ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಲ್ಲಿ ಸಮರ್ಪಣಾ ಭಾವದ ಕೊರತೆ

ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಡಾ.ಜಯಶ್ರೀ ವಿಷಾದ
Last Updated 20 ನವೆಂಬರ್ 2019, 16:59 IST
ಅಕ್ಷರ ಗಾತ್ರ

ಬೀದರ್‌: ‘ಕಾಯಕ ನಿಷ್ಠೆ ಪ್ರತಿಪಾದಿಸಿದ ಬೀದರ್‌ ಜಿಲ್ಲೆಯ ಸರ್ಕಾರಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸೌಲಭ್ಯಗಳು ದೊರೆಯುತ್ತಿಲ್ಲ. ಶಿಕ್ಷಕರು ಹಾಗೂ ವಸತಿ ನಿಲಯದ ಸಿಬ್ಬಂದಿ ಸಹ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುತ್ತಿಲ್ಲ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಜಯಶ್ರೀ ವಿಷಾದ ವ್ಯಕ್ತಪಡಿಸಿದರು.

ನಗರದ ಸಾಯಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್‌ ಉದ್ಘಾಟಿಸಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ಕಾಯಕದ ಮಹತ್ವ ಹಾಗೂ ಮೌಲ್ಯಗಳನ್ನು ಪ್ರತಿಪಾದಿಸಿದ ನೆಲ ಇದು. ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್‌ ಜಿಲ್ಲೆಯನ್ನು ಗುರುತಿಸಿ ಸರ್ಕಾರ ಕೆಲವು ಸೌಲಭ್ಯಗಳನ್ನು ಕಲ್ಪಿಸಿದೆ. ಆದರೆ, ಸರ್ಕಾರಿ ಕೆಲಸದಲ್ಲಿ ತೊಡಗಿಸಿಕೊಂಡಿರುವವರಲ್ಲಿ ಸಮರ್ಪಣಾ ಭಾವದ ಕೊರತೆ ಎದ್ದು ಕಾಣುತ್ತಿದೆ. ಶಿಕ್ಷಣದ ಗುಣಮಟ್ಟ ಕುಸಿಯುಲು ಇದೇ ಕಾರಣವಾಗಿದೆ’ ಎಂದು ತಿಳಿಸಿದರು.

‘ಬಸವಣ್ಣನವರು ಕೆಲಸದಲ್ಲಿಯೇ ದೇವರನ್ನು ಕಂಡವರು. ಆದರೆ ದೇವರನ್ನು ಕಾಣುವ ಕೆಲಸ ಶಾಲೆ ಹಾಗೂ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಂಡು ಬರುತ್ತಿಲ್ಲ. ಯಾವ ವಯಸ್ಸಿನಲ್ಲಿ ಏನನ್ನು ಅರಿತುಕೊಳ್ಳಬೇಕೋ, ಅದು ಸಾಧ್ಯವಾಗುತ್ತಿಲ್ಲ. ಇದರಿಂದ ಮಕ್ಕಳಿಗೆ ಅಪಾರ ನಷ್ಟವಾಗುತ್ತಿದೆ’ ಎಂದು ಹೇಳಿದರು.

‘ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಇವತ್ತಿಗೂ ಜಿಲ್ಲಾ ಮಟ್ಟದಲ್ಲಿ ಮಕ್ಕಳ ದಿನಾಚರಣೆ ಆಚರಿಸಿಲ್ಲ. ಮಕ್ಕಳ ದಿನಾಚರಣೆ ಕಾರ್ಯಕ್ರಮಗಳು ಶಾಲೆಗಳಿಗೆ ಸೀಮಿತವಾಗಿವೆ. ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಕೆಲವೊಂದು ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯ ಇದೆ’ ಎಂದು ಹೇಳಿದರು.

‘ನವೆಂಬರ್ 14 ಮಕ್ಕಳ ದಿನ ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ನವೆಂಬರ್ 20 ಅಂತರರಾಷ್ಟ್ರೀಯ ಮಕ್ಕಳ ದಿನ ಎನ್ನುವುದು ಮಕ್ಕಳಿಗೆ ಗೊತ್ತೇ ಇಲ್ಲ. ಅಂತರರಾಷ್ಟ್ರೀಯ ಮಕ್ಕಳ ದಿನಾಚರಣೆಗೆ 30 ವರ್ಷಗಳು ಪೂರ್ಣಗೊಂಡಿವೆ. ಈ ಬಗ್ಗೆ ಶಿಕ್ಷಕರಿಗೂ ಮಾಹಿತಿ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿ ಆರು ತಿಂಗಳಲ್ಲಿ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಸೂಚಿಸಲಾಗುವುದು’ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ ಮಾತನಾಡಿ, ‘ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಸಮಸ್ಯೆಗಳನ್ನು ಶಿಕ್ಷಕರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು’ ಎಂದು ಹೇಳಿದರು.

ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ‘ಮಂಡ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಬಾಲ್ಯವಿವಾಹ ತಡೆದ ವರದಿ ‘ಪ್ರಜಾವಾಣಿ’ಯಲ್ಲಿ ಬಂದಿದೆ. ಮಕ್ಕಳು ಸಹಾಯವಾಣಿಯ ಮಹತ್ವ ಅರಿತುಕೊಳ್ಳಬೇಕು. ಅದರ ಪೂರ್ಣ ಲಾಭ ಪಡೆಯಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಹೊಸ ಹೊಸ ವಿಷಯ ಹಾಗೂ ಘಟನೆಗಳ ಬಗೆಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಹೊಸದೊಂದು ಅನುಭವ ದೊರೆಯುತ್ತದೆ’ ಎಂದು ಸಲಹೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ‘ಶಾಲೆಗಳಲ್ಲಿ ಮಕ್ಕಳ ಸಂಸತ್ತು ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಇದರಿಂದ ಮಕ್ಕಳ ಸಮಸ್ಯೆಗಳನ್ನು ಬಹಿರಂಗ ಪಡಿಸಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ’ ಎಂದು ತಿಳಿಸಿದರು.

‘ಶಾಲಾ ಹಂತದಲ್ಲೇ ಮಕ್ಕಳು ಸಂಸತ್ತಿನ ಮಹತ್ವ ಅರಿತುಕೊಂಡರೆ ಭವಿಷ್ಯದಲ್ಲಿ ಸಂಸತ್ತು ಪ್ರವೇಶಿಸುವವರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅನುಭವದೊಂದಿಗೆ ಸಂಸತ್ತು ಪ್ರವೇಶಿಸುವುದರಿಂದ ಜನರ ಸಮಸ್ಯೆಗಳಿಗೂ ಸ್ಪಂದಿಸಲು ಸಾಧ್ಯವಾಗುತ್ತದೆ. ಮಕ್ಕಳ ಹಕ್ಕುಗಳ ಜತೆಗೆ ಸಂಸತ್ತಿನ ಮಹತ್ವವನ್ನೂ ಅರಿತುಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗೌರಿಶಂಕರ ಪರ್ತಾಪೂರೆ ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಗದೀಶ ಕೆಂಪಲಿಂಗಣ್ಣನವರ್‌ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ರಾಜಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಂಭುಲಿಂಗ ಹಿರೇಮಠ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಮಂಜುಳಾ, ಸಾಯಿ ಆದರ್ಶ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಗದೇವಿ, ಅರಳು ಸಂಸ್ಥೆ ನಿರ್ದೇಶಕ ಕೆ.ಟಿ.ಮೇರಿಲ್‌ ಇದ್ದರು.ಅಂಬಾದಾದ್‌ ಕುಲಕರ್ಣಿ ವಂದಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್‌ ರೈಟ್ಸ್‌ ಟ್ರಸ್ಟ್, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಸಮೃದ್ಧಿ ಚಾರಿಟಬಲ್ ಟ್ರಸ್ಟ್‌ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT