ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಉತ್ಪನ್ನ ಮಾರಾಟಕ್ಕೆ ಅವಕಾಶ ಕೊಡಿ

ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ್ ಸೂಚನೆ
Last Updated 5 ಏಪ್ರಿಲ್ 2020, 15:54 IST
ಅಕ್ಷರ ಗಾತ್ರ

ಬೀದರ್‌: ರೈತರಿಗೆ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜಗಳ ವಿತರಣೆಗೆ ಅನುಕೂಲವಾಗುವಂತೆ ಅಧಿಕಾರಿಗಳು ಈಗಿನಿಂದಲೇ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಮಾಗಿ ಉಳುಮೆ ಹಾಗೂ ಇತರೆ ಕೃಷಿ ಸಂಬಂಧಿತ ಚಟುವಟಿಕೆಗಳು ಚುರುಕುಗೊಂಡಿದ್ದು ರೈತರಿಗೆ ಕೃಷಿ ಯಂತ್ರೋಪಕರಣಗಳ ಸಾಗಣೆ ಮತ್ತು ಕೃಷಿ ಯಂತ್ರಗಳ ದುರುಸ್ತಿ ಆಗಬೇಕಿದೆ. ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಜಿಲ್ಲೆಯ ರೈತರು ಕೋರಿದ್ದಾರೆ’ ಎಂದು ತಿಳಿಸಿದರು.

‘ಲಾಕ್ಡೌನ್ ಆದೇಶ ಪಾಲನೆ ಹಿನ್ನೆಲೆಯಲ್ಲಿ ಇದು ಕಷ್ಟ ಅನ್ನಿಸಿದರೂ ನಿಯಮಾನುಸಾರ ಸಾಕಷ್ಟು ಅಂತರ ಮತ್ತು ಸುರಕ್ಷತಾ ವಿಧಾನ ಅನುಸರಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಕೆಲವೆಡೆಗಳಲ್ಲಿ ತೋಟಗಾರಿಕೆ ಬೆಳೆಗಳಿವೆ. ತೋಟಗಾರಿಕಾ ಫಸಲಿನ ಮಾರಾಟಕ್ಕೆ ಅನುಕೂಲ ಕಲ್ಪಿಸಬೇಕಿದೆ. ಹೀಗಾಗಿ ಅಂತಹ ತೋಟಗಾರಿಕಾ ಬೆಳೆಗಾರರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಇತರೆಡೆಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಪ್ರಮಾಣದಲ್ಲಿ ಹಣ್ಣು ಬೆಳೆದ ರೈತರ ಮಾಹಿತಿ ಪಡೆದು, ಆ ಹಣ್ಣು ಬೇರೆಡೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲು ಅನುಕೂಲವಾಗುವಂತೆ ಕ್ರಮ ಜರುಗಿಸಬೇಕು’ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಮುಂಜಾಗ್ರತೆ ವಹಿಸಲು ಸೂಚನೆ

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಅಲ್ಲಲ್ಲಿ ಕಾರ್ಯನಿರತವಾಗಿರುವ ಆರೋಗ್ಯ, ಪೊಲೀಸ್ ಸೇರಿದಂತೆ ಇನ್ನಿತರ ಇಲಾಖೆಗಳ ಸಿಬ್ಬಂದಿ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಿ.ವಿದ್ಯಾನಂದ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಾವುಗೆ ಇದ್ದರು.

ಅಂಗಡಿ ತೆರದಿಡಲು ಅನುಮತಿ: ಕೃಷಿ ಯಂತ್ರೋಪಕರಣಗಳ ಹಾಗೂ ಕೃಷಿ ಯಂತ್ರದ ಬಿಡಿಭಾಗಗಳ ದುರುಸ್ತಿ ಅಂಗಡಿಗಳನ್ನು ತೆರೆದಿಡಲು ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೃಷಿ ಯಂತ್ರೋಪಕರಣಗಳ ಮತ್ತು ಕೃಷಿ ತಂತ್ರಗಳ ಬಿಡಿಭಾಗಗಳ ದುರುಸ್ತಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಸ್ಯಾನಿಟೈಸರ್ ಲಿಕ್ವಿಡ್ ಬಳಸಬೇಕು. ಗ್ರಾಹಕರ ನಡುವೆ ಕನಿಷ್ಠ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಗಿಂದಾಗ ಹೊರಡಿಸಿದ ಮತ್ತು ಹೊರಡಿಸುವ ಆದೇಶಗಳನ್ನು ಕಡ್ಡಾಯ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT