ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವತ್ತೇ ಸಕಲ ಸಿದ್ಧತೆ ಮಾಡಿಕೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Last Updated 25 ಜೂನ್ 2019, 14:18 IST
ಅಕ್ಷರ ಗಾತ್ರ

ಬೀದರ್‌: ‘ಬಸವಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಜೂನ್‌ 27ರಂದು ನಡೆಯಲಿರುವ ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಲೋಪಗಳು ಆಗದಂತೆ ಎಚ್ಚರ ವಹಿಸಬೇಕು. ಇವತ್ತೇ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

‘ಅಧಿಕಾರಿಗಳು ತಮ್ಮ ಇಲಾಖೆಯಿಂದ ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಸಲ್ಲಿಸಬೇಕು. ಎಲ್ಲ ಇಲಾಖೆಗಳ ಬೇಡಿಕೆಗಳನ್ನು ಕ್ರೋಡೀಕರಿಸಿದ ಮಾಹಿತಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನಾಶ ಮಾತನಾಡಿ, ‘ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾಡಳಿತ ನಿವೇಶನ ಕೂಡ ಒದಗಿಸಿದೆ. ಅನುದಾನದ ಕೊರತೆಯಿಂದಾಗಿ ಕಟ್ಟಡ ಕಾಮಗಾರಿ ಆರಂಭಗೊಂಡಿಲ್ಲ. ಹೊಸದಾಗಿ ರಚನೆಗೊಂಡ ತಾಲ್ಲೂಕುಗಳಲ್ಲಿ ವಸತಿನಿಲಯಗಳನ್ನು ಆರಂಭಿಸಬೇಕು ಎನ್ನುವ ಬೇಡಿಕೆ ಇದೆ’ ಎಂದು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಡಿ.ದೇವರಾಜ ಅರಸ್ ಅಭಿವೃದ್ಧಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಅಗ್ನಿ ಶಾಮಕ ದಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮುಖ್ಯಮಂತ್ರಿಗೆ ಸಲ್ಲಿಸಬಹುದಾದ ಬೇಡಿಕೆಗಳ ವಿವರಣೆ ಪಡೆದರು.

‘ಅಧಿಕಾರಿಗಳು ಕ್ರಿಯಾಶೀಲವಾಗಿ ಯೋಚಿಸಿ ತಮ್ಮ ಇಲಾಖೆಯಿಂದ ಜನತೆಯ ಏಳಿಗೆ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳು, ಪ್ರಮುಖ ಬೇಡಿಕೆಗಳ ಬಗ್ಗೆ ಅಂದಾಜು ವೆಚ್ಚದ ವಿವರದೊಂದಿಗೆ ಮಾಹಿತಿ ನೀಡಬೇಕು’ ಎಂದು ಸೂಚನೆ ನೀಡಿದರು.

‘ಮುಖ್ಯಮಂತ್ರಿ ಜನತಾ ದರ್ಶನ ಕಾರ್ಯಕ್ರಮದ ದಿನ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಹಾಜರಿರಬೇಕು. ಜನತಾದರ್ಶನದಲ್ಲಿ ಜನರು ಅಹವಾಲು ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ತಕ್ಷಣ ಉತ್ತರ ನೀಡಲು ಸಿದ್ಧರಿರಬೇಕು’ ಎಂದು ತಿಳಿಸಿದರು.

‘ಜನತಾದರ್ಶನ ಕಾರ್ಯಕ್ರಮಕ್ಕೆ ಬರುವ ಜನರಿಂದ ದೂರು, ಅರ್ಜಿಗಳನ್ನು ಪಡೆಯಲು ಕಂಪ್ಯೂಟರ್ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಳೆ ಬಂದರೂ ಸಹ ಕಾರ್ಯಕ್ರಮಕ್ಕೆ ಯಾವುದೇ ಅಡೆಗಡೆ ಉಂಟಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬೀದರ್‌ ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳಗೆ ನಿರ್ದೇಶನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಯೋಜನೆಗೊಂಡ ಕಲಾವಿದರನ್ನು ಕಾರ್ಯಕ್ರಮಕ್ಕೆ ಕರೆದೊಯ್ಯಲು ವಾಹನ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವವರಿಗೆ ಪ್ರತ್ಯೇಕ ಗುರುತಿನ ಚೀಟಿಗಳನ್ನು ವಿತರಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಕಾರಿ ಎಂಜಿನಿಯರ್ ರಾಚಪ್ಪ ಪಾಟೀಲ, ಡಿಡಿಪಿಐ ಚಂದ್ರಶೇಖರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT