ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಪದ್ಧತಿಯಲ್ಲಿ ಬದಲಾವಣೆ ಅನಿವಾರ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ

ರೈತರೊಂದಿಗೆ ಸಂವಾದ
Last Updated 15 ನವೆಂಬರ್ 2018, 20:16 IST
ಅಕ್ಷರ ಗಾತ್ರ

ಬೀದರ್: ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ನಗರದ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲೆಯ ಪ್ರಮುಖ 10 ಪ್ರಗತಿ ಪರ ರೈತರೊಂದಿಗೆ ಸಂವಾದ ನಡೆಸಿದರು. ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ ಸಂಯಮದಿಂದ ರೈತರ ಸಮಸ್ಯೆ ಆಲಿಸಿದರು. ತಮ್ಮ ಅನುಭವಗಳನ್ನು ಕೂಡ ಹಂಚಿಕೊಂಡರು.

‘ರೈತರು ಗುಂಪು ಅಥವಾ ಸಹಕಾರ ಸಂಘಗಳನ್ನು ರಚಿಸಿಕೊಂಡು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ಬೆಳೆಯಬೇಕು. ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಬರುವಂತಹ ಗುಣಮಟ್ಟದ ಕೃಷಿ ಉತ್ಪನ್ನಗಳನ್ನು ಉತ್ಪಾದಿಸಬೇಕು’ ಎಂದು ಕುಮಾರಸ್ವಾಮಿ ರೈತರಿಗೆ ಮನವಿ ಮಾಡಿದರು.

‘ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ದಿಸೆಯಲ್ಲಿ ಸಮ್ಮಿಶ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ, ಗ್ರಾಮ ಮಟ್ಟದಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರಗತಿಪರ ರೈತರ ಯಶೋಗಾಥೆಗಳನ್ನು ರೈತರಿಗೆ ತಿಳಿಸಬೇಕು. ಈ ಮೂಲಕ ಕೃಷಿಯಲ್ಲಿ ಯುವ ಪೀಳಿಗೆಗೆ ಹೆಚ್ಚಿನ ಆಸಕ್ತಿ ಬರುವಂತೆ ಮಾಡಬೇಕಾಗಿದೆ’ ಎಂದು ಹೇಳಿದರು.

‘ಬೀದರ್‌ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಇಲ್ಲ. ನೀರಾವರಿ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪ್ರತ್ಯೇಕ ಸಣ್ಣ ನೀರಾವರಿ ವಿಭಾಗವನ್ನು ಆರಂಭಿಸಲಾಗುವುದು. ಜಿಲ್ಲೆಯ ಅಧಿಕಾರಿಗಳು ಜನ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು. ಈ ವಿಷಯದಲ್ಲಿ ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದೆ’ ಎಂದು ತಿಳಿಸಿದರು.

‘ಬೆಂಗಳೂರಲ್ಲಿ ಶೀಘ್ರ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು. ಜಿಲ್ಲೆಗೆ ಸಣ್ಣ ನೀರಾವರಿ ಯೋಜನೆಗಳನ್ನು ಬಜೆಟ್‌ನಲ್ಲಿ ಒದಗಿಸಲಾಗುವುದು’ ಎಂದು ಹೇಳಿದರು.

‘ಬೀದರ್‌ನಲ್ಲಿ ಕೃಷಿ ಕಾಲೇಜು ಆರಂಭಿಸಬೇಕು ಎನ್ನುವ ಬೇಡಿಕೆ ಇದೆ. ಬಜೆಟ್‌ನಲ್ಲಿ ಕೃಷಿ ಕಾಲೇಜು ಆರಂಭಿಸಲು ಯೋಜನೆ ರೂಪಿಸಲಾಗುವುದು. ಡಿಸೆಂಬರ್‌ 1 ರಂದು ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಕಾರ್ಖಾನೆ ಪುನಶ್ಚೇತನಕ್ಕೆ ₹ 20 ಕೋಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಕ್ಕೆ ಹಾನಿಯಾದರೂ ಚಿಂತೆ ಇಲ್ಲ. ರೈತರ ಹಿತದೃಷ್ಟಿಯಿಂದ ಕಾರ್ಖಾನೆಯನ್ನು ಪುನರಾರಂಭಿಸಲಾಗುವುದು’ ಎಂದು ಭರವಸೆ ನೀಡಿದರು.

‘ಕೃಷಿ ಹೊಂಡ, ಚೆಕ್‌ಡ್ಯಾಂ ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಹೆಚ್ಚಿಸಲು ಕ್ರಮ ಕೈಗೊಳ್ಳ ಲಾಗುವುದು. ರೈತರಿಗೆ ಏಕರೂಪದಲ್ಲಿ ಸರ್ಕಾರದ ಯೋಜನೆಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಮಾತ್ರ ಸರ್ಕಾರ ಯೋಜನೆಗಳಲ್ಲಿ ಹೆಚ್ಚಿನ ರಿಯಾಯಿತಿ ಕೊಡುತ್ತಿದೆ. ಎಲ್ಲ ವರ್ಗದ ರೈತರಿಗೂ ಒಂದೇ ಬಗೆಯ ರಿಯಾಯಿತಿ ಕೊಡಬೇಕು. ವನ್ಯಜೀವಿಗಳಿಂದ ಬೆಳೆ ಹಾನಿ ತಡೆಯಲು ಯೋಜನೆ ರೂಪಿಸಬೇಕು. ರೈತರಿಗೆ ಪರಿಹಾರ ಕೊಡಿಸಬೇಕು. ರೈತರಿಗೆ ಹೊಲಗಳಲ್ಲಿ ಮನೆ ಕಟ್ಟಿಕೊಡಬೇಕು. ಶಾಲಾ ಪಠ್ಯಕ್ರಮದಲ್ಲಿ ಸಾವಯವ ಕೃಷಿಯನ್ನು ಅಳವಡಿಸಬೇಕು. ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಬೇಕು. ಸೋಯಾ ಸಂಶೋಧನಾ ಕೇಂದ್ರವನ್ನು ಆರಂಭಿಸಬೇಕು. ಸಿರಿಧಾನ್ಯ ಬೆಳೆಸಲು ಸರ್ಕಾರ ಉತ್ತೇಜನ ನೀಡಬೇಕು ಎಂದು ರೈತರು ಮನವಿ ಮಾಡಿದರು.

ಬೀದರ್‌ ತಾಲ್ಲೂಕಿನ ಕಾಶಿಲಿಂಗ ಅಗ್ರಹಾರ, ಮಹಮ್ಮದ್‌ ಜಾಫರ್, ಹುಮನಾಬಾದ್‌ನ ಗುರುಲಿಂಗಪ್ಪ, ವಿಠ್ಠಲ್, ಬಸವಕಲ್ಯಾಣದ ಅನಿಲ ಕುಮಾರ, ಸುಭಾಷ, ಭಾಲ್ಕಿಯ ಸುರೇಶ, ಮುಸ್ತಾಕ್‌ ಪಟೇಲ್, ಔರಾದ್‌ನ ಭಾನುದಾಸ ಪಾಟೀಲ ಹಾಗೂ ರಾಜೇಂದ್ರ ಮಾಳಿ ಅವರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ, ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಶಾಸಕರಾದ ಈಶ್ವರ ಖಂಡ್ರೆ, ರಹೀಂ ಖಾನ್, ಬಿ.ನಾರಾಯಣರಾವ್‌, ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ,ಉಪಾಧ್ಯಕ್ಷ ಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT