ಮಂಗಳವಾರ, ಅಕ್ಟೋಬರ್ 22, 2019
25 °C
ಜಿಲ್ಲಾಧಿಕಾರಿ, ತಹಶೀಲ್ದಾರ್‌ ಕಚೇರಿಯಲ್ಲಿ ಭ್ರಷ್ಟಾಚಾರ: ಆರೋಪ

ತಾಲ್ಲೂಕು ಕೇಂದ್ರಗಳಲ್ಲಿ ದೂರು ಪೆಟ್ಟಿಗೆ

Published:
Updated:
Prajavani

ಬೀದರ್‌: ‘ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಶೀಲ್ದಾರ್‌ ಕಚೇರಿಗಳಲ್ಲಿ ಭ್ರಷ್ಟಾಚಾರ ನೆಲೆಯೂರಿದೆ. ಭ್ರಷ್ಟಾಚಾರ ನಿರ್ಮೂಲನೆ ಮತ್ತು ಜಿಲ್ಲೆಯ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ದಿಸೆಯಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ದೂರು ಪೆಟ್ಟಿಗೆ ಇಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಹೇಳಿದರು.

ಇಲ್ಲಿಯ ಪೊಲೀಸ್ ಪರೇಡ್‌ ಮೈದಾನದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

 ‘ತಹಶೀಲ್ದಾರ್‌ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾರ್ವಜನಿಕರು ದೂರು ಕೊಡುತ್ತಿದ್ದಾರೆ. ಇನ್ನು ಭ್ರಷ್ಟಾಚಾರಕ್ಕೆ ಯಾವ ಕಾರಣಕ್ಕೂ ಅವಕಾಶ ಕೊಡಲಾಗದು. ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ಕಾನೂನು ಚೌಕಟ್ಟಿನಲ್ಲೇ ಕ್ರಮ ಕೈಗೊಳ್ಳಲಾಗುವುದು. ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.

‘ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಒಂದು ಪತ್ರದಲ್ಲಿ ಬರೆದು ಅವರ ವಿಳಾಸ ಹಾಗೂ ಮೊಬೈಲ್‌ ಸಂಖ್ಯೆ ಬರೆದರೆ ಸಾಕು. ದೂರುಪೆಟ್ಟಿಗೆಯಲ್ಲಿನ ಪತ್ರಗಳ ವಿಲೇವಾರಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

‘ಬೀದರ್‌ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಜಿಲ್ಲೆಯ ಶಾಸಕರೊಂದಿಗೂ ಸಮಾಲೋಚನೆ ನಡೆಸಲಾಗುವುದು’ ಎಂದು ಹೇಳಿದರು.

‘ಹೊಸ ಸರ್ಕಾರ ಬಂದು ಒಂದು ತಿಂಗಳಾಗಿದೆ. ಜಡ್ಡುಗಟ್ಟಿದ ವ್ಯವಸ್ಥೆಯನ್ನು ಸರಿಪಡಿಸಲು ಸ್ವಲ್ಪ ಸಮಯ ಬೇಕಾಗಲಿದೆ. ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಕಲ್ಯಾಣ ಕರ್ನಾಟಕ ಘೋಷಣೆ ಹಾಗೂ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ರದ್ದು ಮಾಡಿರುವುದು ಐತಿಹಾಸಿಕ ನಿರ್ಧಾರ. ಗೋವು ನನ್ನ ತಾಯಿ ಇದ್ದಂತೆ. ಗೋವುಗಳು ಕಸಾಯಿ ಖಾನೆಗಳಿಗೆ ಹೋಗುವಂತಾಗಬಾರದು. ಪ್ರತಿ ಮನೆಯಲ್ಲಿ ಒಂದು ಗೋವು ಇರಬೇಕು. ಹೀಗಾಗಿ ಪಶು ಸಂಗೋಪನೆ ಖಾತೆಯನ್ನು ಕೇಳಿ ಪಡೆದುಕೊಂಡಿದ್ದೇನೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ವಿಶೇಷವಾಗಿ ಔರಾದ್‌ ತಾಲ್ಲೂಕಿನಲ್ಲಿ ಕೆರೆ, ಬಾವಿ, ಬ್ಯಾರೇಜ್‌ಗಳು ತುಂಬಿಲ್ಲ. ಬೇಸಿಗೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ನೀರಿನ ಮಿತ ಬಳಕೆ ಮಾಡಬೇಕು’ ಎಂದು ತಿಳಿಸಿದರು.

‘ಬೀದರ್‌–ನಾಂದೇಡ್‌ ಹೆದ್ದಾರಿ ನಿರ್ಮಾಣವಾಗಬೇಕಿದೆ. ಬೀದರ್‌ನಿಂದ ನಾಗರಿಕ ವಿಮಾನ ಸೇವೆ ಆರಂಭವಾಗಬೇಕಿದೆ. ಈಗಾಗಲೇ ಸಂಸದ ಭಗವಂತ ಖೂಬಾ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆಸಿದ್ದಾರೆ. ಜಿಲ್ಲೆಯ ಜನರಿಗೆ ಶೀಘ್ರದಲ್ಲೇ ಶುಭ ಸುದ್ದಿ ದೊರೆಯಲಿದೆ’ ಎಂದು ಹೇಳಿದರು.

ಯಾದಗಿರಿ ಜಿಲ್ಲೆಯ ಜನತೆಗೆ ಶುಭಾಶಯ: ‘ಬೀದರ್ ಜಿಲ್ಲೆಯ ಜತೆಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿಯನ್ನು ಕೂಡ ನನಗೆ ವಹಿಸಿಕೊಡಲಾಗಿದೆ. ಆದ್ದರಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಜನತೆಗೂ ಕೂಡ ಶುಭಾಷಯಗಳನ್ನು ಸಲ್ಲಿಸುತ್ತೇನೆ’ ಎಂದು ಸಚಿವರು ತಿಳಿಸಿದರು.
ಜಯ ಘೋಷಣೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಂದೇಶ ನೀಡುವ ಮೊದಲು ಸಚಿವ ಪ್ರಭು ಚವಾಣ್ ಅವರು, ‘ಭಾರತ್ ಮಾತಾಕೀ ಜೈ.., ಕರ್ನಾಟಕ ಮಾತಾಕೀ ಜೈ.., ಬೀದರ್ ಕೀ ಜೈ..’ ಎನ್ನುವ ಜಯಘೋಷಣೆಗಳನ್ನು ಕೂಗಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ರಹೀಂಖಾನ್‌, ಬಂಡೆಪ್ಪ ಖಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಸದಸ್ಯ ಅನಿಲ ಗುಂಡಪ್ಪ, ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ, ಬೀದರ್‌ ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳ, ಬೀದರ್ ತಹಶೀಲ್ದಾರ್ ಕೀರ್ತಿ ಚಾಲಕ ಇದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

 

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)