ಮಂಗಳವಾರ, ಫೆಬ್ರವರಿ 25, 2020
19 °C
ಕೊರೊನಾ ವೈರಸ್: ಮುಂಜಾಗೃತೆ ವಹಿಸಲು ಸೂಚನೆ

ಬೀದರ್‌: ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಚೀನಾದಲ್ಲಿ ಹರಡಿರುವ ಕೊರೊನಾ ವೈರಸ್ ಎಲ್ಲಡೆ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಅಗತ್ಯ ಮುಂ ಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ನಿರ್ದೇಶನ ನೀಡಿದರು.

ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಮುಂಜಾಗೃತೆ ಕ್ರಮವಾಗಿ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಕೊರೊನಾ ಸೋಂಕು ಬಾರದಂತೆ ಮುನ್ನೆಚ್ಚರಿಕೆಯಾಗಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವ ಬಗ್ಗೆ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಬ್ರಿಮ್ಸ್‌ ವೈದ್ಯರು, ನರ್ಸಿಂಗ್ ಹೋಮ್‍ಗಳ ವೈದ್ಯರೊಂದಿಗೆ ಸಭೆ ನಡೆಸಿ ಯೋಜನೆಯೊಂದನ್ನು ರೂಪಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

‘ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಪ್ರದೇಶಗಳಿಂದ ಜಿಲ್ಲೆಗೆ ಬರುತ್ತಿರುವ ವ್ಯಕ್ತಿಗಳನ್ನು ಗುರುತಿಸುವ ಕೆಲಸವಾಗಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ವಿತರಿಸಲು ಗುಣಮಟ್ಟದ ಮಾಸ್ಕ್‌ಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಮಾತನಾಡಿ, ‘ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿ ಸಲಾಗಿದೆ’ ಎಂದರು.

‘ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ ಪ್ರಾರ್ಥನೆಗೆ ಮುನ್ನ ಕೊರೊನಾ ಸೋಂಕಿನ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

‘ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬ್ರಿಮ್ಸ್‌ನ ವೈದ್ಯಾಧಿಕಾರಿ ಡಾ.ಮಹೇಶ.ಬಿ.ತೊಂಡಾರೆ ಮಾತನಾಡಿ, ‘1960ರಲ್ಲಿ ಮೊದಲ ಬಾರಿಗೆ ಪತ್ತೆಯಾಗಿದ್ದ ಈ ವೈರಸ್ 2019ರ ಡಿಸೆಂಬರ್‌ನಲ್ಲಿ ಚೀನಾದ ವುಹಾನ್ ನಗರದಲ್ಲಿ ಕಾಣಿಸಿತ್ತು. ಇದೀಗ ನೋವೆಲ್ ಕೊರೊನಾ ವೈರಸ್ ಎಂದು ಹೆಸರಿಸಲಾಗಿದೆ’ ಎಂದು ತಿಳಿಸಿದರು.

‘ಕೊರೊನಾ ವೈರಸ್ ಜಗತ್ತಿನ 28 ದೇಶಗಳಲ್ಲಿ ವ್ಯಾಪಿಸಿದ್ದು, 43,101 ಜನರು ಮೇಲೆ ಪರಿಣಾಮ ಬೀರಿದೆ. ಈವರೆಗೆ 1018 ಜನರು ಮೃತಪಟ್ಟಿದ್ದು, 4043 ರೋಗಿಗಳು ಗುಣಮುಖರಾಗಿದ್ದಾರೆ. ಭಾರತದಲ್ಲಿ 3 ಪ್ರಕರಣಗಳು ದೃಢಪಟ್ಟಿವೆ’ ಎಂದರು.

‘ಜ್ವರ, ಕೆಮ್ಮು, ಮೈಕೈ ನೋವು, ಹೊಟ್ಟೆನೋವು, ಬೇಧಿ, ಉಸಿರಾಟದ ತೊಂದರೆ, ನಿಶಕ್ತಿ ರೋಗದ ಲಕ್ಷಣಗಳಿರುತ್ತವೆ. ರೋಗ ತೀವ್ರವಾದಲ್ಲಿ ಕಾಮಾಲೆ, ಹಾಗೂ ಉಸಿರಾಟದ ಸಮಸ್ಯೆ ತೀವ್ರ ವಾಗುತ್ತದೆ’ ಎಂದು ಕಾಯಿಲೆಯ ಬಗ್ಗೆ ತಿಳಿಸಿದರು.

‘ಮಾಂಸಾಹಾರದಿಂದ ಈ ರೋಗ ಬರುವ ಸಾಧ್ಯತೆ ಹೆಚ್ಚು. ಮಾಂಸವನ್ನು ಸರಿಯಾಗಿ ಬೇಯಿಸಿದ ನಂತರವೇ ಸೇವಿಸಬೇಕು. ಎನ್-95 ಮಾಸ್ಕ್ ಬಳಕೆ ಸುರಕ್ಷಿತವಾಗಿರುತ್ತದೆ. ಕೊರೊನಾ ವೈರಸ್‌ಗೆ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಆದರೂ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್‌ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭಂವರ್ ಸಿಂಗ್ ಮೀನಾ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಇದ್ದರು.

*
ಹೊರ ದೇಶಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರೂ ಸಾವಿಗೀಡಾದವರ ಪ್ರಮಾಣ ಶೇಕಡ 2ರಷ್ಟು ಮಾತ್ರ ಇದೆ. ಯಾರೂ ಭಯಪಡುವ ಅಗತ್ಯವಿಲ್ಲ.
-ಡಾ.ಮಹೇಶ ತೊಂಡಾರೆ, ಬ್ರಿಮ್ಸ್‌ನ ವೈದ್ಯಾಧಿಕಾರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು