ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲ ಸಿದ್ಧತೆಗೆ ಜಿಲ್ಲಾಡಳಿತ ಸೂಚನೆ

15ರಂದು ಸಂತ ಸೇವಾಲಾಲ ಜಯಂತಿ, ಭಾವಚಿತ್ರ ಮೆರವಣಿಗೆ
Last Updated 13 ಫೆಬ್ರುವರಿ 2020, 8:53 IST
ಅಕ್ಷರ ಗಾತ್ರ

ಬೀದರ್‌: ‘ಫೆ.15ರಂದು ಸಂತ ಸೇವಾಲಾಲ ಜಯಂತಿಯ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸೇವಾಲಾಲ್‌ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವರ್ಧನ್ ರಾಠೋಡ್ ಮಾತನಾಡಿ, ‘ಜಿಲ್ಲಾಡಳಿತದಿಂದ ಸೇವಾಲಾಲ್ ಜಯಂತಿ ಆಚರಿಸುತ್ತಿರುವುದು ಸ್ವಾಗತಾರ್ಹ. ಜಿಲ್ಲಾ ಕೇಂದ್ರದಲ್ಲಿ ಆಚರಿಸುವಂತೆ ಗ್ರಾಮ ಪಂಚಾಯಿತಿಗಳಲ್ಲಿಯೂ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು’ ಎಂದರು.

ಮನ್ನಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸುಭಾಷ ರಾಠೋಡ್ ಅವರನ್ನು ಉಪನ್ಯಾಸ ನೀಡಲು ಆಹ್ವಾನಿಸುವಂತೆ ಕೋರಿದರು. ಇದಕ್ಕೆ ಎಲ್ಲ ಸದಸ್ಯರು ಸಹಾನುಮತಿ ಸೂಚಿಸಿದರು.

‘ಅಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಸಂತ ಸೇವಾಲಾಲ
ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ 9.30ಕ್ಕೆ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸೇರಬೇಕು. ಪೂಜೆ ನಂತರ ಮೆರವಣಿಗೆಗೆ ಚಾಲನೆ ನೀಡಲಾಗುವುದು’ ಎಂದು ರುದ್ರೇಶ ತಿಳಿಸಿದರು.

‘ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳನ್ನು ನಿಯೋಜಿಸಬೇಕು. ಕಾರ್ಯಕ್ರಮಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

‘ಸಂತ ಸೇವಾಲಾಲರ ಭಾವಚಿತ್ರವನ್ನು ಒಂದು ವಾಹನದಲ್ಲಿ ಅಲಂಕರಿಸಿ ಒಬ್ಬ ನುರಿತ ಸಿಬ್ಬಂದಿಯನ್ನು ನೇಮಿಸಬೇಕು. ಎಲ್ಲ ವೃತ್ತಗಳ ಮೇಲೆ ದೀಪಾಲಂಕಾರ,
ಸ್ವಚ್ಛತೆ ಕಾಪಾಡುವುದು ಹಾಗೂ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು’ ನಗರಸಭೆ ಆಯುಕ್ತರಿಗೆ ಹೇಳಿದರು.

‘ಮೆರವಣಿಗೆ ಸಾಗುವ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು’ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಯಿತು.

ಸಮಾಜದ ಮುಖಂಡರಾದ ಬಸವರಾಜ ಪವಾರ್ ಮಾತನಾಡಿದರು. ಡಿವೈಎಸ್‌ಪಿ ಬಸವೇಶ್ವರ ಹಿರಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT