ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೂರನೆಯ ಅಲೆ ಮೊದಲೇ ಎಚ್ಚರಿಕೆ ವಹಿಸಿ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿಕೆ
Last Updated 12 ಆಗಸ್ಟ್ 2021, 15:07 IST
ಅಕ್ಷರ ಗಾತ್ರ

ಬೀದರ್‌: ‘ಕೋವಿಡ್‌ ಮೂರನೇ ಅಲೆ ಬರುವ ಮೊದಲೇ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಬೇಕು’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ‘ಕೋವಿಡ್‌ ಸಂದರ್ಭದಲ್ಲಿ ಅನೇಕ ಜನ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ನಿಖರ ಮಾಹಿತಿ ಕಲೆ ಹಾಕಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ಮಾತನಾಡಿ, ’ಜಿಲ್ಲೆಯಲ್ಲಿ ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಮುಂದುವರಿಸಲಾಗಿದೆ. ಮಹಾರಾಷ್ಟ್ರದ ಗಡಿಗುಂಟ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಿ ನೆರೆಯ ರಾಜ್ಯದಿಂದ ಬರುವವರ ತಪಾಸಣೆ ತೀವ್ರಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಆರ್‌ಟಿಪಿಸಿಆರ್‌ ವರದಿ ಇಲ್ಲದೇ ಬಂದವರನ್ನು ಮರಳಿ ಕಳಿಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಸ್ಥಳದಲ್ಲೇ ರ್‍ಯಾಟ್‌ ಪರೀಕ್ಷೆ ನಡೆಸಿ ವರದಿ ನೆಗೆಟಿವ್‌ ಬಂದರೆ ಮಾತ್ರ ಜಿಲ್ಲೆಯೊಳಗೆ ಪ್ರವೇಶ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಮಾತನಾಡಿ, ‘ನಗರದ ನೂರು ಹಾಸಿಗೆಗಳ ತಾಯಿ–ಮಗು ಆಸ್ಪತ್ರೆಯಲ್ಲಿ ಮಕ್ಕಳ ಚಿಕಿತ್ಸೆಗಾಗಿ 72 ಹಾಸಿಗೆಗಳನ್ನು ಸಿದ್ಧಪಡಿಸಿಸಲಾಗಿದೆ. 20 ಹಾಸಿಗೆಗಳನ್ನು ಐಸಿಯುನಲ್ಲಿ ಕಾಯ್ದಿರಿಸಲಾಗಿದೆ. ಅಗತ್ಯ ಔಷಧಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಲಾಗಿದೆ’ ಎಂದು ಹೇಳಿದರು.

ಬ್ರಿಮ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಲಾಗಿವೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 24,284 ಜನರಿಗೆ ಕೋವಿಡ್‌ ಸೋಂಕು ತಗುಲಿತ್ತು. ಇದರಲ್ಲಿ 23,874 ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ 10ಕ್ಕೆ ಇಳಿದಿದೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ 396 ಜನ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ‘ಜಿಲ್ಲೆಯಲ್ಲಿ ಮುಂಗಾರು ಚೆನ್ನಾಗಿ ಆರಂಭವಾದರೂ ನಂತರ ಅತಿವೃಷ್ಟಿ ಆಗಿ ಸ್ವಲ್ಪ ಬೆಳೆ ಹಾಳಾಗಿದೆ. ಪ್ರಸ್ತುತ ಮಳೆ ಕೊರತೆ ಆಗಿ ಬೆಳೆಗಳು ಬಾಡುತ್ತಿವೆ. ಸಕಾಲದಲ್ಲಿ ಮಳೆಯಾಗದಿದ್ದರೆ ರೈತರು ತೊಂದರೆ ಅನುಭವಿಸಬೇಕಾಗಲಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಐಎಎಸ್‌ ಪ್ರೊಬೆಷನರಿ ಅಧಿಕಾರಿ ಕೃತಿಕಾ ಇದ್ದರು.

******BOX-1**********

ಕೇಂದ್ರ ಸರ್ಕಾರ ಜನರಿಗೆ ಲಸಿಕೆ ಕೊಡುತ್ತಿಲ್ಲ
ಬೀದರ್‌: ‘ಕೇಂದ್ರ ಸರ್ಕಾರ ಜನರಿಗೆ ಕೋವಿಡ್‌ ಲಸಿಕೆ ನೀಡುತಿಲ್ಲ. ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಸಾವಿರಾರು ಜನರು ಮೃತಪಟ್ಟಿದ್ದಾರೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಹೊಣೆ’ ಎಂದು ಎಸ್‌.ಆರ್.ಪಾಟೀಲ ಆರೋಪ ಮಾಡಿದರು.

‘ಅನೇಕ ಜನ ಕೋವಿಡ್‌ ನಿಂದ ಮೃತಪಟ್ಟರೂ ಸರ್ಕಾರ ತಾಂತ್ರಿಕ ಕಾರಣ ಉಲ್ಲೇಖಿಸಿ ತಪ್ಪು ಮಾಹಿತಿ ನೀಡುತ್ತಿದೆ. ಸತ್ಯವನ್ನು ಮರೆ ಮಾಚುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಬಿಜೆಪಿ ಮುಖಂಡರ ಆಂತರಿಕ ಕಚ್ಚಾಟದಿಂದ ಬೇಸತ್ತಿದ್ದಾರೆ. ಬರುವ ದಿನಗಳಲ್ಲಿ ಬಿಜೆಪಿ ಧೂಳಿಪಟವಾಗಲಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಬಸವರಾಜ ಬುಳ್ಳಾ, ದತ್ತಾತ್ರಿ ಮೂಲಗೆ, ಆನಂದ ದೇವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT