್ಳಲಾಗುವುದು. ರಾಜ್ಯ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ವಿವರಿಸಲಾಗುವುದು’ ಎಂದು ನಗರದಲ್ಲಿ ಶುಕ್ರವಾರ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರ್ಕಾರ ಯಾವುದೇ ರೀತಿಯ ಕಾಳಜಿ ವಹಿಸುತ್ತಿಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇವಲ ರಾಮನಗರ ಹಾಗೂ ಹಾಸನ ಜಿಲ್ಲೆಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ’ ಎಂದು ಟೀಕಿಸಿದರು.

‘ಸರ್ಕಾರದ ಸಾಲ ಮನ್ನಾದ ಷರತ್ತುಗಳಿಗೆ ಬ್ಯಾಂಕ್‌ಗಳು ಒಪ್ಪುತ್ತಿಲ್ಲ. ಅಧಿಕಾರಕ್ಕೆ ಬಂದು ಏಳು ತಿಂಗಳಾದರೂ ರೈತರ ಒಂದು ಪೈಸೆ ಸಾಲ ಕೂಡ ಮನ್ನಾ ಆಗಿಲ್ಲ’ ಎಂದು ಟೀಕಿಸಿದರು.

‘ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ₹100 ಕೋಟಿ ನೆರವು ಕೊಡುವ ಭರವಸೆ ನೀಡಿದ್ದರು. ಕಳೆದ ತಿಂಗಳು ಬೀದರ್‌ಗೆ ಭೇಟಿ ನೀಡಿದ್ದಾಗ ₹ 20 ಕೋಟಿ ಕೊಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಈ ವರೆಗೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ’ ಎಂದು ಆರೋಪಿಸಿದರು.

‘ಜೆಡಿಎಸ್ ಎನ್ನುವ ಪಾಪದ ಕೂಸನ್ನು ಹೊತ್ತುಕೊಂಡು ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಸಮ್ಮಿಶ್ರ ಸರ್ಕಾರ ಜನತೆಯ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಜನತೆಗೆ ಯಾವುದೇ ರೀತಿಯ ಲಾಭವಾಗಿಲ್ಲ’ ಎಂದರು.

‘ಸರ್ಕಾರ, ಜಿಲ್ಲೆಯ 4 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿದೆ. ಭಾಲ್ಕಿಯಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಆದರೂ, ಕೆಪಿಸಿಸಿ ಕಾರ್ಯಧ್ಯಕ್ಷರಾದ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ಬರ ಪೀಡಿತ ತಾಲ್ಲೂಕು ಘೋಷಣೆಗೆ ಕಾಳಜಿ ತೋರುತ್ತಿಲ್ಲ’ ಎಂದು ಆಪಾದಿಸಿದರು.

ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ತಮ್ಮೇಶಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ ಪಾಟೀಲ, ಪ್ರಧಾನ ಕಾರ್ಯದರ್ಶಿ ಗುರುನಾಥ ರಾಜಗೀರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT