ಮಂಗಳವಾರ, ಜೂನ್ 22, 2021
29 °C
ಲಕ್ಷಣ ಕಂಡರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ: ಚವಾಣ್

ಲಾಕ್‍ಡೌನ್‍ನಿಂದ ಕೋವಿಡ್ ಪ್ರಕರಣ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಲಾಕ್‍ಡೌನ್‍ನಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂಚೆ ಮೇ 24 ರ ವರೆಗೆ ಲಾಕ್‍ಡೌನ್ ಘೋಷಿಸಿದ್ದರು. ತಜ್ಞರ ಸಲಹೆ ಮೇರೆಗೆ ಅದನ್ನು ಜೂನ್ 7 ರ ವರೆಗೆ ವಿಸ್ತರಿಸಿದ್ದಾರೆ. ಸಾರ್ವಜನಿಕರು ಲಾಕ್‍ಡೌನ್ ನಿಯಮ ಪಾಲಿಸಿ ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಸಹಕರಿಸಬೇಕು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಶನಿವಾರ 59 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಾಲ್ವರು ಮೃತಪಟ್ಟಿದ್ದಾರೆ. 297 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 2,16,463 ಜನ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಗೂ 69,115 ಜನ ಎರಡನೇ ಡೋಸ್ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಆದ್ಯತೆ ಅನುಸಾರ 18 ವರ್ಷ ಮೇಲ್ಪಟ್ಟವರ ಲಸಿಕಾರಣಕ್ಕೆ ಚಾಲನೆ ನೀಡಲಾಗಿದೆ. ಅರ್ಹ ಪ್ರತಿಯೊಬ್ಬರೂ ಲಸಿಕೆ ಪಡೆದು ಸೋಂಕು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ತರಲು ಪರೀಕ್ಷೆ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಪ್ರತಿ ದಿನ ಮೂರು ಸಾವಿರ ಕೋವಿಡ್ ಪರೀಕ್ಷೆ ನಡೆಸುವ ಗುರಿ ನೀಡಲಾಗಿದೆ ಎಂದು ತಿಳಿಸಿದರು.

ಹೋಮ್ ಐಸೋಲೇಶನ್‍ನಲ್ಲಿ ಇರುವ ಸೋಂಕಿತರ ಮೇಲೆ ನಿಗಾ ಇಡಲು ನಿರ್ದೇಶನ ಕೊಡಲಾಗಿದೆ ಎಂದರು. ಕೆಮ್ಮು, ನೆಗಡಿ, ಜ್ವರದಂತಹ ಕೋವಿಡ್ ಲಕ್ಷಣಗಳು ಕಂಡು ಬಂದರೆ ಯಾವುದೇ ಮುಚ್ಚು ಮರೆ ಇಲ್ಲದೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ತೀವ್ರ ಸಮಸ್ಯೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.