ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ಕೋವಿಡ್ ಲಸಿಕೆ ಪಡೆಯಿರಿ

ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
Last Updated 7 ಸೆಪ್ಟೆಂಬರ್ 2021, 16:34 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಎಲ್ಲ ಸಿಬ್ಬಂದಿ ಲಸಿಕೆ ಪಡೆದ ಬಗ್ಗೆ ಆಯಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಲಸಿಕಾಕರಣದ ಗುರಿ ಸಾಧನೆಗೆ ಒತ್ತು ಕೊಡಬೇಕು. ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳ ಜತೆಗೆ ಇತರ ಆರೋಗ್ಯ ಕಾರ್ಯಕ್ರಮಗಳು ಸಮರ್ಪಕ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪಿಂಚಣಿ, ಆರೋಗ್ಯ ಕಾರ್ಡ್ ಮತ್ತು ಶಿಕ್ಷಣ ಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,91,203 ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಈಗಾಗಲೇ 9ನೇ ಕಂತಿನವರೆಗೆ ₹ 261.02 ಕೋಟಿ ಸಹಾಯಧನ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.

2020-21ನೇ ಸಾಲಿನಲ್ಲಿ 58 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಉಪ ವಿಭಾಗಮಟ್ಟದ ಸಮಿತಿಯಲ್ಲಿ ಅರ್ಹವಾದ 39 ಪ್ರಕರಣಗಳಲ್ಲಿ ರೈತರ ಕುಟುಂಬಗಳಿಗೆ ತಲಾ ₹ 5 ಲಕ್ಷದಂತೆ ಒಟ್ಟು ₹ 195 ಲಕ್ಷ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 876 ಮಿ.ಮೀ ಇದ್ದು, ಇಲ್ಲಿಯವರೆಗೆ 565 ಮಿ.ಮೀ. ಮಳೆ ಆಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಹುಲಸೂರ ತಾಲ್ಲೂಕಿನಲ್ಲಿ ಮತ್ತು ಅತಿ ಕಡಿಮೆ ಹುಮನಾಬಾದ್ ತಾಲ್ಲೂಕಿನಲ್ಲಿ ಬಿದ್ದಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದರು.

2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 2,47,490 ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ, ಕೈಗಾರಿಕಾ ಪ್ರದೇಶ ಸೇರಿದಂತೆ ನಿಷೇಧಿತ ಯಾವುದೇ ಪ್ರದೇಶದಲ್ಲಿ ಅನುಮತಿ ಪಡೆಯದೆ ಕೊಳವೆಬಾವಿ ಕೊರೆಯಬಾರದು ಎಂದು ಹೇಳಿದರು.

ಅನುದಾನ ಲಭ್ಯವಿದ್ದರೂ ಕೆಲ ಕಾಮಗಾರಿಗಳನ್ನು ಆರಂಭಿಸದೇ ಇರುವುದು ಸರಿಯಲ್ಲ ಎಂದು ಕೆಆರ್‍ಐಡಿಎಲ್ ಎಂಜಿನಿಯರ್‌ಗಳಿಗೆ ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ.ಬ್ಯಾಕೋಡ್, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT