ಶುಕ್ರವಾರ, ಜನವರಿ 24, 2020
22 °C

ಪೌರತ್ವ ವಿಚಾರದಲ್ಲಿ ಕಾಂಗ್ರೆಸ್‌ ರಾಜಕೀಯ : ಬಿ.ವೈ.ವಿಜಯೇಂದ್ರ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು 2014ರ ಡಿಸೆಂಬರ್‌ 31ಕ್ಕಿಂತ ಮೊದಲು ದೇಶದಲ್ಲಿ ವಾಸವಿರುವ ಎಲ್ಲರಿಗೂ ಪೌರತ್ವ ಕೊಡುವ ವಿಷಯ ಪ್ರಸ್ತಾಪಿಸಿದೆ. ಆದರೆ, ವಿರೋಧ ಪಕ್ಷ ಕಾಂಗ್ರೆಸ್ ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಜನರನ್ನು ಪ್ರಚೋದಿಸುವ ಕಾರ್ಯ ಮಾಡುತ್ತಿದೆ’ ಎಂದರು.

‘ಯಾವ ಧರ್ಮಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ವಿರುದ್ಧ ಟೀಕಿಸಲು ಕಾಂಗ್ರೆಸ್‌ ಬಳಿ ಇಂದು ಏನೂ ಉಳಿದಿಲ್ಲ. ಹೀಗಾಗಿ ಕಾಂಗ್ರೆಸ್‌ ಜನರನ್ನು ತಪ್ಪು ದಾರಿಗೆ ಎಳೆದು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ’ ಎಂದು ಹೇಳಿದರು.

ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ತಮ್ಮೇಶಗೌಡ ಮಾತನಾಡಿ, ‘ಬೀದರ್‌ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಚುನಾಯಿತರಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಕನಿಷ್ಠ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಸಿದ್ಧತೆ ಆರಂಭಿಸಬೇಕು’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿದರು. ಮಾಜಿ ಶಾಸಕ ಸುಭಾಷ ಕಲ್ಲೂರ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಮುಖಂಡರಾದ ಬಾಬು ವಾಲಿ, ಬಾಬುರಾವ್ ಕಾರಭಾರಿ, ಸೋಮನಾಥ ಪಾಟೀಲ, ಜಯಕುಮಾರ ಕಾಂಗೆ, ಬಾಬುರಾವ್‌ ಮದಕಟ್ಟಿ, ಪರಶುರಾಮ ಇದ್ದರು. ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುನಾಥ ರಾಜಗೀರಾ ನಿರೂಪಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು