ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷಾಂತ್ಯಕ್ಕೆ ಬ್ರಿಮ್ಸ್‌ ಆಸ್ಪತ್ರೆಗೆ ಹೊಸ ರೂಪ

ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಹೇಳಿಕೆ
Last Updated 19 ಜೂನ್ 2019, 15:57 IST
ಅಕ್ಷರ ಗಾತ್ರ

ಬೀದರ್: ‘ವರ್ಷಾಂತ್ಯಕ್ಕೆ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಹೊಸ ರೂಪ ಪಡೆದುಕೊಳ್ಳಲಿದೆ. ಡಿಸೆಂಬರ್ 31ರೊಳಗೆ ಸಿಬ್ಬಂದಿ ನೇಮಕ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ನಿವಾರಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಕೊಡುವಂತೆ ಮಾಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಹೇಳಿದರು.

ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಬ್ರಿಮ್ಸ್‌ ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರ ಹಾಗೂ ವೈದ್ಯಕೀಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ಸಿಬ್ಬಂದಿ ಖಾಸಗಿ ಆಸ್ಪತ್ರೆಯಲ್ಲೂ ಕೆಲಸ ಮಾಡುತ್ತಿರುವುದು ಕಂಡು ಬಂದಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲು ಆದೇಶ ನೀಡಲಾಗಿದೆ’ ಎಂದು ತಿಳಿಸಿದರು.

‘ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ನೌಕರರನ್ನು ನೇಮಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಈಗಾಗಲೇ ಟೆಂಡರ್‌ ಕರೆಯಲಾಗಿದೆ’ ಎಂದು ಹೇಳಿದರು.

‘ಹಳೆಯ ಕಟ್ಟಡದಲ್ಲಿರುವ ಎಂಆರ್‌ಐ ಯಂತ್ರವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಐದು ಹೊಸ ಶಸ್ತ್ರಚಿಕಿತ್ಸಾ ಘಟಕ ಆರಂಭಿಸಲಾಗುವುದು. 30 ವೆಂಟಿಲೇಟರ್ ಖರೀದಿಸಲಾಗುವುದು. 10 ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಲಾಗುವುದು. ಒಳಚರಂಡಿ ವ್ಯವಸ್ಥೆ ಹಾಗೂ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಮಾಡಲಾಗುವುದು. ಸಂಸ್ಥೆಯಲ್ಲಿ ₹ 66 ಕೋಟಿ ಇದೆ. ಅಗತ್ಯ ಬಿದ್ದರೆ ಹೆಚ್ಚುವರಿಯಾಗಿ ಅನುದಾನ ಒದಗಿಸಲಾಗುವುದು’ ಎಂದರು.

‘ಆಸ್ಪತ್ರೆಗೆ 234 ವೈದ್ಯರ ಅಗತ್ಯ ಇದೆ. 134 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. 1,031 ನರ್ಸ್‌ಗಳ ಪೈಕಿ 545 ನರ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ಇನ್ನುಳಿದವರನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಆಸ್ಪತ್ರೆ ಕಟ್ಟಡದ ಗುಣಮಟ್ಟದ ಬಗ್ಗೆ ಅನೇಕ ದೂರುಗಳು ಬಂದಿವೆ. ಥರ್ಡ್‌ ಪಾರ್ಟಿಯಿಂದ ತನಿಖೆ ನಡೆಸಲಾಗುವುದು. ಲೋಪ ಕಂಡು ಬಂದರೆ ಕಾನೂನು ಪ್ರಕಾರ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ, ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಕ್ರೀಡಾ ಸಚಿವ ರಹೀಂ ಖಾನ್‌,ಸಂಸದ ಭಗವಂತ ಖೂಬಾ, ವಿಧಾನ ಪರಿಷತ್‌ ಸದಸ್ಯ ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್, ಬ್ರಿಮ್ಸ್‌ ವೈದ್ಯಕೀಯ ನಿರ್ದೇಶಕ ಡಾ.ಕ್ಷೀರಸಾಗರ ಇದ್ದರು.

......BOX1....

ಅಧಿಕಾರಿಗಳಲ್ಲಿ ಸಮನ್ವಯದ ಕೊರತೆ
ಬೀದರ್: ‘ಬ್ರಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಜಂಟಿ ಸಭೆ ನಡೆಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ಬ್ರಿಮ್ಸ್‌ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೀದರ್‌ನ ಎಸ್‌ಎಂಎಸ್‌ ಲ್ಯಾಬ್‌ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಆಯುಷ್ಮಾನ ಭಾರತ ಯೋಜನೆಯ ಸಹಭಾಗಿತ್ವದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ’ ಎಂದು ತಿಳಿಸಿದರು.

‘ರೋಷನ್‌ ಬೇಗ್‌ ಅವರ ವಿರುದ್ಧ ಪಕ್ಷ ಕ್ರಮಕೈಗೊಂಡಿರುವ ಬಗ್ಗೆ ನಾನು ಏನೂ ಮಾತನಾಡಲಾರೆ. ಪಕ್ಷದ ವರಿಷ್ಠರು ಹೇಳಿಕೆಗಳನ್ನು ಕೊಡದಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಪಕ್ಷದ ಆಂತರಿಕ ವಿಷಯವನ್ನು ಬಹಿರಂಗವಾಗಿ ಮಾತನಾಡಲಾಗದು’ ಎಂದು ಹೇಳಿದರು.


ಆರೋಗ್ಯ ಕಾರ್ಡ್ ವಿತರಣೆ ನಡೆಯಲಿ:
‘ಜಿಲ್ಲೆಯಲ್ಲಿ ಆಯುಷ್ಮಾನ ಭಾರತ ಯೋಜನೆಯಡಿ ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಚುರುಕಾಗಬೇಕು. ಯೋಜನೆಯ ಫಲಾನುಭವಿಗಳಿಗೆ ಸುಲಭವಾಗಿ ಕ್ಲೇಮ್‌ಗಳು ದೊರೆಯುವಂತಾಗಲು ಅಧಿಕಾರಿ ಹುದ್ದೆಯನ್ನು ಶೀಘ್ರ ಭರ್ತಿ ಮಾಡಬೇಕು’ ಎಂದು ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಆಸ್ಪತ್ರೆಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಎಲ್ಲ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ರಕ್ಷಾ ಸಮಿತಿಯನ್ನು ಇನ್ನಷ್ಟು ಬಲಪಡಿಸಬೇಕು. ಜಿಲ್ಲಾಧಿಕಾರಿಯನ್ನು ಈ ಸಮಿತಿಗೆ ಸೇರ್ಪಡೆಗೊಳಿಸಿದಲ್ಲಿ ಕುಡಿಯುವ ನೀರು, ವಿದ್ಯುತ್, ಒಳಚರಂಡಿ ಸೇರಿದಂತೆ ನಾನಾ ಸಮಸ್ಯೆಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ನಿವಾರಿಸಲು ಅನುಕೂಲವಾಗುತ್ತದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ ಪಾಂಡೆ ತಿಳಿಸಿದರು.

‘ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ವಿಕಲಚೇತನ ವ್ಯಕ್ತಿಗಳಿಗೆ ಯು.ಡಿ.ಐ.ಡಿ(ವಿಕಲಚೇತನ ವಿಶಿಷ್ಟ ಗುರುತಿನ ಚೀಟಿ) ನೀಡುತ್ತಿದೆ. ಬೀದರ್ ಜಿಲ್ಲೆಯಲ್ಲಿ 1,418 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಕೇವಲ 4 ಜನರಿಗೆ ಕಾರ್ಡ್ ವಿತರಿಸಲಾಗಿದೆ. ನೋಂದಣಿಯಾದ ಎಲ್ಲರಿಗೂ ಜುಲೈ ಅಂತ್ಯದೊಳಗಾಗಿ ಕಾರ್ಡ್ ವಿತರಿಸಬೇಕು’ ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.

‘ಎಲ್ಲ ಬ್ರಿಮ್ಸ್ ಬೋಧಕ ಆಸ್ಪತ್ರೆಗಳಲ್ಲಿ ಹಣಕಾಸು ವ್ಯವಹಾರವನ್ನು ನಿರ್ವಹಿಸಲು ಲೆಕ್ಕ ಪರಿಶೋಧಕ ಉಪ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ವಹಿಸಬೇಕು’ ಎಂದು ಹೇಳಿದರು.

......BOX2....
ಅಧಿಕಾರಿಗಳ ವಿರುದ್ಧ ಅಸಮಾಧಾನ
ಬೀದರ್: ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಹಾಗೂ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರು ಜಂಟಿಯಾಗಿ ನಡೆಸಿದ ಸಭೆಯಲ್ಲಿ ಬ್ರಿಮ್ಸ್‌ ಅಧಿಕಾರಿಗಳ ವಿರುದ್ಧ ಹಲವರು ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ‘ಬ್ರಿಮ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಯ ಎದುರೇ ಲ್ಯಾಬ್‌ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ರಕ್ತ ತಪಾಸಣೆ ಮಾಡುತ್ತಿಲ್ಲ. ಕೆಲ ವೈದ್ಯರು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಸಚಿವರ ಗಮನಕ್ಕೆ ತಂದರು.

ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಒಂದು ಸಾವಿರ ಶಸ್ತ್ರಚಿಕಿತ್ಸೆ ಮಾಡಬಹುದು. ಆದರೆ, 232 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಒಂದು ವರ್ಷದ ಅವಧಿಯಲ್ಲಿ 900 ವರೆಗೆ ಹೆರಿಗೆ ಮಾಡಬಹುದಾದರೂ 650 ಹೆರಿಗೆಗಳು ಮಾತ್ರ ಆಗುತ್ತಿವೆ. ದೊಡ್ಡ ಆಸ್ಪತ್ರೆ ಇದೆ. ಸಕಲ ಸೌಲಭ್ಯಗಳು ಇರುವ ಕಾರಣ ಹೆರಿಗೆ ಪ್ರಮಾಣ ಹೆಚ್ಚಾಗಬೇಕು. ಬಡ ಕುಟುಂಬದ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆರೋಗ್ಯ ಇಲಾಖೆಯ ನಿರ್ದೇಶಕರು ಹೇಳಿದರು.

ಬ್ರಿಮ್ಸ್‌ನ ಕೆಲ ವೈದ್ಯರು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಬ್ರಿಮ್ಸ್‌ನಲ್ಲಿ ರೋಗಿಗಳನ್ನು ಸರಿಯಾಗಿ ನೋಡುತ್ತಿಲ್ಲ. ಬ್ರಿಮ್ಸ್‌ ಪ್ರಭಾರ ವೈದ್ಯಕೀಯ ನಿರ್ದೇಶಕರು ತಮ್ಮ ಪತ್ನಿಗೆ ಬಡತಿ ನೀಡಿದ್ದಾರೆ. ಬ್ರಿಮ್ಸ್‌ ಆಡಳಿತ ವ್ಯವಸ್ಥೆ ಕೆಟ್ಟು ಹೋಗಿದೆ. ಹೊಸ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಸಂಘಟನೆಯೊಂದರ ಮುಖಂಡರು ಸಚಿವರಿಗೆ ಮನವಿ ಮಾಡಿದರು.

......BOX3....
ಬ್ರಿಮ್ಸ್‌ ಬೋಧಕ ಆಸ್ಪತ್ರೆಗೆ ಭೇಟಿ
ಬೀದರ್‌: ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ, ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ಕ್ರೀಡಾ ಸಚಿವ ರಹೀಂ ಖಾನ್‌ ಬ್ರಿಮ್ಸ್‌ ಬೋಧಕ ಆಸ್ಪತ್ರೆಗೆ ಭೇಟಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು.

ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ, ವಾರ್ಡ್‌ಗಳಲ್ಲಿರುವ ಹಾಸಿಗೆಗಳ ಮೇಲೆ ಬಿದ್ದಿರುವ ದೂಳು, ಮೆಟ್ಟಿಲುಗಳ ಬದಿಯಲ್ಲಿ ಗುಟಕಾ ತಿಂದು ಉಗುಳಿರುವುದು ಹಾಗೂ ಲಿಫ್ಟ್‌ಗಳು ಬಂದ್‌ ಆಗಿರುವುದನ್ನು ವೀಕ್ಷಿಸಿದರು. ಕಟ್ಟಡದ ಛಾವಣಿ ಬಿದ್ದ ಸ್ಥಳಕ್ಕೆ ಭೇಟಿ ಕೊಡಲಿಲ್ಲ. ಆದರೆ ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.

ಗುತ್ತಿಗೆದಾರರು ಮೂರು ತಿಂಗಳಿಂದ ವೇತನ ಕೊಡದಿರುವಬಗ್ಗೆ ‘ಡಿ’ ದರ್ಜೆಯ ನೌಕರರು ಸಚಿವರಿಗೆ ದೂರು ನೀಡಿದರು. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶೂಶ್ರೂಯಕಿಯರು ತಮ್ಮ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT