ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಮ್ಸ್‌ ಹಗರಣ ಎಸಿಬಿಯಿಂದ ಲೋಕಾಯುಕ್ತಕ್ಕೆ: ಸಚಿವ ಶರಣಪ್ರಕಾಶ ಪಾಟೀಲ

ಎಂಎಲ್‌ಸಿ ಅರವಿಂದಕುಮಾರ ಅರಳಿ ಪ್ರಶ್ನೆಗೆ ಸಚಿವರ ಉತ್ತರ
Published 11 ಡಿಸೆಂಬರ್ 2023, 16:25 IST
Last Updated 11 ಡಿಸೆಂಬರ್ 2023, 16:25 IST
ಅಕ್ಷರ ಗಾತ್ರ

ಬೀದರ್‌: ‘ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಬ್ರಿಮ್ಸ್‌) ನಡೆದ ₹18 ಕೋಟಿ ಹಗರಣದ ತನಿಖೆಯನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವಹಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ತಡೆಯಾಜ್ಞೆ ತೆರವುಗೊಳಿಸಲು ಆಕ್ಷೇಪಣೆ, ಹೇಳಿಕೆಗಳು ಮತ್ತು ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ‘ಮೆಮೊ ಫಾರ್‌ ಪೋಸ್ಟಿಂಗ್‌’ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಕರಣದ ತನಿಖೆ ಮುಚ್ಚಿ ಹಾಕುವ ಅಥವಾ ಭ್ರಷ್ಟ ಅಧಿಕಾರಿಗಳ ಬೆಂಬಲಕ್ಕೆ ಸರ್ಕಾರ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಶಾಮೀಲಾಗಿರುವ ಕಚೇರಿ ಸೂಪರಿಂಟೆಂಡೆಂಟ್‌ ಬಾಬು ಕೋಟಿ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಅಧಿಕಾರಿ/ಸಿಬ್ಬಂದಿಗೆ ಪದೋನ್ನತಿ ನೀಡಿಲ್ಲ. ಬಾಬು ಕೋಟಿಯವರು ಶಿಕ್ಷಣ ಇಲಾಖೆಯಿಂದ ಬಿಡುಗಡೆಗೊಂಡು ಅವರ ಮಾತೃ ಇಲಾಖೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಿಂತಿರುಗಿದ ನಂತರ ಪದೋನ್ನತಿ ಅವರ ಮಾತೃ ಇಲಾಖೆಯಿಂದ ಪಡೆದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

‘ಗೌರವ ಡಾಕ್ಟರೇಟ್‌ಗಿಲ್ಲ ಮಾನ್ಯತೆ’

‘ರಾಜ್ಯದಲ್ಲಿ ಖಾಸಗಿ ಸಂಸ್ಥೆಯವರು ಗೌರವ ಡಾಕ್ಟರೇಟ್‌ ಪದವಿ ನೀಡಿ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಇಂತಹ ಗೌರವ ಡಾಕ್ಟರೇಟ್‌ ಪದವಿ ಪಡೆದವರಿಗೆ ರಾಜ್ಯ/ಕೇಂದ್ರ ಸರ್ಕಾರದಿಂದ ಯಾವುದೇ ಮಾನ್ಯತೆ ಇರುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಅರವಿಂದಕುಮರ ಅರಳಿಯವರು ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಯಾವುದೇ ಸಂಸ್ಥೆ ನಕಲಿ/ಅನಧಿಕೃತ ಪದವಿ/ಗೌರವ ಡಾಕ್ಟರೇಟ್‌ ಪ್ರದಾನ ಮಾಡುತ್ತಿರುವುದು ಗಮನಕ್ಕೆ ಬಂದರೆ ಅಂತಹ ವ್ಯಕ್ತಿ/ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT