ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಸನ್ಮಾನ ಸಮಿತಿ ಪುನರ್‌ರಚನೆಗೆ ಸಂಘ, ಸಂಸ್ಥೆಗಳ ಮನವಿ
Last Updated 18 ಅಕ್ಟೋಬರ್ 2019, 14:35 IST
ಅಕ್ಷರ ಗಾತ್ರ

ಬೀದರ್‌: ‘ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಪ್ರಯುಕ್ತ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನವೆಂಬರ್‌ 1 ರಂದು ಬೆಳಿಗ್ಗೆ 7.30ಕ್ಕೆ ಎಲ್ಲ ಸರ್ಕಾರಿ, ಸಂಘ ಸಂಸ್ಥೆಗಳು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವವನ್ನು ಆಚರಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಬೆಳಿಗ್ಗೆ 8 ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಗುವುದು. ನಂತರ ಅಲಂಕೃತ ವಾಹನದಲ್ಲಿ ಭುವನೇಶ್ವರಿ ಚಿತ್ರದ ಭವ್ಯ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಲಾ ತಂಡಗಳು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಮೆರವಣಿಗೆಯು ಶಿಸ್ತು ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಲು ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜನೆ ಮಾಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

‘ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಮಂಗಲಪೇಟ್‍ನ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಲಿದೆ. ನಂತರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಧ್ವಜಾರೋಹಣ ನೆರವೇರಿಸುವರು’ ಎಂದು ತಿಳಿಸಿದರು.

‘ಮೆರವಣಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಬಿಸ್ಕತ್‌ ವಿತರಿಸಬೇಕು. ನಗರದ ಎಲ್ಲ ವೃತ್ತಗಳಿಗೆ
ದೀಪಾಲಂಕಾರ ಮಾಡಬೇಕು. ಮೆರವಣಿಗೆ ಮಾರ್ಗದಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ನಗರಸಭೆ ಆಯುಕ್ತರಿಗೆ ನಿರ್ದೇಶನ ನೀಡಿದರು.

‘ಸಂಜೆ ಜಿಲ್ಲಾ ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ ಕಾಲೇಜುಗಳಲ್ಲಿ ನಡೆಸಲಾಗುವ ಭಾಷಣ, ನಿಬಂಧ ಸ್ಪರ್ಧೆಯ ಜತೆಗೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಬರಹ ಸ್ಪರ್ಧೆಯನ್ನು ಆಯೋಜಿಸಬೇಕು’ ಎಂದು ಸಲಹೆ ನೀಡಿದರು.

‘ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು’ ಎಂದು
ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ’ ನೀಡಿದರು.

ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ,‘ ಜಿಲ್ಲೆಯಲ್ಲಿರುವ ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿ, ‘ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಅಥವಾ ಇತರೆ ದಿನಾಚರಣೆಗಳಲ್ಲಿ ರಚಿಸಲಾದ ಸನ್ಮಾನ ಸಮಿತಿ ಸದಸ್ಯರನ್ನು ಬದಲಾಯಿಸಬೇಕು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ಸನ್ಮಾನ ಸಮಿತಿ, ಮೆರವಣಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ನಗರಸಭೆ ಆಯುಕ್ತ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಮುಖಂಡರಾದ ಅನಿಲ ಬೆಲ್ದಾರ್‌, ರಾಜು ಕಡ್ಯಾಳ, ಶ್ರೀಮಂತ ಸಪಾಟೆ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT