ಗುರುವಾರ , ಫೆಬ್ರವರಿ 25, 2021
29 °C
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಸೂಚನೆ

ಕೊಳವೆಬಾವಿ ಗುತ್ತಿಗೆ ಪಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಅವರು ಇಲ್ಲಿಯ ತೋಟಗಾರಿಕೆ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಹುಮನಾಬಾದ್, ಬಸವಕಲ್ಯಾಣ ಮತ್ತು ಬೀದರ್ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಕುಡಿಯುವ ನೀರಿನ ಪೂರೈಕೆ ಮತ್ತು ಕೃಷಿ ಇಲಾಖೆಯ ಪ್ರಗತಿ ಕಾರ್ಯಗಳ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಕೊಳವೆಬಾವಿ ಬತ್ತಿವೆ ಎಂದಾಕ್ಷಣ ಅಲ್ಲಿ ಕೊಳವೆಬಾವಿ ಕೊರೆಸಿ ಸಮಸ್ಯೆ ನಿವಾರಿಸಬೇಕು ಎಂದು ಅವರು ತಿಳಿಸಿದರು.

ಹೊಸ ಕೊಳವೆಬಾವಿ ಕೊರೆಸಿದರೂ ನೀರು ಲಭಿಸದಿದ್ದಲ್ಲಿ ಸ್ಥಳೀಯ ಖಾಸಗಿ ಕೊಳವೆಬಾವಿಗಳನ್ನು ಗುತ್ತಿಗೆ ಪಡೆದು ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ್ ಗಂಗ್ವಾರ್ ಮಾತನಾಡಿ,‘ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಸಿ, ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಗ್ರಾಮ ಪಂಚಾಯಿತಿ ವತಿಯಿಂದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅಂತರ ಕಾಯ್ದುಕೊಂಡು ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ’ ಎಂದರು.

ಜಿಪಂ ಸದಸ್ಯರ ಸಲಹೆ: ಗ್ರಾಮೀಣ ಭಾಗದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲವು ವೈದ್ಯರು ಸಾಮಾನ್ಯ ಕಾಯಿಲೆ ಇರುವವರನ್ನೂ ಪರಿಶೀಲಿಸದೆ, ನಿಷ್ಕಾಳಜಿ ಮಾಡಿ, ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸುವುದು ಕಂಡುಬರುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸಾಮಾನ್ಯ ಕಾಯಿಲೆಗಳಿಗೆ ತುರ್ತು ಚಿಕಿತ್ಸೆ ಸಿಗುವ ಹಾಗೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.

ಬೀಜ ದಾಸ್ತಾನು ಪ್ರಕ್ರಿಯೆಯಲ್ಲಿ: ಜಿಲ್ಲೆಯಲ್ಲಿ ರೈತರ ಬಿತ್ತನೆಗೆ ಅನುಕೂಲವಾಗುವಂತೆ ಸಮರ್ಪಕ ಬಿತ್ತನೆ ಬೀಜದ ದಾಸ್ತಾನು ಕಾರ್ಯ ಪ್ರಕ್ರಿಯೆಯಲ್ಲಿದೆ. 13,100 ಟನ್ ಡಿಎಪಿ ಮತ್ತು 12,500 ಟನ್ ಯೂರಿಯಾ ರಸಗೊಬ್ಬರದ ದಾಸ್ತಾನು ಇದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಅವರು ಸಭೆಗೆ ಮಾಹಿತಿ ನೀಡಿದರು.

ಸಿಇಒ ಸೂಚನೆ: ಇದು ಬಿತ್ತನೆಯ ಸಮಯ. ಹೀಗಾಗಿ ಜಿಲ್ಲೆಯ ರೈತರ ಬೇಡಿಕೆಯ ಅನುಸಾರ ಬೀಜ ಮತ್ತು ಗೊಬ್ಬರದ ದಾಸ್ತಾನಿಗೆ ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಿಇಒ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣ್ ಬುಳ್ಳಾ, ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.