ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪಣ ತೊಡಿ

ಜಿಲ್ಲಾ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿಕೆ
Last Updated 12 ಜೂನ್ 2019, 13:31 IST
ಅಕ್ಷರ ಗಾತ್ರ

ಬೀದರ್: ‘ಬಾಲ ಕಾರ್ಮಿಕ ಪದ್ಧತಿಯನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮೂಲನೆಗೊಳಿಸುವ ದಿಸೆಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡುವ ಅಗತ್ಯ ಇದೆ. ಅಷ್ಟೇ ಅಲ್ಲ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಪಣ ತೊಡಬೇಕಿದೆ’ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿದರು.

ನಗರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಕ್ಕಳು ದೇಶದ ಆಸ್ತಿಯಾಗಿದ್ದಾರೆ. ಇಂದಿನ ಮಕ್ಕಳೇ ನಾಳಿನ ನಾಗರಿಕರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೂ ಕೆಲವು ಕಡೆ ಅನಿಷ್ಟ ಪದ್ಧತಿ ಜೀವಂತವಾಗಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

‘13 ಇಲಾಖೆಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರಯತ್ನಿಸುತ್ತಿವೆ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧವಾಗಿದೆ. ಕಾನೂನು ಮೀರಿ ಮಕ್ಕಳನ್ನು ದುಡಿಸಿಕೊಂಡರೆ ಅಂತಹವರಿಗೆ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸುವ ಹಕ್ಕು ನ್ಯಾಯಾಲಯಕ್ಕಿದೆ’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಮಾತನಾಡಿ, ‘ಕೇವಲ ಅಧಿಕಾರಿಗಳಿಂದ ಮಾತ್ರ ಈ ಅನಿಷ್ಠ ಪದ್ಧತಿಯನ್ನು ತೊಲಗಿಸಲು ಸಾಧ್ಯವಾಗದು. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ’ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ‘ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಹಾಗೂ ನಿರೀಕ್ಷಿಕರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಅಗತ್ಯವಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ‘ಮಕ್ಕಳನ್ನು ಯಾವ ಕಾರಣಕ್ಕೂ ದುಡಿಸಿಕೊಳ್ಳಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಮೂಲಕ ಅವರ ಭವಿಷ್ಯ ರೂಪಿಸಲು ಪ್ರತಿಯೊಬ್ಬರು ನೆರವಾಗಬೇಕು’ ಎಂದು ಹೇಳಿದರು.

‘ಹತ್ತು ವರ್ಷಗಳ ಅವಧಿಯಲ್ಲಿ ಬೀದರ್‌ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಬಹಳಷ್ಟು ಕಡಿಮೆಯಾಗಿದೆ. 2018-19ರಲ್ಲಿ ಸಮೀಕ್ಷೆ ನಡೆಸಿದಾಗ526 ಬಾಲ ಕಾರ್ಮಿಕರು ಇರುವುದು ಕಂಡು ಬಂದಿದೆ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕಿದೆ’ ಎಂದು ತಿಳಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ ಕಾರ್ನಾಡ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೌಮ್ಯ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಜಿಲ್ಲಾ ಬಾಲ ಕಾರ್ಮಿಕ ಪುನರ್ವಸತಿ ಯೋಜನೆಯ ಯೋಜನಾ ನಿರ್ದೇಶಕ ಅರ್ಜುನ ಸಿತಾಳಗೇರ ಸ್ವಾಗತಿಸಿದರು. ಕಾರ್ಮಿಕ ನಿರೀಕ್ಷಕ ಪ್ರಸನ್ನ ಪರಿಚಯಿಸಿದರು. ಗೌರಿಶಂಕರ ಪರತಾಪೂರೆ ವಂದಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಪುನರ್ವಸತಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT