ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಸರ್ಕಾರದಿಂದ ಜನರ ಜೇಬಿಗೆ ಕತ್ತರಿ: ಡಾ.ಶೈಲೇಂದ್ರ ಬೆಲ್ದಾಳೆ

Published 16 ಜೂನ್ 2024, 15:22 IST
Last Updated 16 ಜೂನ್ 2024, 15:22 IST
ಅಕ್ಷರ ಗಾತ್ರ

ಬೀದರ್: ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಎಡವಿದ್ದು, ಆರ್ಥಿಕ ದಿವಾಳಿ ಹಂತಕ್ಕೆ ಬಂದು ನಿಂತಿದ್ದ ಕಾರಣ ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕುತ್ತ ಹಗಲುದರೋಡೆ, ಸುಲಿಗೆ ದಂಧೆಗೆ ಇಳಿದಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ ಹುಡಗಿ ಆರೋಪಿಸಿದ್ದಾರೆ.

ಈ ಕುರಿತು ಭಾನುವಾರ ಜಂಟಿ ಪತ್ರಿಕಾ ಪ್ರಕಟಣೆ ನೀಡಿರು ಅವರು, ಪ್ರತಿ ಲೀಟರ್ ಪೆಟ್ರೋಲ್ ₹3 ಹಾಗೂ ಡೀಸೆಲ್ ₹3.50 ಹೆಚ್ಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ಸಾಬೀತುಪಡಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕ್ರೋಢೀಕರಿಸುವಲ್ಲಿ ಹೆಣಗಾಡುತ್ತಿದೆ. ಕಳೆದ ಒಂದು ವರ್ಷದಿಂದ ಯಾವೊಂದು ಹೊಸ ಕೆಲಸ ಆಗುತ್ತಿಲ್ಲ. ಒಂದೊಂದಾಗಿ ದರ ಏರಿಕೆ ಮಾಡುತ್ತ ಜನ ಸಾಮಾನ್ಯರಿಗೆ ಹೈರಾಣು ಮಾಡುತ್ತಿದ್ದಾರೆ ಎಂದರು.

’ಅತಿವೃಷ್ಟಿ ಹಾನಿ ಪರಿಹಾರಕ್ಕೆ ಆಗ್ರಹ’

ಅತಿವೃಷ್ಟಿಯಿಂದ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ್ ವಲಯದಲ್ಲಿ ವ್ಯಾಪಕ ಹಾನಿಯಾಗಿದೆ. ಅಟ್ಟೂರ್ ಮತ್ತು ಕೊಹಿನೂರ್ ಕೆರೆಗಳು ಒಡೆದು ಅನೇಕ ಹೊಲಗಳಲ್ಲಿನ ಫಲವತ್ತಾದ ಮಣ್ಣ ಕೊಚ್ಚಿಕೊಂಡು ಹೋಗಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರೈತರು ಬಿತ್ತಿದ ಬೆಳೆ ಕೊಚ್ಚಿಹೋಗಿವೆ. ತೆರೆದ ಬಾವಿ ಮುಚ್ಚಿಹೋಗಿವೆ. ಪಂಪ್‍ಸೆಟ್, ಮೋಟಾರ್‍ಗಳು ಕೊಚ್ಚಿಹೋಗಿವೆ. ರಸ್ತೆ, ಸೇತುವೆಗಳು ಹಾಳಾಗಿವೆ. ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು . ಸಾರ್ವಜನಿಕ ಆಸ್ತಿಪಾಸ್ತಿ ದುರಸ್ತಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಇಂದು ಪ್ರತಿಭಟನೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ದಿಢೀರ್ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಸೋಮವಾರ ಬೀದರ್ ನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ನಗರದ ಡಾ.ಅಂಬೇಡ್ಕರ್ ವೃತ್ತದ ಹತ್ತಿರದ ಪ್ರವಾಸಿ ಮಂದಿರದಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಜಮಾಯಿಸಿ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಾಹನಗಳಿಗೆ ಕೈಯಿಂದ ತಳ್ಳುತ್ತ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜನ ಹಿತದ ಈ ಹೋರಾಟದಲ್ಲಿ ಸಾರ್ವಜನಿಕರು, ವಿವಿಧ ಸಂಘ, ಸಂಸ್ಥೆಯವರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸೋಮನಾಥ್ ಪಾಟೀಲ. ಬಿಜೆಪಿ ಜಿಲ್ಲಾಧ್ಯಕ್ಷ.
ಸೋಮನಾಥ್ ಪಾಟೀಲ. ಬಿಜೆಪಿ ಜಿಲ್ಲಾಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT