ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಸಮಾಜ ಪರಿವರ್ತನೆ ಹರಿಕಾರ

ಅರಸು ಜಯಂತಿ ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಗೀತಾ ಅಭಿಮತ
Last Updated 20 ಆಗಸ್ಟ್ 2019, 15:47 IST
ಅಕ್ಷರ ಗಾತ್ರ

ಬೀದರ್: ‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಮಾಜ ಪರಿವರ್ತನೆಯ ಹರಿಕಾರರಾಗಿದ್ದರು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 104ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಸಮಾನತೆ, ಜಾತಿ ವ್ಯವಸ್ಥೆ, ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಶ್ರಮಿಸಿದ್ದರು. ಶೋಷಿತರು, ಸಮಾಜದ ಕೆಳ ಸ್ತರದ ಜನರಿಗೆ ಅನೇಕ ಯೋಜನೆಗಳ ಮೂಲಕ ಹೊಸ ಚೈತನ್ಯ ನೀಡಿದ್ದರು. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದರು’ ಎಂದು ಹೇಳಿದರು.

‘ಭೂ ಸುಧಾರಣೆ ಕಾಯ್ದೆಯಲ್ಲಿ ಬದಲಾವಣೆ ತಂದು ಬಡವರಿಗೂ ಭೂಮಿ ದೊರಕುವಂತೆ ಮಾಡಿದ್ದರು. ಅರೆ ಸರ್ಕಾರಿ ನೌಕರರಿಗೆ ಬ್ಯಾಂಕ್ ಮೂಲಕ ಸಂಬಳ ಪಾವತಿಸಿದ್ದರು. ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಥಾಪಿಸಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಏಳಿಗೆಗೆ ಪ್ರಯತ್ನಿಸಿದ್ದರು’ ಎಂದು ತಿಳಿಸಿದರು.

‘ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದರು. ಹಾವನೂರು ಆಯೋಗ ರಚಿಸಿದ್ದರು. ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಮಾಡಿದ್ದರು. ‘ಅರಸು ಪ್ರತಿಭೆ ಬಲದಿಂದ ಉನ್ನತ ಸ್ಥಾನಕ್ಕೆ ಏರಿದ್ದರು. ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ’ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರಮೇಶ ದೇವಮಾನೆ ಮಾತನಾಡಿ, ‘ಸಮಾಜದ ಕಟ್ಟಡ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡಲು ಅರಸು 1977ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸ್ಥಾಪಿಸಿದ್ದರು’ ಎಂದು ತಿಳಿಸಿದರು.

‘ಇಲಾಖೆಯಿಂದ ಹಿಂದುಳಿದ ವರ್ಗದವರಿಗೆ ವಿವಿಧ ರೀತಿಯ ನೆರವು ಒದಗಿಸಲಾಗುತ್ತಿದೆ. ವಸತಿ ನಿಲಯ, ವಿದ್ಯಾಭ್ಯಾಸಕ್ಕೆ ನೆರವು, ಪ್ರತಿಭಾ ಪುರಸ್ಕಾರ ಮೊದಲಾದ ಯೋಜನೆಗಳು ಜಾರಿಯಲ್ಲಿ ಇವೆ. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಜಿಲ್ಲೆಯಲ್ಲಿ ಎರಡು ಹೊಲಿಗೆ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಕರ್ನಾಟಕ ಕಾಲೇಜು ನಿವೃತ್ತ ಪ್ರಾಚಾರ್ಯ ಗಂಗು ವಿಜಯಕುಮಾರ ವಿಶೇಷ ಉಪನ್ಯಾಸ ನೀಡಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶೇಖರ ಬಾಬು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂತಿಕ ವ್ಯವಸ್ಥಾಪಕಿ ನಾಗಮಣಿ, ತಾಲ್ಲೂಕು ಅಧಿಕಾರಿ ಅಶೋಕ, ಗೋಕುಲಸಿಂಗ್ ಉಪಸ್ಥಿತರಿದ್ದರು. ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

ಜಿಲ್ಲಾಧಿಕಾರಿ ಕಚೇರಿ:

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಅವರು ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT