ಶನಿವಾರ, ಜನವರಿ 23, 2021
18 °C
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ವಾಗ್ದಾಳಿ

ಬಿಎಸ್‌ಎಸ್‌ಕೆ ದುಸ್ಥಿತಿಗೆ ಕಾಂಗ್ರೆಸ್‌ ಕಾರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ದುಸ್ಥಿತಿಗೆ ಕಾಂಗ್ರೆಸ್‌ ಕಾರಣ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿಯೇ ಕಾರ್ಖಾನೆ ಸರ್ವನಾಶವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ವಾಗ್ದಾಳಿ ನಡೆಸಿದರು.

‘ಹಿಂದೆ ಆರ್ಥಿಕ ದಿವಾಳಿಯಾಗಿ ಕಾರ್ಖಾನೆ ಬಾಗಿಲು ಮುಚ್ಚಿದಾಗ ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿ ಪುನರಾರಂಭಿಸಿತ್ತು. ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ನಂತರ ಸ್ಥಳೀಯ ಕಾಂಗ್ರೆಸ್‌ ನಾಯಕರು ಅದನ್ನು ದುಸ್ಥಿತಿಗೆ ತಳ್ಳಿದರು’ ಎಂದು ನಗರದ ಪಕ್ಷದ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಆರೋಪಿಸಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಜಿಲ್ಲೆಯ ಪ್ರಮುಖ ನಾಯಕರ ನಿಯೋಗವೊಂದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಒಯ್ದು ಬಿಎಸ್‌ಎಸ್‌ಕೆ ಪುನರಾರಂಭಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು’ ಎಂದು ತಿಳಿಸಿದರು.

‘ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಸ್ಥಿತಿಯೂ ಹೀಗೆ ಇತ್ತು. ಅಲ್ಲಿ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗಿದೆ. ಅದರಂತೆ ಬಿಎಸ್‌ಎಸ್‌ಕೆಯನ್ನೂ ಖಾಸಗಿಯವರಿಗೆ ವಹಿಸಲು ಪ್ರಯತ್ನಿಸಲಾಗುವುದು’ ಎಂದರು.

ಜ.11ಕ್ಕೆ ಜನ ಸೇವಕರ ಸಮಾವೇಶ

ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಜನವರಿ 11ರಂದು ಆಯೋಜಿಸಿರುವ ಜನ ಸೇವಕರ ಸಮಾವೇಶವನ್ನು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ತಿಳಿಸಿದರು.

ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಮುಖಂಡರಾದ ಮಾಲಿಕಯ್ಯ ಗುತ್ತೇದಾರ್, ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಗುವುದು. ಎರಡೂವರೆ ಸಾವಿರ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ಜಿಲ್ಲೆಯಲ್ಲಿ ಶೇಕಡ 60ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಪಕ್ಷದ ವಿಭಾಗ ಪ್ರಮುಖ ಈಶ್ವರಸಿಂಗ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ಶಿವುಪುತ್ರ ವೈದ್ಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.