ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಮ ಪಾಲನೆಗೆ ನಿರ್ಲಕ್ಷ್ಯ ಬೇಡ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ
Last Updated 16 ಮಾರ್ಚ್ 2021, 15:43 IST
ಅಕ್ಷರ ಗಾತ್ರ

ಬೀದರ್‌: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಬಗ್ಗೆ ತಜ್ಞರ ಸಮಿತಿ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೀದರ್- ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್‌ ಇನ್ನೂ ತೊಲಗಿಲ್ಲ. ಯಾವುದೇ ಕಾರಣಕ್ಕೂ ಜನರು ನಿರ್ಲಕ್ಷ್ಯ ತೋರಿಸಬಾರದು. ಮನೆಯಿಂದ ಹೊರಬರುವಾಗ ತಪ್ಪದೇ ಮಾಸ್ಕ್ ಧರಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಮದುವೆ, ಧಾರ್ಮಿಕ, ಸಾಮಾಜಿಕ ಸಮಾರಂಭ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಕನಿಷ್ಠ ಸಂಖ್ಯೆಯ ಜನರು ಭಾಗವಹಿಸಬೇಕು ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಗಡಿ ರಾಜ್ಯಗಳ ಸಂಪರ್ಕಕ್ಕೆ ಬರುವ ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಇರಬೇಕು. ಜಿಲ್ಲೆಯ ಗಡಿ ಭಾಗಗಳಲ್ಲಿ ನಿರ್ಮಿಸಿರುವ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಹೊಸ ರೋಗಿಗಳ ಪತ್ತೆ ಕಾರ್ಯ ಚುರುಕುಗೊಳಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕೆ ನೀಡುವ ಕಾರ್ಯ ಜಿಲ್ಲೆಯಲ್ಲಿ ಉತ್ತಮವಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು 2ನೇ ಹಂತದಲ್ಲಿ 60 ವರ್ಷ ಮೆಲ್ಪಟ್ಟವರು ಹಾಗೂ 45-60 ವರ್ಷದವರೆಗಿನ ನಾನಾ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಲಸಿಕೆ ವಿತರಣೆ ಕಾರ್ಯ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಗಳು ಎಷ್ಟೇ ಬಿಗಿ ಕ್ರಮಗಳನ್ನು ತೆಗೆದುಕೊಂಡರೂ ಸಾರ್ವಜನಿಕರ ಸಹಕಾರವಿಲ್ಲದೇ ಸೋಂಕು ನಿಯಂತ್ರಣ ಅಸಾಧ್ಯ. ಹಾಗಾಗಿ ಜಿಲ್ಲೆಯ ಜನತೆ ಮೊದಲಿನಂತೆ ಸರ್ಕಾರಕ್ಕೆ ಸಹಕಾರ ನೀಡಬೇಕು. ಕೊರೊನಾ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-19 ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ತಡ ಮಾಡಿದಷ್ಟು ಅಪಾಯಕಾರಿ. ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ವೈದ್ಯರ ಸಲಹೆಯನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT