ಸೋಮವಾರ, ಜುಲೈ 26, 2021
26 °C
ಕರಪತ್ರ ಬಿಡುಗಡೆ ಕಾರ್ಯಕ್ರಮ

ಸರ್ಕಾರಿ ಯೋಜನೆ ಸದುಪಯೋಗ ಪಡೆಯಿರಿ: ಸಂಸದ ಭಗವಂತ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳ ಸದುಪಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಸಂಸದ ಭಗವಂತ ಖೂಬಾ ಸಲಹೆ ನೀಡಿದರು.

ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಯ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಬಡವರು, ಕೂಲಿ ಕಾರ್ಮಿಕರು, ಕೃಷಿಕರು, ಪರಿಶಿಷ್ಟರು ಹಾಗೂ ಸಣ್ಣ ವ್ಯಾಪಾರಸ್ಥರ ಏಳಿಗೆಗಾಗಿ ‘ಆತ್ಮ ನಿರ್ಭರ ಭಾರತ’ ಅಭಿಯಾನದ ಅಡಿ ₹21 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ’ ಎಂದರು.

ಜನಧನ ಯೋಜನೆ ಅಡಿ ಜಿಲ್ಲೆಯಲ್ಲಿ 3.5 ಲಕ್ಷ ಬ್ಯಾಂಕ್‌ ಖಾತೆಗಳನ್ನು ತರೆಯಲಾಗಿದೆ. ಉಜ್ವಲ್ ಯೋಜನೆ ಅಡಿ 2.5 ಲಕ್ಷ ಬಡ ಕುಟುಂಬಗಳಿಗೆ ಗ್ಯಾಸ್ ವಿತರಣೆ ಮಾಡಲಾಗಿದೆ. 2.48 ಲಕ್ಷ ಕುಟುಂಬಗಳಿಗೆ ಉಚಿತ ಶೌಚಾಲಯ ನಿರ್ಮಿಸಿ ಕೊಡಲಾಗಿದೆ ಎಂದರು.

ಜಿಲ್ಲೆಯಲ್ಲಿ 16 ಜನೌಷಧಿ ಕೇಂದ್ರಗಳಿವೆ. 66 ಪ್ರತಿಶತ ಕಡಿಮೆ ದರದಲ್ಲಿ ಉತ್ತಮ ಔಷಧಿಗಳನ್ನು ವಿತರಿಸಲಾಗುತ್ತಿದೆ. ಆಯುಷ್ಮಾನ್ ಭಾರತ ಯೋಜನೆ ಅಡಿ 18900 ಸಾವಿರ ರೋಗಿಗಳು ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ 78 ಸಾವಿರ ರೈತರು ಕಿಸಾನ್ ಸಮ್ಮಾನ ಯೋಜನೆಯ ಲಾಭ ಪಡೆದಿದ್ದಾರೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಈಗಾಗಲೇ ಸಾಕಷ್ಟು ರಸ್ತೆ ನಿರ್ಮಿಸಲಾಗಿದೆ. 750 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ಮಾಜಿ ಶಾಸಕ ಸುಭಾಷ ಕಲ್ಲೂರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪ್ರಭಾ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗೇಶ ಕಲ್ಲೂರು, ವಿನಾಯಕ ಮಂಡಾ, ಪುರಸಭೆ ಸದಸ್ಯ ರಮೇಶ ಕಲ್ಲೂರು ಹಾಗೂ ರಾಜು ಭಂಡಾರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು