ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಜಿಲ್ಲೆಯಲ್ಲಿ ಹೆಚ್ಚಿದ ಕಾಂಗ್ರೆಸ್‌ ಪ್ರಾಬಲ್ಯ

ಔರಾದ್‌ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಉಳಿಸಿಕೊಂಡ ಬಿಜೆಪಿ
Last Updated 31 ಮೇ 2019, 19:30 IST
ಅಕ್ಷರ ಗಾತ್ರ

ಬೀದರ್‌: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ಮುಗ್ಗರಿಸಿದ್ದ ಕಾಂಗ್ರೆಸ್‌, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದೆ. ಕಾಂಗ್ರೆಸ್ ಬಸವಕಲ್ಯಾಣ ನಗರಸಭೆ, ಹುಮನಾಬಾದ್, ಭಾಲ್ಕಿ ಹಾಗೂ ಚಿಟಗುಪ್ಪ ಪುರಸಭೆಗಳಲ್ಲಿ ಸ್ಪಷ್ಟ ಬಹುಮತ ಪಡೆದರೆ, ಔರಾದ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.

ಕಾಂಗ್ರೆಸ್‌ ಶಾಸಕರು ಇರುವ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಬಲ ವೃದ್ಧಿಸಿಕೊಂಡಿದೆ.ಬಿಜೆಪಿ ಶಾಸಕ ಇರುವ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿನ ಬಿಜೆಪಿಯ ಗಾಳಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ಜನ ಮತ್ತಷ್ಟು ಶಕ್ತಿ ತುಂಬಿದ್ದಾರೆ.

ಬಸವಕಲ್ಯಾಣ ನಗರಸಭೆಯ 31 ಸ್ಥಾನಗಳ ಪೈಕಿ ಕಾಂಗ್ರೆಸ್ 19 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಬಿಜೆಪಿ ಐದು ವಾರ್ಡ್‌ಗಳಲ್ಲಿ ಜಯ ಸಾಧಿಸಿದರೆ, ಜೆಡಿಎಸ್‌ ಕೇವಲ 3 ಸ್ಥಾನಗಳನ್ನು ಪಡೆದುಕೊಂಡಿದೆ. ಹಿಂದೆ ಕಾಂಗ್ರೆಸ್‌ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದ್ದವು. ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧೆ ನಡೆಸುವ ಮೂಲಕ ಕಾಂಗ್ರೆಸ್‌ ನಗರಸಭೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಭಾಲ್ಕಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 18 ಸ್ಥಾನಗಳನ್ನು ಪಡೆಯುವ ಮೂಲಕ ತನ್ನ ಹಿಡಿತವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಜೆಡಿಎಸ್‌ ಹಾಗೂ ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿವೆ. ರಾಜಕೀಯ ಪಕ್ಷಗಳ ಪ್ರಭಾವದ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯೊಬ್ಬರು ಚುನಾಯಿತರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ.

ಹುಮನಾಬಾದ್ ಪುರಸಭೆಯಲ್ಲೂ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ 19 ಸ್ಥಾನಗಳನ್ನು ಪಡೆದು ಬಲ ಹೆಚ್ಚಿಸಿಕೊಂಡರೆ, ಬಿಜೆಪಿ 4 ವಾರ್ಡ್‌ಗಳಲ್ಲಿ ಖಾತೆ ತೆರೆದಿದೆ. ಜೆಡಿಎಸ್ ಕಳೆದ ಬಾರಿಗಿಂತಲೂ ಕಡಿಮೆ ಕೇವಲ 3 ಸ್ಥಾನಗಳನ್ನು ಪಡೆದು ಹೀನಾಯ ಸೋಲು ಅನುಭವಿಸಿದೆ.

ಔರಾದ್‌ ಪಟ್ಟಣ ಪಂಚಾಯಿತಿ ಮತ್ತೆ ಬಿಜೆಪಿ ತೆಕ್ಕೆಗೆ ಸೇರಿದೆ. 20 ಸ್ಥಾನಗಳ ಪೈಕಿ 12 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ ಕೇವಲ 5 ವಾರ್ಡ್‌ಗಳಲ್ಲಿ ಗೆಲುವು ಪಡೆದು ಹಿನ್ನಡೆ ಅನುಭವಿಸಿದೆ. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಲ್ಲಿನ ಆಡಳಿತ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಮೂಲಸೌಕರ್ಯಗಳ ಕೊರತೆ ನೀಗಿಸದಿದ್ದರೂ ಮತದಾರರು ಮತ್ತೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ.

‘ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿ ಪರ ಆಡಳಿತವನ್ನು ನೋಡಿದ್ದಾರೆ. ಜಿಲ್ಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾರಾಯಣ ಹಾಗೂ ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದೆ. ಔರಾದ್‌ನಲ್ಲಿ ಸಾಕಷ್ಟು ಪರಿಶ್ರಮ ಪಟ್ಟಿದ್ದೇವೆ. ಆದರೂ ಮತದಾರರು ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳುತ್ತಾರೆ.

‘ಔರಾದ್‌ನಲ್ಲಿ ಅಧಿಕಾರ ಉಳಿಸಿಕೊಂಡಿದ್ದೇವೆ. ಉಳಿದ ಕಡೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಡೆಸಿದ ಪ್ರಯತ್ನಕ್ಕೆ ಫಲ ದೊರೆತಿಲ್ಲ. ಔರಾದ್ ಹೊರತು ಪಡಿಸಿ ಉಳಿದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಪ್ರತಿಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಲಿದೆ’ ಎನ್ನುತ್ತಾರೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ.

‘ಕಾಂಗ್ರೆಸ್‌ ಹಾಗೂ ಬಿಜೆಪಿ ಶಾಸಕರು ಇರುವ ಕಾರಣ ಜೆಡಿಎಸ್‌ಗೆ ಹೆಚ್ಚಿನ ಸ್ಥಾನಗಳು ಲಭಿಸಿಲ್ಲ. ಪಕ್ಷವನ್ನು ಬಲಪಡಿಸುವ ದಿಸೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT