ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ

ಅಧಿಕಾರಿಗಳಿಗೆ ಎಚ್‌ಕೆಆರ್‌ಡಿಬಿ ಕಾರ್ಯದರ್ಶಿ ಯಾದವ್‌ ಸೂಚನೆ
Last Updated 4 ಜನವರಿ 2019, 14:49 IST
ಅಕ್ಷರ ಗಾತ್ರ

ಬೀದರ್‌: ‘ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಜಿಲ್ಲೆಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು’ ಎಂದು ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಂಡಳಿಯ ಆಯಾ ವರ್ಷದ ಕಾಮಗಾರಿಗಳನ್ನು ಅದೇ ವರ್ಷ ಮುಗಿಸಬೇಕು. ಒಂದು ವರ್ಷದಲ್ಲಿ ಪೂರ್ಣಗೊಳಿಸಲು ಸಾಧ್ಯವಾದಷ್ಟು ಕೆಲಸಗಳನ್ನು ಮಾತ್ರ ಕೈಗೆತ್ತಿಕೊಳ್ಳಬೇಕು. ಕೆಲಸ ಇನ್ನೂ ಉಳಿದಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಅನುದಾನ ಪಡೆಯಬೇಕು. ಅನುದಾನ ಬಿಡುಗಡೆಯಾದ ಮೇಲೂ ವಿಳಂಬ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

‘ಕಾಮಗಾರಿ ಬೇಗ ಪೂರ್ಣಗೊಳ್ಳಲಿ ಎಂಬ ಉದ್ದೇಶದಿಂದ ಅಲ್ಪಾವಧಿ ಟೆಂಡರ್‌ ಕರೆಯಲಾಗುತ್ತಿದೆ. ಅದಾಗಿಯೂ ಕೆಲ ಕೆಲಸ ಆರಂಭಿಸಲು ವಿಳಂಬ ಮಾಡುತ್ತಿರುವುದನ್ನು ಸಹಿಸಲಾಗದು’ ಎಂದು ಎಚ್ಚರಿಸಿದರು.

ಕಟ್ಟಡ ಕಾಮಗಾರಿಗಳನ್ನು ಆರಂಭಿಸಲು ನಿವೇಶನ ಸಮಸ್ಯೆ ಇದೆ ಎಂದು ಕೆಲ ಅಧಿಕಾರಿಗಳು ಪ್ರಸ್ತಾಪಿಸಿದಾಗ, ‘ನಿವೇಶನ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸಿಕೊಂಡು ಕೆಲಸ ಬೇಗ ಆರಂಭಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

‘ಅಂತಿಮ ಬಿಲ್‌ಗಳನ್ನು ಸಲ್ಲಿಸುವಾಗ ಕಾಮಗಾರಿ ಪೂರ್ಣಗೊಳಿಸಿದ, ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿದ ಹಾಗೂ ಅಂತಿಮ ಪರಿಶೀಲನೆಯ ಪ್ರಮಾಣ ಪತ್ರಗಳನ್ನು ತಪ್ಪದೇ ಸಲ್ಲಿಸಬೇಕು. ಇಲ್ಲವಾದಲ್ಲಿ ಹಣ ಬಿಡುಗಡೆ ಮಾಡಲಾಗುವುದಿಲ್ಲ’ ಎಂದು ತಿಳಿಸಿದರು.

ಜಂಟಿ ನಿರ್ದೇಶಕ ಬಸವರಾಜ ಮಾತನಾಡಿ, ‘ಆಯಾ ಇಲಾಖೆಗಳ ಅಧಿಕಾರಿಗಳು ಕಾಮಗಾರಿಗಳ ಪ್ರಗತಿ ವಿವರಗಳನ್ನು ಕಾಲಕಾಲಕ್ಕೆ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು. ಒಂದು ಬಾರಿ ಮಾಹಿತಿ ದಾಖಲಿಸಿದ ನಂತರ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಮಾಹಿತಿ ಸೇರಿಸುವ ವೇಳೆ ಎಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಕೆಲ ಕಾಮಗಾರಿ ಪೂರ್ಣಗೊಂಡರೂ ಸಂಬಂಧಿಸಿದ ಇಲಾಖೆಗೆ ಕಟ್ಟಡವನ್ನು ಒಪ್ಪಿಸದೇ ಇರುವುದರಿಂದ ಆ ಕಟ್ಟಡಗಳು ಬಳಕೆಯಾಗುತ್ತಿಲ್ಲ’ ಎಂದು ತಿಳಿಸಿದರು.

ಸಭೆಯಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್‍ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT