ಶುಕ್ರವಾರ, ಮಾರ್ಚ್ 31, 2023
26 °C
ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮದ ಅಧ್ಯಕ್ಷ ಧ್ರುವನಾರಾಯಣ ಆರೋಪ

ಆಡಳಿತ ವೈಫಲ್ಯದಿಂದ ದೇಶಕ್ಕೆ ಆರ್ಥಿಕ ಸಂಕಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ವಿದೇಶದಿಂದ ಬರುತ್ತಿದ್ದವರನ್ನು ಆರಂಭದಲ್ಲೇ ಕ್ವಾರಂಟೈನ್‌ ಮಾಡಿದ್ದರೆ ದೇಶ ಕೋವಿಡ್‌ನಂತಹ ಗಂಭೀರ ಸಮಸ್ಯೆಗೆ ಸಿಲುಕುತ್ತಿರಲಿಲ್ಲ. ದೇಶದ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿಯಲು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ’ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮದ ಅಧ್ಯಕ್ಷ ಧ್ರುವನಾರಾಯಣ ಆರೋಪಿಸಿದರು.

ಇಲ್ಲಿಯ ಎಂ.ಎಸ್‌.ಪಾಟೀಲ ಫಂಕ್ಷನ್‌ ಹಾಲ್‌ನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಆಯೋಜಿಸಿದ್ದ ಆರೋಗ್ಯ ಹಸ್ತ ಮಾಹಿತಿ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮ ಹಾಗೂ ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬಿಜೆಪಿಯವರು ಅಮೆರಿಕದ ಅಧ್ಯಕ್ಷ ಟ್ರಂಪ್‌ ಮೆಚ್ಚಿಸಲು ಲಕ್ಷಾಂತರ ಜನರನ್ನು ಸೇರಿಸಿದರು. ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವಂತೆ ಮಾಡಿದರು. ಪ್ರಸ್ತುತ ವಿಶ್ವದಲ್ಲಿ 2ನೇ ಸ್ಥಾನದಲ್ಲಿರುವ ಭಾರತ ಕೆಲವೇ ದಿನಗಳಲ್ಲಿ ಒಂದನೇ ಸ್ಥಾನಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದರು.

‘ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ನಿತ್ಯ ಸರಾಸರಿ 9,500 ರಿಂದ 10,500ರ ವರೆಗೆ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಸರ್ಕಾರ ಕೋವಿಡ್‌ ಸೋಂಕು ತಡೆಯ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಿರುವುದನ್ನು ಬಿಟ್ಟರೆ ಜನರಿಗೆ ಅನುಕೂಲವಾಗುವಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ಕೋವಿಡ್ ಹರಡುವಿಕೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಸೋಂಕು ಪತ್ತೆ ಪರೀಕ್ಷೆ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಇದರ ಬಗ್ಗೆ ಸರ್ಕಾರಕ್ಕೆ ಆಸಕ್ತಿಯೂ ಇಲ್ಲ. ಜನರು ಸಂಕಷ್ಟದಲ್ಲಿರುವ ಕಾರಣ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕ್ರಮ ರೂಪಿಸಿದೆ. ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.

’ಆರೋಗ್ಯ ಹಸ್ತ ಅಭಿಯಾನಕ್ಕಾಗಿ ಕಾಂಗ್ರೆಸ್‌ನ 15 ಸಾವಿರ ಕೊರೊನಾ ವಾರಿಯರ್‌ಗಳಿಗೆ ತರಬೇತಿ ನೀಡಲಾಗಿದೆ.
ಕಾಂಗ್ರೆಸ್‌ನ ವೈದ್ಯ ಘಟಕದ ವೈದ್ಯರು ಪಕ್ಷದ ಕಾರ್ಯಕ್ಕೆ ಕೈಜೋಡಿಸಿ ಜನರ ನೆರವಿಗೆ ಮುಂದಾಗಿದ್ದಾರೆ.
ಪ್ರತಿ ಗ್ರಾಮದಲ್ಲೂ ಮನೆಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ’ ಎಂದು ಹೇಳಿದರು.

‘ರಾಜ್ಯದ 15 ಜಿಲ್ಲೆಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೂ ತಪಾಸಣಾ ಕಿಟ್ ತಲುಪಿಸಲಾಗಿದೆ. ವಾರಿಯರ್‌ಗಳು ವ್ಯಕ್ತಿಯ ದೇಹದ ಉಷ್ಣತೆ, ಆಮ್ಲಜನಕದ ಪ್ರಮಾಣ ಸೇರಿ ಪ್ರಾಥಮಿಕ ತಪಾಸಣೆ ನಡೆಸುವರು. ಆರೋಗ್ಯದ ಸಮಸ್ಯೆ ಕಂಡುಬಂದರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಲಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನ ಸಕಾಲದಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ’ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ದೇಶದಲ್ಲಿ 43 ಲಕ್ಷ ಜನರಿಗೆ ಕೋವಿಡ್‌ ಸೋಂಕು ತಗುಲಿದೆ. ಕೋವಿಡ್ ಸೋಂಕಿನಿಂದಾಗಿ ಕರ್ನಾಟಕದಲ್ಲಿ 6,400 ಸೇರಿದಂತೆ ದೇಶದಲ್ಲಿ ಒಟ್ಟು 73 ಸಾವಿರ ಮಂದಿ ಮೃತಪಟ್ಟಿದ್ದಾರೆ. ಸೋಂಕು ಹರಡುವಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.

ಡಾ.ರವೀಂದ್ರ ಎಚ್‌.ಎನ್‌. ಡಾ.ಮಧುಸೂದನ್, ಡಾ.ಸಂಗಮೇಶ, ಡಾ.ಶ್ರೀನಿವಾಸ್ ಹಾಗೂ ಡಾ.ಮಹಾಂತೇಶ ತರಬೇತಿ ನೀಡಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಹೀಂ ಖಾನ್, ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಜಿಲ್ಲಾ ಎಸ್‌ಸಿ,ಎಸ್‌ಟಿ ಘಟಕದ ಅಧ್ಯಕ್ಷ ಸಂಜೀವಕುಮಾರ ಡಿ.ಕೆ., ಮುಖಂಡರಾದ ವಿಜಯಕುಮಾರ ಕೌಡ್ಯಾಳ್, ಎಂ.ಎ.ಸಮಿ, ಚಂದ್ರಕಾಂತ ಹಿಪ್ಪಳಗಾಂವ, ಮಹಮ್ಮದ್‌ ಯುಸೂಫ್, ಶಂಕರರಾವ್‌ ದೊಡ್ಡಿ, ವೆಂಕಟರಾವ್‌ ಶಿಂದೆ, ಜಾರ್ಜ್‌ ಫರ್ನಾಂಡೀಸ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.