ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೊಟ್ಟೆಗೊಲ್ಲಹಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಹಣ ಹಂಚಿಕೆ ಆರೋಪ: ಬಿಜೆಪಿ, ಜೆಡಿಸ್‌ ಪ್ರತಿಭಟನೆ

Last Updated 14 ಮೇ 2018, 8:56 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಯುತ್ತಿದ್ದ ವೇಳೆ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಥಳಕ್ಕೆ ಬಂದಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಬೈರತಿ ಬಸವರಾಜು, ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ, ಜೆಡಿಎಸ್‌ ಅಭ್ಯರ್ಥಿ ಹನುಮಂತೇಗೌಡ ಈ ಮೂವರೂ ಮತಗಟ್ಟೆ ಬಳಿ ಬಂದಿದ್ದಾರೆ. ಈ ವೇಳೆ ಕಾಂಗ್ರೆಸ್‌ನ ಬೈರತಿ ಬಸವರಾಜು ಅವರು ಅಪಾರ್ಟ್‌ಮೆಂಟ್‌ವೊಂದರ ಒಳಗೆ ಹೋಗಿದ್ದಾರೆ. ಇದನ್ನು ಕಂಡ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು, ಬೈರತಿ ಬಸವರಾಜು ಹಣ ಹಂಚಲು ಒಳಗೆ ಹೋಗಿದ್ದಾರೆ ಎಂದು ಆರೋಪಿಸಿ ಆಪಾರ್ಟ್‌ಮೆಂಟ್‌ ಮುಂದೆ ಪ್ರತಿಭಟನೆ ಆರಂಭಿಸಿದರು.

ಇದಾಗುತ್ತಿದ್ದಂತೆ ಬೈರತಿ ಬಸವರಾಜು ಅವರು ಅಪಾರ್ಟ್‌ಮೆಂಟ್‌ನಿಂದ ಹೊರ ಬಂದ ತಕ್ಷಣ ಕಾಂಗ್ರೆಸ್‌ ಕಾರ್ಯಕರ್ತರು ಅವರನ್ನು ಹೆಗಲ ಮೇಲೆ ಹೊತ್ತು ಜೈಕಾರ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಜೆಡಿಎಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಅವರ ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಘೋಷಣೆ ಕೂಗಿದರು. ಸ್ಥಳದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಜಮಾಯಿಸಿದ್ದಾರೆ.

ಹೆಚ್ಚು ಕಾಲ ಇಲ್ಲೇ ಇದ್ದರೆ ಪರಿಸ್ಥಿತಿ ಕೆಡಬಹುದು ಎಂದು ಅರಿತು ಅಲ್ಲಿಂದ ತೆರಳಿದ ಕಾಂಗ್ರೆಸ್‌ ಅಭ್ಯರ್ಥಿ ಬೈರತಿ ಬಸವರಾಜು, ಅದಕ್ಕೂ ಮೊದಲು ‘ಸೋಲಿನ ಹತಾಶೆಯಿಂದ ಹೀಗೆ ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದು ಆಪಾದಿಸಿದರು.

‘ಕಾಂಗ್ರೆಸ್‌ ಅಭ್ಯರ್ಥಿ ಬೈರತಿ ಬಸವರಾಜು ಅವರು ಅಪಾರ್ಟ್‌ಮೆಂಟ್‌ನಲ್ಲಿ ಹಣ ಹಂಚಿದ್ದಾರೆ, ಇದರಲ್ಲಿ ಪೊಲೀಸರೂ ಶಾಮೀಲಾಗಿದ್ದಾರೆ’ ಎಂದು ಬಿಜೆಪಿ ಅಭ್ಯರ್ಥಿ ನಾರಾಯಣ ಸ್ವಾಮಿ ಆರೋಪಿಸಿದರು.

ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT