ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್ ನಿರ್ವಹಣೆಯಲ್ಲಿ ಲೋಪ ಸಲ್ಲದು’

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒಗಳ ಜತೆ ವಿಡಿಯೊ ಸಂವಾದ
Last Updated 18 ಮೇ 2021, 3:36 IST
ಅಕ್ಷರ ಗಾತ್ರ

ಔರಾದ್: ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಣಾಮ ಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ತಾಲ್ಲೂಕಿನ ವಿವಿಧ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜತೆ ವಿಡಿಯೊ ಸಂವಾದ ನಡೆಸಿ ಕೋವಿಡ್ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಪ್ರತಿ ಗ್ರಾಮದಲ್ಲಿ ನಿತ್ಯ ಎಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ತಡೆಯಲು ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತು ಪಿಡಿಒಗಳಿಂದ ಮಾಹಿತಿ ಪಡೆದರು. ಕೆಲವರಿಂದ ಸಮರ್ಪಕ ಮಾಹಿತಿ ಸಿಗದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕೋವಿಡ್ ನಿರ್ವಹಣೆಯಲ್ಲಿ ಲೋಪ ಆದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಿಡಿಒಗಳು ನಿತ್ಯ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅಲ್ಲಿಯ ಸಿಬ್ಬಂದಿಯಿಂದ ಕೆಲಸ ಮಾಡಿಸಬೇಕು. ಪ್ರತಿ ಗ್ರಾಮಕ್ಕೆ ಭೇಟಿ ಕೊಟ್ಟು ಕೋವಿಡ್ ಕುರಿತು ಮಾಹಿತಿ ಕಲೆ ಹಾಕಬೇಕು. ಮಾಸ್ಕ್ ಇಲ್ಲದೆ ಯಾರೂ ಹೊರ ಬಾರದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದ ಕಡೆ ಜನ ಸೇರಿದರೂ ಅಲ್ಲಿ ಅಂತರ ಕಾಯ್ದುಕೊಳ್ಳುವ ಕೆಲಸ ಆಗಬೇಕು. ಪ್ರತಿ ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಸದ್ಯದ ಕೋವಿಡ್ ಅಲೆ ನಿರ್ವಹಣೆ ಹಾಗೂ ಮುಂದೆ ಬರುವ 3ನೇ ಅಲೆ ಎದುರಿಸಲು ಅಧಿಕಾರಿಗಳು ಸಿದ್ಧರಾಗಬೇಕು. ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಮಾಡಬೇಕು. ದಿನದ 24 ಗಂಟೆ ಮೊಬೈಲ್ ಚಾಲನೆಯಲ್ಲಿ ಇಡಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿ ಗ್ರಾಮ ಸೋಂಕಿನಿಂದ ಮುಕ್ತವಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್ ಮಾತನಾಡಿ, ಕೊರೊನಾ ಸೋಂಕು ಗ್ರಾಮಾಂತರ ಪ್ರದೇಶಕ್ಕೂ ವ್ಯಾಪಿಸಿದೆ. ಈ ಕಾರಣ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪಿಡಿಒಗಳು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಹಿತಿ ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಇದ್ದರು.

ಸಂತಪುರ, ಕೌಠಾ ಪಿಡಿಒಗೆ ನೋಟಿಸ್

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೋಮವಾರ ಸಂತಪುರ ಹಾಗೂ ಕೌಠಾ (ಬಿ) ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡ ಕ್ರಮದ ಕುರಿತು ಪಿಡಿಒ ಹಾಗೂ ಅಲ್ಲಿಯ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೆಲ ವಿಷಯ ಕುರಿತು ಸಮರ್ಪಕ ಮಾಹಿತಿ ನೀಡದ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರು. ಇವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವರಿಗೆ ನೋಟಿಸ್ ಕೊಟ್ಟು ಕ್ರಮ ಜರುಗಿಸಿ ಎಂದು ಸ್ಥಳದಲ್ಲಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಸಚಿವರ ಸೂಚನೆಯಂತೆ ಸಂತಪುರ ಪಿಡಿಒ ಅನೀಲ, ಕೌಠಾ ಪಿಡಿಒ ಕುಮುದಾ ಅವರಿಗೆ ತಾ.ಪಂ ಇಒ ಮಾಣಿಕರಾವ ಪಾಟೀಲ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT