ಭಾಲ್ಕಿ (ಬೀದರ್ ಜಿಲ್ಲೆ): ತಮ್ಮದೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರು ನೀಡಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೋನ ಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ನಾಗಶೆಟ್ಟಿ ಕುಲಕರ್ಣಿಯ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶಿಸಿದ್ದಾರೆ.
ಪ್ರಾಚಾರ್ಯರನ್ನು ಬೇರೆ ಕಡೆ ವರ್ಗಾಯಿಸುವಂತೆ ವಿದ್ಯಾರ್ಥಿನಿಯರು ಕೋರಿದ್ದರು. ಹೀಗಾಗಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಪ್ರಾಚಾರ್ಯರನ್ನು ಕೂಡಲೇ ವಸತಿ ಶಾಲೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಸಂಘದ ಕೇಂದ್ರ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.