ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | 'ಪರಿಶಿಷ್ಟರ ಹಣ ‘ಗ್ಯಾರಂಟಿ’ಗೆ ಬಳಕೆ ಆರೋಪ'

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
Published 5 ಫೆಬ್ರುವರಿ 2024, 16:07 IST
Last Updated 5 ಫೆಬ್ರುವರಿ 2024, 16:07 IST
ಅಕ್ಷರ ಗಾತ್ರ

ಬೀದರ್‌: ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಮುಖಂಡರು ರಾಜ್ಯದ ಕಾಂಗ್ರೆಸ್‌ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ರಾಜ್ಯ ಸರ್ಕಾರವು ರೈತ ಮತ್ತು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ಅದು ಖಂಡನಾರ್ಹ ಎಂದರು.

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ/ ಪಂಗಡದವರಿಗೆ ಮೀಸಲಿಟ್ಟಿರುವ ಅನುದಾನವನ್ನು ‘ಗ್ಯಾರಂಟಿ’ಗಳಿಗೆ ವಿನಿಯೋಗಿಸುತ್ತಿದೆ. ಇದರಿಂದ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಟೀಕಿಸಿದರು.  ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಿಹಂತ ಸಾವಳೆ ಅನುಮೋದಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು. ಶಾಸಕ ಶರಣು ಸಲಗಾರ ವಿಷಯ ಮಂಡಿಸಿದರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣಿ ಅನುಮೋದಿಸಿದರು.

ಇದಕ್ಕೂ ಮುನ್ನ ಕಾರ್ಯಕಾರಣಿ ಉದ್ಘಾಟಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಹಳ ಬಲಿಷ್ಠವಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕೆಲಸ ನಡೆದಿಲ್ಲ. ಆರರಲ್ಲಿ ನಾಲ್ಕು ಕಡೆ ಬಿಜೆಪಿ ಗೆದ್ದಿದೆ. ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆದ್ದು ಹ್ಯಾಟ್ರಿಕ್‌ ಬಾರಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಶಾಸಕ ಪ್ರಭು ಚವಾಣ್‌ ಮಾತನಾಡಿ, ಕಾರ್ಯಕರ್ತರ ಪರಿಶ್ರಮದಿಂದ ನಾನು ನಾಲ್ಕು ಸಲ ಶಾಸಕನಾಗಿದ್ದೇನೆ. ಎರಡು ಸಲ ಮಂತ್ರಿಯಾಗಿದ್ದೇನೆ. ಬರುವ ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಕಾರ್ಯಕರ್ತರು ಹಗಲಿರುಳು ದುಡಿದು ಮೋದಿಯವರ ಕೈ ಬಲಪಡಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಬಿಜೆಪಿ ಶಿಸ್ತಿನ ಪಕ್ಷವಾಗಿದೆ. ಕಾರ್ಯಕರ್ತರ ಶ್ರಮದಿಂದ ಚುನಾವಣೆಯಲ್ಲಿ ಗೆಲ್ಲುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೇಳಿದರು.

ಬಿಜೆಪಿ ಕಲಬುರಗಿ ಸಹ ಪ್ರಭಾರಿ ಈಶ್ವರ ಸಿಂಗ್‌ ಠಾಕೂರ, ಕಲಬುರಗಿ ವಿಭಾಗೀಯ ಕ್ಲಸ್ಟರ್ ಪ್ರಮುಖ ರಾಜಕುಮಾರ ಪಾಟೀಲ ತೆಲ್ಕೂರ, ಕಲಬುರಗಿ ವಿಭಾಗೀಯ ಪ್ರಭಾರಿ ಅರುಣ ಬಿನ್ನಾಡಿ, ಸಹ ಪ್ರಭಾರಿ ಸೂರ್ಯಕಾಂತ ಧೋಣ, ರಾಷ್ಟ್ರೀಯ ಹಿಂದುಳಿದ ಘಟಕದ ಕಾರ್ಯದರ್ಶಿ ಜೈಕುಮಾರ ಕಾಂಗೆ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರೌಫೋದ್ದಿನ್‌ ಕಚೇರಿವಾಲೆ, ಬೀದರ್‌ ಲೋಕಸಭಾ ಕ್ಷೇತ್ರದ ಪ್ರಭಾರಿ ಅಮರನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಪಾಟೀಲ ಗಾದಗಿ, ಮುಖಂಡ ಪ್ರಕಾಶ ಖಂಡ್ರೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT