ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಮಕ್ಕಳಿರುವ ಶಾಲೆಗಳಲ್ಲಿ ಸಾಂಸ್ಕೃತಿಕ ಭವನ

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿಕೆ
Last Updated 17 ನವೆಂಬರ್ 2019, 10:46 IST
ಅಕ್ಷರ ಗಾತ್ರ

ಬೀದರ್: ‘ಅಧಿಕ ಮಕ್ಕಳಿರುವ ಸರ್ಕಾರಿ ಶಾಲೆಗಳಲ್ಲಿ ಆದ್ಯತೆಯ ಮೇಲೆ ಸಾಂಸ್ಕೃತಿಕ ಭವನ ನಿರ್ಮಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಬಹುತೇಕ ಕನ್ನಡ ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲೇ ಆಯೋಜಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲೂ ಕಾರ್ಯಕ್ರಮ ನಡೆಸಬೇಕು. ಎಲ್ಲ ತಾಲ್ಲೂಕುಗಳನ್ನು ಒಳಗೊಂಡು ಒಂದು ವರ್ಷದ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಅದರಂತೆ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

‘ಔರಾದ್ ತಾಲ್ಲೂಕು ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಗೆ ಹೊಂದಿಕೊಂಡಿದೆ. ಮರಾಠಿ ಪ್ರಭಾವ ಇರುವ ಗ್ರಾಮಗಳಲ್ಲಿ ಹೆಚ್ಚು ಹೆಚ್ಚು ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಅಂತಹ ಶಾಲೆಗಳ ಪಟ್ಟಿ ನೀಡಿದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ಜಿಲ್ಲಾ ರಂಗಮಂದಿರದಲ್ಲಿ ಕೆಲವು ಧ್ವನಿ ಹಾಗೂ ಬೆಳಕಿನ ಉಪಕರಣಗಳು ಕೆಟ್ಟಿವೆ. ಇವುಗಳನ್ನು ಸರಿಪಡಿಸಲು ಅಗತ್ಯ ಅನುದಾನ ಕೋರಿ ಕೇಂದ್ರ ಕಚೇರಿಗೆ ಪತ್ರ ಬರೆಯಲಾಗಿದೆ. ಆದರೆ, ಈವರೆಗೆ ಅನುದಾನ ಬಿಡುಗಡೆಯಾಗಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ ತಿಳಿಸಿದರು.

‘ಬೀದರ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ₹ 2 ಕೋಟಿ ಮಂಜೂರು ಮಾಡಲಾಗಿದ್ದು, 1 ಕೋಟಿ ಬಿಡುಗಡೆ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆಯವರು ಭವನ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು’ ಎಂದು ಸಚಿವರು ಸೂಚಿಸಿದರು.

ವಿಕಿಪಿಡಿಯಾ ಮಾದರಿಯಲ್ಲಿ ಗ್ರಾಮದ ಚರಿತ್ರೆ: ಸಿ.ಟಿ.ರವಿ

‘ವಿಕಿಪಿಡಿಯಾ ಮಾದರಿಯಲ್ಲಿ ರಾಜ್ಯದಲ್ಲಿ ಗ್ರಾಮಗಳ ಸಮೀಕ್ಷೆ ನಡೆಸಿ ಸಮಗ್ರ ಇತಿಹಾಸವನ್ನು ಅಂತರ್ಜಾಲದಲ್ಲಿ ಲಭ್ಯವಾಗುವಂತೆ ಮಾಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದರು.
‘ಗ್ರಾಮ ಚರಿತ್ರೆ ರಚನೆಗೆ ತಾಲ್ಲೂಕು ಮಟ್ಟದಲ್ಲಿ ನೋಡೆಲ್‌ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಗ್ರಾಮಮಟ್ಟದಲ್ಲಿ ಪಿಡಿಒಗಳನ್ನು ನೋಡಲ್‌ ಅಧಿಕಾರಿಯಾಗಿ ಬಳಸಿಕೊಳ್ಳಲಾಗುವುದು. ಕಾಲೇಜು ವಿದ್ಯಾರ್ಥಿಗಳಿಂದ ಅಧ್ಯಯನ ನಡೆಸಿ ಚರಿತ್ರೆ ರಚಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೊಸ ಅನುಭವ ಆಗಲಿದೆ. ಚರಿತ್ರೆ ದಾಖಲೆಯಾಗಿಯೂ ಉಳಿಯಲಿದೆ’ ಎಂದು ಹೇಳಿದರು.
‘ಗ್ರಾಮದ ಚರಿತ್ರೆಯಲ್ಲಿ ಸಾಮಾಜಿಕ ಸ್ಥಿತಿಗತಿ, ಬುಡಕಟ್ಟು ಜನರ ಬದುಕು, ಹುತಾತ್ಮ ಸೈನಿಕರ ಮಾಹಿತಿ ಇನ್ನಿತರ ಪ್ರಮುಖ ಅಂಶಗಳು ಇರಬೇಕು. ಈ ದಿಸೆಯಲ್ಲಿ ಮೊದಲು ಕಾಲೇಜುಗಳ ಪ್ರಾಚಾರ್ಯರನ್ನು ಒಂದೆಡೆ ಸೇರಿಸಿ ಅವರಿಗೆ ಮಾರ್ಗದರ್ಶನ ನೀಡಬೇಕು. ನಂತರ ಈ ಕಾರ್ಯವನ್ನು ಆರಂಭಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪೂರೆ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.

ಜಾತಿಗೆ ಸೀಮಿತವಾದ ಜಯಂತಿಗಳು

ಬೀದರ್‌: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಾರ್ವಜನಿಕ ಅಭಿಪ್ರಾಯ ಪಡೆದು ನಂತರ ರಾಜ್ಯ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಸರ್ಕಾರದಿಂದ ಜಯಂತಿ ಆಚರಿಸಬೇಕೋ, ಬೇಡವೋ ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದರು.

ಸರ್ಕಾರದಿಂದ ಅಚರಿಸಲಾಗುವ ಮಹನಿಯರ ಜಯಂತಿಗಳು ಜಾತಿ ಮತ್ತು ಸಮುದಾಯ ಕೇಂದ್ರೀತವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳ, ಸಮಾಜ ಮುಖಂಡರ ಹಾಗೂ ಸಂಘ ಸಂಸ್ಥೆಗಳ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT