ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಾವು: ಪರಿಹಾರಕ್ಕೆ ಸೂಚನೆ

ಲಸಿಕಾಕರಣ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
Last Updated 13 ಅಕ್ಟೋಬರ್ 2021, 15:15 IST
ಅಕ್ಷರ ಗಾತ್ರ

ಬೀದರ್: ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ನಿಯಮಾನುಸಾರ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಗುರಿ ಸಾಧಿಸಬೇಕು. ಅತಿಹೆಚ್ಚು ಹಾಗೂ ಅತಿ ಕಡಿಮೆ ಲಸಿಕೆ ನೀಡಿದ ಕೇಂದ್ರಗಳನ್ನು ಗುರುತಿಸಬೇಕು. ಕಡಿಮೆ ಲಸಿಕಾಕರಣ ಆಗಿರುವ ಕಡೆ ಹೆಚ್ಚು ಗಮನ ಕೊಡಬೇಕು ಎಂದು ತಿಳಿಸಿದರು.

ಅಗತ್ಯವಾದರೆ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಮಾತನಾಡಿ, ಕೋವಿಡ್‍ನಿಂದ ಮೃತರಾದವರ ಕುಟುಂಬದವರು, ಸಂಬಂಧಿಕರು ಪರಿಹಾರಕ್ಕೆ ಸಂಬಂಧಿಸಿದ ಲಿಂಕ್ ಬಳಸಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 8,83,463 ಜನ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಗೂ 4,33,005 ಜನ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಇನ್ನೂ 3 ಲಕ್ಷ ಜನರಿಗೆ ಮೊದಲ ಡೋಸ್ ಕೊಡುವುದು ಬಾಕಿ ಇದೆ ಎಂದು ಹೇಳಿದರು.

ಜನರ ಮನವೊಲಿಸಿ ಲಸಿಕೆ ಕೊಡಲಾಗುತ್ತಿದೆ. ಲಸಿಕಾರಣಕ್ಕೆ ವಿವಿಧ ಇಲಾಖೆಗಳು ಸಹಕಾರ ನೀಡುತ್ತಿವೆ ಎಂದು ತಿಳಿಸಿದರು.
ತಮ್ಮ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕಿಸಲು ಕ್ರಮ ವಹಿಸದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಸೂಚಿಸಿದರು.

1,203 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 1,203 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಶುಂಠಿ, ಟೊಮೆಟೊ, ಮೆಣಸಿನಕಾಯಿ ಸೇರಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ರೂ. 1.07 ಕೋಟಿ ಪರಿಹಾರ ಮೊತ್ತದ ಅಂದಾಜು ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಭೆಗೆ ಮಾಹಿತಿ ನೀಡಿದರು.

ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸುವ ದಿಸೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರ ವಿಸ್ತರಣೆಗೆ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ಬಾಬುರೆಡ್ಡಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಡಾ. ಭುವನೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT