ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಆರೈಕೆ ಕೇಂದ್ರಗಳಲ್ಲೇ ಚಿಕಿತ್ಸೆ ಪಡೆಯಿರಿ: ಸಚಿವ ಪ್ರಭು ಚವಾಣ್ ಮನವಿ

Last Updated 29 ಮೇ 2021, 15:11 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ಸೋಂಕಿತರು ಕೋವಿಡ್ ಆರೈಕೆ ಕೇಂದ್ರಗಳಲ್ಲೇ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಕೆಲ ಕಡೆ ಹೋಂ ಐಸೋಲೇಷನ್‍ನಲ್ಲಿ ಇರುವ ರೋಗಿಗಳು ಮನೆಯಲ್ಲಿರದೆ ಹೊರಗೆ ತಿರುಗಾಡುತ್ತಿರುವ ಕುರಿತು ದೂರುಗಳು ಬರುತ್ತಿವೆ. ಇದು, ಅತ್ಯಂತ ಅಪಾಯಕಾರಿ. ಇಂತಹ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೋಗ ಲಕ್ಷಣಗಳು ಇರಲಿ, ಬಿಡಲಿ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಬೇಕು ಎಂದು ಸೂಚಿಸಿದರು.

ಹಳ್ಳಿಗಳಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ವೈದ್ಯರ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ವೈದ್ಯರು ಮನೆ, ಮನೆಗೆ ಭೇಟಿ ನೀಡಿ ಹೊಸ ಸೋಂಕಿತರನ್ನು ಪತ್ತೆ ಹೆಚ್ಚುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೆಲ ಕಡೆ ರ್ಯಾಪಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಪರೀಕ್ಷೆ ನಡೆಸದೆ ಸೋಂಕು ಪತ್ತೆ ಹೆಚ್ಚುವುದು ಅಸಾಧ್ಯ. ಹೀಗಾಗಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆಗೆ ಒಳಗಾಗಬೇಕು. ಸೋಂಕು ಖಚಿತವಾದ ಕೂಡಲೇ ಚಿಕಿತ್ಸೆ ಆರಂಭಿಸಬೇಕು ಎಂದು ಹೇಳಿದರು.

ಗ್ರಾಮಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾದ ಟಾಕ್ಸ್‍ಫೋರ್ಸ್‍ಗಳು ಇನ್ನಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿವಾರಿಸುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕಿಗೆ ಒಳಗಾಗುವ ಮಕ್ಕಳ ಚಿಕಿತ್ಸೆಗೆ ವಿಶೇಷ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಪ್ರಯುಕ್ತ ಸರ್ಕಾರದಿಂದ ಕಾರ್ಮಿಕ ಇಲಾಖೆಯ 13 ಹಾಗೂ ತೋಟಗಾರಿಕೆ ಇಲಾಖೆಯ 5 ಜನರಿಗೆ ಸಹಾಯಧನ ಧನ ಮಂಜೂರಾತಿ ಪತ್ರಗಳನ್ನು ವಿತರಿಸಿದರು.

ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ಹೂವು, ಹಣ್ಣು ಮತ್ತು ತರಕಾರಿ ಬೆಳೆಯುವ 2,271 ರೈತರಿಗೆ ಸುಮಾರು ರೂ. 2 ಕೋಟಿ ಸಹಾಯ ಧನ ದೊರೆಯಲಿದೆ. ಕಾರ್ಮಿಕ ಇಲಾಖೆಯಿಂದ ಅಸಂಘಟಿತ ವಲಯದ ಕಾರ್ಮಿಕರಿಗೆ ಸಹಾಯಧನ ಒದಗಿಸುತ್ತಿದ್ದು, ಒಟ್ಟು 1,43,843 ಜನ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT