ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಯುಕ್ತ ಕೃಷಿ ಉಪಕರಣ ವಿತರಿಸಿ

ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಸೂಚನೆ
Last Updated 16 ಜುಲೈ 2018, 16:35 IST
ಅಕ್ಷರ ಗಾತ್ರ

ಬೀದರ್‌: ‘ಕೃಷಿ ಕಾರ್ಯಗಳಿಗೆ ಹೆಚ್ಚು ಅನುಕೂಲಕರವಾಗಿರುವ ಕಡಿಮೆ ಖರ್ಚಿನ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ವಿತರಿಸಬೇಕು. ಈ ಮೂಲಕ ಕೃಷಿಗೆ ಉತ್ತೇಜನ ನೀಡಬೇಕು’ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಸೂಚನೆ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ‘₹ 1 ಸಾವಿರ ಹಾಗೂ ₹ 800 ಬೆಲೆಯ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಲು ಯಾವುದೇ ತೊಂದರೆ ಇಲ್ಲ. ಶ್ರಮಿಕ ಹಾಗೂ ಬಡ ರೈತರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು’ ಎಂದರು.

‘ಕಳೆದ ವರ್ಷ ಬೀದರ್‌ ಜಿಲ್ಲೆಯಲ್ಲಿ 1.80 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಬೆಳೆ ವಿಮೆ ಮಾಡಿಸಲು ಪ್ರಯತ್ನಿಸಬೇಕು’ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ ಪಾಟೀಲ ಮಾತನಾಡಿ, ‘ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು’ ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್‌ ಮಾತನಾಡಿ, ‘ಬೀದರ್‌ ಜಿಲ್ಲೆಯ ರೈತರು 2016–2017ನೇ ಸಾಲಿನಲ್ಲಿ ಬೆಳೆ ವಿಮೆ ಹಾಗೂ ಇನ್‌ಪುಟ್‌ ಸಬ್ಸಿಡಿ ಸೇರಿ ₹ 5.75 ಕೋಟಿ ಪಡೆದುಕೊಂಡಿದ್ದಾರೆ. ₹ 13 ಕೋಟಿ ವಿಮಾ ಕಂತು ಪಾವತಿಸಿ ₹149 ಕೋಟಿ ಬೆಳೆ ಪರಿಹಾರ ಪಡೆದಿದ್ದಾರೆ’ ಎಂದು ತಿಳಿಸಿದರು.

‘ಕಳೆದ ವರ್ಷ 1.80 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದರು. ಈ ವರ್ಷ ಕೇವಲ 80 ಸಾವಿರ ಜನ ನೋಂದಣಿ ಮಾಡಿಸಿದ್ದಾರೆ. ಬೆಳೆ ವಿಮೆ ಕಂತು ಪಾವತಿಸಲು ಇನ್ನೂ 14 ದಿನಗಳು ಬಾಕಿ ಇವೆ. ಹೆಚ್ಚಿನ ರೈತರು ಬೆಳೆ ವಿಮೆ ಮಾಡಿಸುವ ನಿರೀಕ್ಷೆ ಇದೆ. ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಭಾಲ್ಕಿ ಹಾಗೂ ಬಸವಕಲ್ಯಾಣ ತಾಲ್ಲೂಕಿನ ತಲಾ ಒಬ್ಬ ರೈತ ಬಿಟ್ಟರೆ ಉಳಿದ ತಾಲ್ಲೂಕುಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. ಫೋರೆನ್ಸಿಕ್‌ ಲ್ಯಾಬ್‌ ವರದಿ ಬಂದ ನಂತರ ಬಾಕಿ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.

‘ಸೂಕ್ಷ್ಮ ನೀರಾವರಿ, ಕೃಷಿ ಯಂತ್ರೋಪಕರಣ ವಿತರಣೆಯಲ್ಲಿ ಶೇ 96ರಷ್ಟು ಸಾಧನೆ ಮಾಡಲಾಗಿದೆ. ಬೀದರ್‌ ಜಿಲ್ಲೆಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಬಜೆಟ್‌ನಲ್ಲಿ ಮಂಜೂರಾತಿ ನೀಡಲಾಗಿದೆ’ ಎಂದು ಹೇಳಿದರು.

ಶಾಸಕ ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯರಾದ ವಿಜಯಸಿಂಗ್‌, ಅರವಿಂದ ಅರಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಉಪಾಧ್ಯಕ್ಷ ಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ್, ಜಿಲ್ಲಾ ಪಂಚಾಯಿತಿ ಸಿಇಒ ಆರ್‌.ಸೆಲ್ವಮಣಿ ಇದ್ದರು.

ಸಂಪೂರ್ಣ ಸಾಲ ಮನ್ನಾ ಮಾಡಿ

ಬೀದರ್: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ₹ 2 ಲಕ್ಷ ದವರೆಗೆ ಸಾಲ ಮನ್ನಾ ಮಾಡಿದರೂ ಅನೇಕ ಷರತ್ತುಗಳನ್ನು ವಿಧಿಸಲಾಗಿದೆ. ಇದರಿಂದ ಹೆಚ್ಚು ಜನರಿಗೆ ಉಪಯೋಗ ಆಗಲಾರದು. ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಬಗೆಯ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಬೀದರ್ ಜಿಲ್ಲೆಯಲ್ಲಿ 1.57 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾ ಬಿತ್ತನೆ ಮಾಡಲಾಗಿದೆ. ತೊಗರಿ, ಉದ್ದು ಕಡಿಮೆ ಬಿತ್ತನೆಯಾಗಿದೆ.
ಜಿಯಾವುಲ್‌ಕೃಷಿ ಇಲಾಖೆಯ ಜಂಟಿ ನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT