ಶನಿವಾರ, ಜನವರಿ 28, 2023
20 °C

ಅಚ್ಚುಕಟ್ಟಾಗಿ ಬೀದರ್ ಉತ್ಸವ ಆಚರಿಸಿ: ಭಗವಂತ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಉತ್ಸವಕ್ಕಾಗಿಯೇ ರಚಿಸಲಾಗಿರುವ ಸಮಿತಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಬೀದರ್‌ ಉತ್ಸವ ಯಶಸ್ವಿಗೊಳಿಸಬೇಕು’ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೀದರ್‌ ಉತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ಸಮಿತಿಯ ನೋಡಲ್ ಅಧಿಕಾರಿಗಳು ತಮಗೆ ವಹಿಸಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಸಮಸ್ಯೆಗಳು ಎದುರಾದರೆ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಕಲಾವಿದರು ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಶಿಸ್ತುಬದ್ಧ ಮೆರವಣಿಗೆ ನಡೆಯಬೇಕು’ ಎಂದರು.

‘ಉತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳ ವೇಳಾ ಪಟ್ಟಿಯನ್ನು ಎಂಟು ದಿನಗಳ ಮುಂಚಿತವಾಗಿಯೇ ಸಿದ್ಧಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೆ ಆ ಕಾರ್ಯಕ್ರಮಗಳಲ್ಲಿ ಮರು ಬದಲಾವಣೆ ಆಗದಂತೆ ನೊಡಿಕೊಳ್ಳಬೇಕು. ಸಮಿತಿಗಳು ಮಾಡಿಕೊಂಡಿರುವ ಸಿದ್ಧತೆ ಕುರಿತು ಪವರ್‌ ಪಾಯಿಂಟ್‌ ಪ್ರಸಂಟೇಷನ್‌ ಮೂಲಕ ಅಚ್ಚುಕಟ್ಟಾದ ಮಾಹಿತಿ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿ,‘ಪ್ರತಿ ದಿನ ಸ್ಥಳೀಯ ಭಾಷೆಯಲ್ಲಿಯೇ ಎರಡು ಕಾರ್ಯಕ್ರಮಗಳು ನಡೆಯಬೇಕು. ಆಹಾರ ಮೇಳದಲ್ಲಿ ಬಿರಿಯಾನಿ, ಗಾಣದ ಉಂಡಿ ಪ್ರದರ್ಶನ ಹಾಗೂ ಮಾರಾಟಕ್ಕೂ ವ್ಯವಸ್ಥೆ ಮಾಡಬೇಕು. ನಿಗದಿಪಡಿಸಿದ ಸಮಯದಲ್ಲಿಯೇ ನಡೆಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ,‘ಸ್ಥಳೀಯ ಕಲಾವಿದರಿಗೆ ಸಂಜೆ 5.30 ರಿಂದ 7.15 ರವರೆಗೆ ಪ್ರತಿದಿನ ಮುಖ್ಯ ವೇದಿಕೆಯಲ್ಲಿ ಕಾರ್ಯಕ್ರಮ ನಡೆಸಿಕೊಡಲು ಅವಕಾಶ ನೀಡಲಾಗುವುದು. ತಾಲ್ಲೂಕಿನ ಕಲಾ ತಂಡಗಳ ಆಯ್ಕೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದರು.

ಬುಡಾ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ‘ಜಿಲ್ಲೆಯ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಂಘ ಸಂಸ್ಥೆಗಳು ಸೇರಿದಂತೆ ಒಟ್ಟು 25 ಸಾವಿರ ಜನರು ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು’ ಎಂದರು.

ಶಾಸಕ ರಹೀಂ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್‌ ಉಪವಿಭಾಗಾಧಿಕಾರಿ ಲವೀಶ್ ಓರ್ಡಿಯಾ, ಬೀದರ್ ಉತ್ಸವದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು, ಸದಸ್ಯರು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು