ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರು, ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಿ

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಆರೋಪ
Last Updated 26 ಜೂನ್ 2019, 18:12 IST
ಅಕ್ಷರ ಗಾತ್ರ

ಬೀದರ್: ದೇಶದಲ್ಲಿ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ದಬ್ಬಾಳಿಕೆ ಪ್ರಕರಣಗಳ ತನಿಖೆಯನ್ನು ಸುಪ್ರೀಂಕೊರ್ಟ್ ಕಣ್ಗಾವಲಿನಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾ ನಾಗರಿಕ ಕಾರ್ಯಕರ್ತರ ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮಹಾವೀರ ವೃತ್ತ, ತಹಶೀಲ್ದಾರ್ ಕಚೇರಿ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಬರೆದ ಪ್ರತ್ಯೇಕ ಮನವಿ ಪತ್ರಗಳನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಲೋಕಸಭೆ ಚುನಾವಣೆಯ ನಂತರ ದೇಶದಲ್ಲಿ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಸಮಾಜ ಘಾತುಕ ಶಕ್ತಿಗಳು ಕಾನೂನು ಕೈಗೆತ್ತಿಕೊಳ್ಳುತ್ತಿದ್ದಾರೆ. ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ರಾಜ್ಯ ಸರ್ಕಾರವೂ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಮಾತನಾಡುತ್ತ 1975 ರಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿ ವಿರೋಧ ಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದು ಹೇಳಿದ್ದಾರೆ. ಆದರೆ, 2014 ರಿಂದ ಈವರೆಗೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬೆ ಕಟ್ಟೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಗೋ ರಕ್ಷಣೆ, ಲವ್ ಜಿಹಾದ್ ಹೆಸರಲ್ಲಿ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರ ದಬ್ಬಾಳಿಕೆ ನಡೆದಿದೆ ಎಂದು ದೂರಿದರು.

ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಸ್ಮಿ, ವೇದಿಕೆಯ ಸಂಚಾಲಕ ಬಾಬುರಾವ್ ಹೊನ್ನಾ, ಸಹ ಸಂಚಾಲಕ ರಾಜಕುಮಾರ ಮೂಲಭಾರತಿ, ಮುಬಾಶಿರ ಶಿಂದೆ, ಆರ್‌.ಪಿ. ರಾಜಾ, ಮಾರುತಿ ಬೌದ್ಧೆ, ಶಾಹೇದ್ ಅಲಿ, ಮಹೆತಾಬ್‌ ಅಲಿ, ಮಾಣಿಕರಾವ್ ಖಾನಾಪೂರೆ, ಚಂದ್ರಕಾಂತ ನಿರಾಟೆ, ನಜೀರ್ ಅಹಮ್ಮದ್, ಪ್ರಭು ಹೂಚಕನಳ್ಳಿ, ಕಲ್ಲಪ್ಪ ಚೌಳಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT