ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಪ ಬೇಡ, ಕಾಮಗಾರಿ ಪೂರ್ಣಗೊಳಿಸಿ

ಅನುಷ್ಠಾನಾಧಿಕಾರಿಗಳಿಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಬೋಧ್ ಸೂಚನೆ
Last Updated 11 ಅಕ್ಟೋಬರ್ 2019, 15:41 IST
ಅಕ್ಷರ ಗಾತ್ರ

ಬೀದರ್: ‘ಅಧಿಕಾರಿಗಳು ನೆಪ ಹೇಳಿ, ಸಮಯ ವ್ಯರ್ಥ ಮಾಡದೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಬಾಕಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳ ಪ್ರಗತಿಗೆ ಅನುಗುಣವಾಗಿ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ಗೆ ಅಪ್‌ಡೇಟ್ ಮಾಡಬೇಕು’ ಎಂದು ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ್ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೊ ಮತ್ತು ಮ್ಯಾಕ್ರೊ ಯೋಜನೆಯಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

‘ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ₹38.7 ಕೋಟಿ ಖರ್ಚಾದರೂ ಕಾಮಗಾರಿ ತೃಪ್ತಿಕರವಾಗಿಲ್ಲ. ಟ್ರ್ಯಾಕ್ ಸರಿಯಾಗಿ ನಿರ್ಮಾಣವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಕಾಮಗಾರಿ ಮಾತ್ರ ಬಾಕಿ ಉಳಿದಿದೆ ಎಂದು ಕೆಎಸ್‌ಪಿಎಚ್ ಹಾಗೂ ಐಡಿಸಿಎಲ್ ಏಜೆನ್ಸಿ ಅಧಿಕಾರಿಗಳು ತಿಳಿಸಿದರು.

‘ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯ 108 ಶಾಲೆಗಳ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇಕಡ 75ಕ್ಕಿಂತ ಕಡಿಮೆ ಬಂದಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

‘ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಲು ಶೇಕಡ 75ಕ್ಕಿಂತ ಕಡಿಮೆ ಫಲಿತಾಂಶ ಬಂದ ಶಾಲೆಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ 4.30ರ ನಂತರ ಗಣಿತ, ಇಂಗ್ಲೀಷ್, ವಿಜ್ಞಾನ ವಿಷಯಗಳ ವಿಶೇಷ ತರಗತಿಗಳನ್ನು ನಡೆಸಬೇಕು’ ಎಂದು ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

‘ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಯೋಗ ಕೋಣೆ ಹಾಗೂ ಸುತ್ತಗೋಡೆ ನಿರ್ಮಾಣ ಕಾಮಗಾರಿ ನಡೆದಿಲ್ಲ. ದುಬಲಗುಂಡಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಿಲ್ಲ. ಗಡವಂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿಲ್ಲ.

2019ರ ಫೆಬ್ರುವರಿಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ನೀಲಾಂಬಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಡಿಟೋರಿಯಂ ನಿರ್ಮಾಣವಾಗಿಲ್ಲ. ಜೂನ್‌ನಲ್ಲಿಯೇ ವರ್ಕ್ ಆರ್ಡರ್ ನೀಡಿದ್ದರೂ ಹುಲಸೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 6 ಹೆಚ್ಚುವರಿ ಕಟ್ಟಡ ನಿರ್ಮಿಸಿಲ್ಲ. ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಿಲ್ಲ. ನೀವೇನು ಮಾಡುತ್ತಿದ್ದೀರಿ, ಏಕೆ ವಿಳಂಬ ಮಾಡುತ್ತಿದ್ದೀರಿ’ ಎಂದು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

‘ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪ್ರಮಾಣ ಪತ್ರ ನೀಡಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

‘ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದಿಂದ ರುದನೂರು ಮಾರ್ಗವಾಗಿ ಧನ್ನೂರ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ 2017-18ನೇ ಸಾಲಿನ 13 ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು’ ಎಂದು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಧಿಕಾರಿಗಳಿಗೆ ಗಡುವು ವಿಧಿಸಿದರು.

‘ಸಾವಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಜುಲೈ ತಿಂಗಳಿನಲ್ಲಿಯೇ ಅನುಮತಿ ನೀಡಲಾಗಿದೆ. ಆದರೂ. ಇದುವರೆಗೆ ಕೆಲಸವನ್ನೇಕೆ ಆರಂಭಿಸಿಲ್ಲ’ ಎಂದು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್ ವಿಭಾಗದ ಎಂಜಿನಿಯರ್‌ರನ್ನು ತರಾಟೆಗೆ ತೆಗೆದುಕೊಂಡರು.

‘ಜಿಲ್ಲಾಧಿಕಾರಿಯಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಸಮಾಜ ಕಲ್ಯಾಣ ಇಲಾಖೆಯಡಿ ವಸತಿ ಶಾಲೆಗಳಿಗೆ ಟೂಟೈರ್ ಕಾಟ್ಸ್ ಹಾಗೂ ಡೈನಿಂಗ್ ಟೇಬಲ್ ಸರಬರಾಜಿಗೆ ಕೂಡಲೇ ವ್ಯವಸ್ಥೆ ಮಾಡಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

‘ರಾಮನಾ ತಾಂಡಾದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಇದುವರೆಗೆ ಪ್ರಸ್ತಾವನೆಯನ್ನೇಕೆ ಕಳುಹಿಸಿಲ್ಲ’ ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಂಜಿನಿಯರ್‌ಗೆ ಪ್ರಶ್ನಿಸಿದ ಅವರು, ಕಮಠಾಣದಲ್ಲಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಆರಂಭಿಸಬೇಕು’ ಎಂದು ತಿಳಿಸಿದರು.

‘ಭಾಲ್ಕಿಯ ಪದವಿಪೂರ್ವ ಕಾಲೇಜಿಗೆ ಪೀಠೋಪಕರಣ ಒದಗಿಸುವ, ಬೀದರ್‌ನ ಪ್ರಥಮ ದರ್ಜೆ ಕಾಲೇಜಿಗೆ ಡ್ಯೂಯಲ್ ಡೆಸ್ಕ್ ಸರಬರಾಜು ಮಾಡುವ, ಭಾಲ್ಕಿ ಪ್ರಥಮ ದರ್ಜೆ ಪದವಿ ಕಾಲೇಜಿಗೆ ಪೀಠೋಪಕರಣ ಒದಗಿಸುವ ಕಾರ್ಯವನ್ನು ಡಿಯುಡಿಸಿ ಬದಲಾಗಿ ಆಯಾ ಕಾಲೇಜುಗಳೇ ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT