ಮಂಗಳವಾರ, ಅಕ್ಟೋಬರ್ 27, 2020
28 °C
ಶಿಕ್ಷಣ ಸಚಿವ ಸುರೇಶ್‌ಕುಮಾರ್‌ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆ

ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಿಭಜಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ಬೀದರ್: ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಿಭಜಿಸಿ ಬೀದರ್ ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಪ್ರತ್ಯೇಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

ನಗರಕ್ಕೆ ಭೇಟಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರಿಗೆ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಕೇಂದ್ರದಲ್ಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕೆಲಸದ ಒತ್ತಡ ಅಧಿಕ ಇದೆ. ಸಿಬ್ಬಂದಿ ಮೇಲಿನ ಭಾರ ಕಡಿಮೆ ಮಾಡಿ, ಎಲ್ಲ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ನಡೆಯುವಂತಾಗಲು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಿಭಜಿಸುವ ಅಗತ್ಯ ಇದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಸಚಿವರ ಗಮನ ಸೆಳೆದರು.

ಬೀದರ್ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕಿರಿಯ, ಹಿರಿಯ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳ ಸಂಖ್ಯೆ ಹೆಚ್ಚಿದೆ. ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಶಿಕ್ಷಕರ ಸಂಖ್ಯೆ ಕೂಡ ಜಾಸ್ತಿ ಇದೆ. ಹೀಗಾಗಿ ಶಿಕ್ಷಕರ ವೇತನ ಹಾಗೂ ಇತರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮನವರಿಕೆ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ ಮೇಲೆ ಶಿಕ್ಷಕರ ಸೇವಾ ಪುಸ್ತಕ ಎಚ್‍ಆರ್‍ಎಂಎಸ್‍ನಲ್ಲಿ ಅಳವಡಿಸುವ, ಟಿಡಿಎಸ್, ಶಿಕ್ಷಕರ ರಜೆ, ವೇತನ, ಅಕ್ಷರ ದಾಸೋಹ, ಕ್ಷೀರಭಾಗ್ಯ, ಉಚಿತ ಸಮವಸ್ತ್ರ, ಪಠ್ಯ ಪುಸ್ತಕ, ಬೈಸಿಕಲ್, ಶೂ, ಸಾಕ್ಸ್ ವಿತರಣೆ, ಪ್ರತಿಭಾ ಕಾರಂಜಿ, ಕಲೋತ್ಸವ, ಕರ್ನಾಟಕ ದರ್ಶನ, ಯುವ ಸಂಸತ್, ಅಂತರ್ಜಾಲ ಸ್ಪರ್ಧೆ ಹಾಗೂ ಹೊಸ ಯೋಜನೆಗಳ ಅನುಷ್ಠಾನದ ಹೊಣೆ ಇರುವ ಕಾರಣ ಅವರು ಒತ್ತಡದಲ್ಲಿ ಕೆಲಸ ನಿರ್ವಹಿಸಬೇಕಾದ ಸ್ಥಿತಿ ಇದೆ ಎಂದು ಹೇಳಿದರು.

ಬೀದರ್ ತಾಲ್ಲೂಕಿನಲ್ಲಿ ಇರುವ ಶಾಲೆಗಳ ಸಂಖ್ಯೆ, ಮಕ್ಕಳ ಸಂಖ್ಯೆ, ಶಿಕ್ಷಕರ ಅನುಪಾತ ಈ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಶಿಕ್ಷಕರ ಬಹುದಿನಗಳ ಬೇಡಿಕೆಯಂತೆ ಬೀದರ್ ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಪ್ರತ್ಯೇಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸ್ಥಾಪಿಸಬೇಕು. ಹುಲಸೂರು, ಚಿಟಗುಪ್ಪ ಹಾಗೂ ಕಮಲನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಿಗೆ ಪೂರ್ಣ ಪ್ರಮಾಣದ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಸಂಬಂಧ ಇಲಾಖೆ ಮೂಲಕ ವರದಿ ತರಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಪ್ರಭುಲಿಂಗ ತೂಗಾವೆ, ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ನಿರ್ದೇಶಕ ಶಾಂತಕುಮಾರ ಬಿರಾದಾರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು