ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂಮಿ ಪರಭಾರೆ ಕಾಯ್ದೆ
Last Updated 19 ಫೆಬ್ರುವರಿ 2020, 11:55 IST
ಅಕ್ಷರ ಗಾತ್ರ

ಬೀದರ್: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್ 1978-79)ಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್ 1978-79)ಗೆ ಸಂಬಂಧಿಸಿದಂತೆ ಕೆಲ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಕಾಯ್ದೆಯ ಸೆಕ್ಷನ್ 5 ರ ವಿರುದ್ಧ ತೀರ್ಪು ಕೊಟ್ಟಿವೆ. ಕಾರಣ, ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿಗಳ ಕೋರ್ಟ್‌ಗಳಲ್ಲಿ ಬಹುತೇಕ ಪ್ರಕರಣಗಳನ್ನು ವಜಾಗೊಳಿಸುತ್ತಿರುವುದನ್ನು ತಡೆಯಲು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕಾಯ್ದೆಗೆ ಧಕ್ಕೆಯಾಗದಂತೆ ಸೂಕ್ತ ತಿದ್ದುಪಡಿ ತರಬೇಕು. ದಲಿತರ ಹಿತ ರಕ್ಷಿಸಬೇಕು ಎಂದು ಒತ್ತಾಯಿಸಿದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಇರುವ ಮೀಸಲಾತಿಯನ್ನು ಅದರೊಳಗಿನ ಉಪ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಲು ಪ್ರತ್ಯೇಕ ಆಯೋಗ ರಚಿಸಬೇಕು. ಬಗರ್ ಹುಕುಂ ಸಕ್ರಮೀಕರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಜಾಗೊಂಡ ಅರ್ಜಿಗಳ ಪುನರ್ ಪರಿಶೀಲನೆಗೆ ಆದೇಶ ಹೊರಡಿಸಬೇಕು.

ಕರ್ನಾಟಕ ಭೂ ಮಂಜೂರಾತಿ ನಿಯಮ 1969 ರ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಭೂಮಿ ಶಾಸನ ಜಾರಿಗೆ ತರಬೇಕು. ದಲಿತರಿಗೆ ನಿಯಮಾನುಸಾರ ಭೂಮಿ ಕೊಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಒದಗಿಸುವ ಅನುದಾನ ಸರ್ಕಾರಕ್ಕೆ ಮರಳಿ ಹೋಗದಂತೆ ನೋಡಿಕೊಳ್ಳಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ಕಲ್ಪಿಸಿದ್ದರೂ ₹50 ಲಕ್ಷದ ಕಾಮಗಾರಿಗಳಿಗೆ ಮಾತ್ರ ಅನ್ವಯಿಸುತ್ತಿರುವುದರಿಂದ ಅನ್ಯಾಯವಾಗುತ್ತಿದೆ. ಇದನ್ನು ಸಡಿಲಗೊಳಿಸಿ ಯಾವುದೇ ಮಿತಿ ವಿಧಿಸದೆ ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸರ್ಕಾರಿ ಸೇವೆಯ ನೇರ ನೇಮಕಾತಿ ಮತ್ತು ಬಡ್ತಿ ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಇದರ ವಿರುದ್ಧ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಬಣ)ಯ ರಾಜ್ಯ ಸಂಘಟನಾ ಸಂಚಾಲಕ ಅರುಣ ಕುದರೆ, ಜಿಲ್ಲಾ ಸಂಚಾಲಕ ಜೀವನ ಬುಡ್ತಾ, ಸಂಘಟನಾ ಸಂಚಾಲಕರಾದ ಪ್ರಭಾಕರ ಹೊನ್ನಾ, ನಾಗೇಶ ಭಾವಿಕಟ್ಟಿ, ಪ್ರಭಾಕರ ಭೋಸ್ಲೆ, ರಜನಿಕಾಂತ ನಿಜಾಂಪುರೆ, ಗುಂಡಪ್ಪ ಜ್ಯೋತಿ, ಮನೋಜ ಕೊಹ್ಲಿ, ಮಲ್ಲಿಕಾರ್ಜುನ ಕಾಂಬಳೆ, ಖಜಾಂಚಿ ಪ್ರಕಾಶ ಮಾಳಗೆ, ಕಿಶೋರ ಕೇಸರಿ, ಶಿವರಾಜ ಬಿ., ಪ್ರದೀಪ ಕುದರೆ, ಮಲ್ಲಿಕಾರ್ಜುನ ಫುಲೆ, ಧನರಾಜ ಮುಸ್ತಾಪುರೆ, ದೀಲಿಪ ದೊಡ್ಡಿ, ಕೃಷ್ಣಪ್ಪ ಖರ್ಗೆ, ಸತೀಶ ಕೇಸರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT