ಶನಿವಾರ, ಜೂನ್ 12, 2021
24 °C
ವಿನಾಕಾರಣ ಹೊರಗಡೆ ಸಂಚರಿಸದಿರಲು ಸಾರ್ವಜನಿಕರಲ್ಲಿ ಮನವಿ

ಬೀದರ್‌ ನಗರದಲ್ಲಿ ಚವಾಣ್‌ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಲಾದ ಲಾಕ್‍ಡೌನ್ ಸರಿಯಾದ ರೀತಿಯಲ್ಲಿ ಅನುಷ್ಠಾನವಾಗುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮಂಗಳವಾರ ಸ್ವತಃ ನಗರ ಪ್ರದಕ್ಷಿಣೆ ಹಾಕಿದರು.

ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‍ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಮೈಲೂರು ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎರಡನೇ ದಿನದ ಲಾಕ್‍ಡೌನ್ ನಿಯಮಗಳ ಪಾಲನೆ ಪರಿಶೀಲಿಸಿದರು.

ಕಾರು, ಆಟೊ, ಬೈಕ್‍ಗಳಲ್ಲಿ ಹೋಗುತ್ತಿದ್ದವರನ್ನು ತಡೆದು ಏಕೆ ಸಂಚರಿಸುತ್ತಿದ್ದೀರಿ ಎಂದು ಕೇಳಿದರು. ಆಸ್ಪತ್ರೆ, ಅಗತ್ಯ ಸೇವೆಗೆ ಹೋಗುತ್ತಿದ್ದವರಿಗೆ ಅನುವು ಮಾಡಿಕೊಟ್ಟರು. ಇನ್ನೂ ಕೆಲವರಿಗೆ ಕೈಮುಗಿದು ಹೊರಗಡೆ ಬರಬೇಡಿ, ಲಾಕ್‍ಡೌನ್‍ಗೆ ಸಹಕರಿಸಿ ಎಂದು ಮನವಿ ಮಾಡಿದರು. ಮಾಸ್ಕ್ ಧರಿಸದೆ ಹೋಗುತ್ತಿದ್ದವರಿಗೆ ಮಾಸ್ಕ್ ಧರಿಸಲು ಸಲಹೆ ಮಾಡಿದರು.

‘ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್‍ಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರು ಸಚಿವರಿಗೆ ಮಾಹಿತಿ ನೀಡಿದರು.

‘ಬೀದರ್ ನಗರದ 13 ಸ್ಥಳಗಳಲ್ಲಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಸಂಚಾರ ನಿರ್ಬಂಧಿಸಲಾಗಿದೆ. ಬೀದರ್‌ಗೆ ನಾಲ್ಕು ಡಿಆರ್, ಎರಡು ಕೆಎಸ್‍ಆರ್‌ಪಿ ತುಕ್ಕಡಿಗಳು ಬಂದಿವೆ’ ಎಂದರು.

ನಾಗಮಾರಪಳ್ಳಿ ಆಸ್ಪತ್ರೆಗೆ ಭೇಟಿ: ಸಚಿವ ಚವಾಣ್ ಅವರು ಇದೇ ವೇಳೆ ನಗರದ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಗೂ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಡಿವೈಎಸ್‍ಪಿ, ಬಸವೇಶ್ವರ ಹೀರಾ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ಇದ್ದರು.

186 ವಾಹನಗಳು ವಶಕ್ಕೆ

ಜಿಲ್ಲೆಯಲ್ಲಿ ಲಾಕ್‍ಡೌನ್ ಎರಡನೇ ದಿನವಾದ ಮಂಗಳವಾರ ಅನವಶ್ಯಕವಾಗಿ ಸಂಚರಿಸುತ್ತಿದ್ದ 186 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡರು.

ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆ್ಯಕ್ಟ್ 2020ರ ಉಲ್ಲಂಘನೆಗೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾಸ್ಕ್ ಧರಿಸದವರ ವಿರುದ್ಧ 946 ಪ್ರಕರಣಗಳನ್ನು ದಾಖಲಿಸಲಾಗಿದ್ದು, ₹94,600 ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು