ಬೀದರ್: ಮಳೆಯಿಲ್ಲದೆ ಬೆಳೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ವರ್ಷ ಬರಕ್ಕೆ ಜಿಲ್ಲೆಯಲ್ಲಿ ಶೇ 70ರಷ್ಟು ಬೆಳೆ ಹಾಳಾಗಿದೆ. ಒಬಿರಾಯನ ಕಾಲದ ಪರಿಹಾರ ಕೊಟ್ಟರೆ ರೈತರಿಗೆ ಪ್ರಯೋಜನವಾಗುವುದಿಲ್ಲ. ಕನಿಷ್ಠ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಬೆಳೆ ಹಾನಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ಗೋದಾವರಿಯ ಸಂಪೂರ್ಣ ನೀರಿನ ಸದ್ಭಳಕೆಯಾದರೆ ರೈತರಿಗೆ ಅನುಕೂಲವಾಗುತ್ತದೆ. 21 ಟಿಎಂಸಿ ನೀರು ಬಳಸಿಕೊಳ್ಳಬಹುದು. ಇದಕ್ಕಾಗಿ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಿದ್ದಾರೆ.
ಬಿಎಸ್‌ಎಸ್‌ಕೆ ಆಧುನೀಕರಣಗೊಳಿಸಿ, ರೈತರು–ಕಾರ್ಮಿಕರು ಹಿತ ರಕ್ಷಿಸಬೇಕು. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು. ಬೆಳೆ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಕೊಡಬೇಕು. ಕಾರ್ಖಾನೆಯಲ್ಲಿ ಸಕ್ಕರೆ ಇಳುವರಿಯಲ್ಲಿ ಮೋಸ ಮಾಡಲಾಗುತ್ತಿದೆ. ಕಬ್ಬಿಗೆ ಬೆಲೆ ನಿಗದಿ ಮಾಡಿಲ್ಲ. ಪ್ರತಿ ಟನ್ ಕಬ್ಬಿಗೆ ಹೋದ ವರ್ಷ ನೀಡಲಾಗುತ್ತಿದ್ದ ಹಣಕ್ಕಿಂತ ₹300 ಹೆಚ್ಚಿಸಬೇಕು. ಜಮೀನು ಸರ್ವೇಗೆ ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.