ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಗತಿಕ ಸ್ಪರ್ಧೆಗೆ ಉತ್ತಮ ಸಂವಹನ ಅಗತ್ಯ: ಪ್ರೊ. ಎಸ್.ಆರ್.ನಿರಂಜನ್

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ್ ಅಭಿಮತ
Published 5 ಡಿಸೆಂಬರ್ 2023, 15:55 IST
Last Updated 5 ಡಿಸೆಂಬರ್ 2023, 15:55 IST
ಅಕ್ಷರ ಗಾತ್ರ

ಬೀದರ್‌: ‘ನಮ್ಮ ವಿದ್ಯಾರ್ಥಿಗಳಿಗೆ ಸಂವಹನದ ಕೊರತೆ ಬಹಳ ಕಾಡುತ್ತಿದೆ. ಜಾಗತಿಕ ಸ್ಪರ್ಧೆಯ ಸವಾಲು ಎದುರಿಸಬೇಕಾದರೆ ಉತ್ತಮ ಸಂವಹನ ಬಹಳ ಅಗತ್ಯ’ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್.ನಿರಂಜನ್ ಅಭಿಪ್ರಾಯಪಟ್ಟರು.

ಬೀದರ್ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಮತ್ತು ಉನ್ನತ ಶಿಕ್ಷಣದ ಉತ್ಕೃಷ್ಟತೆ ಕುರಿತ ಕಾರ್ಯಾಗಾರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. 

ಜಾಗತಿಕ ಮಟ್ಟದ ಸ್ಪರ್ಧೆ ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಅಗತ್ಯವಿದೆ. ಇದಕ್ಕಾಗಿ ಮೌಲ್ಯಾಧಾರಿತ ಮತ್ತು ಕೌಶಲಯುಕ್ತ ಶಿಕ್ಷಣ ನೀಡಬೇಕಾಗಿದೆ. ವೃತ್ತಿ ಕೌಶಲದ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಧ್ಯಯನ ಕೌಶಲ ಬೇಕು. ಸಂವಹನ ಕೊರತೆ ನೀಗಿಸಿ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ. ಆ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದರು.

ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯಗಳು ಸಾವಿರಾರು ವರ್ಷಗಳ ಹಿಂದೆಯೇ ಜಾಗತಿಕವಾಗಿ ಮನ್ನಣೆ ಗಳಿಸಿದ್ದವು. ಆದರೆ, ವಿಜ್ಞಾನ, ತಂತ್ರಜ್ಞಾನ ಇಷ್ಟೆಲ್ಲ ಬೆಳೆದ ನಂತರವೂ ನಮ್ಮಲ್ಲಿ ಸಂಸ್ಥೆಗಳು ವಿಶ್ವದ ಅಗ್ರಗಣ್ಯ ಸಂಸ್ಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿಲ್ಲ. ಇದು ಸಹ ಬದಲಾವಣೆ ತರಬೇಕಾದ ಅಗತ್ಯವನ್ನು ಸೂಚಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುತ್ತಿದ್ದಾರೆ. ವಿದ್ಯಾರ್ಥಿಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳುವ ರೀತಿಯಲ್ಲಿ ಉನ್ನತ ಶಿಕ್ಷಣ ಬದಲಾಗಬೇಕಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತರಬೇಕಾದ ಬದಲಾವಣೆ ಕುರಿತು ಉನ್ನತ ಶಿಕ್ಷಣ ಪರಿಷತ್ತು ಗಂಭೀರ ಚಿಂತನೆ ನಡೆಸುತ್ತಿದೆ. ಶಿಕ್ಷಣ ತಜ್ಞರು, ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿನ ಕೊರತೆ ನಿವಾರಿಸಲು, ಸುಧಾರಣೆ ತರಲು ಮುಖ್ಯಮಂತ್ರಿ ಕೂಡ ಸಮ್ಮತಿಸಿದ್ದಾರೆ. ಮುಂದಿನ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಅಧಿಕ ಅನುದಾನ ಸಿಗುವ ಭರವಸೆ ಇದೆ ಎಂದು ತಿಳಿಸಿದರು.

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ್, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಕೆಆರ್‌ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಖದೀರ್, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ್, ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಲಬೀರಸಿಂಗ್, ಕರ್ನಾಟಕ ಸಾಹಿತ್ಯ ಸಂಘ ಟ್ರಸ್ಟ್ ಅಧ್ಯಕ್ಷ ಶಂಕರರಾವ ಹೊನ್ನಾ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ, ಬೀದರ್ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಪರಮೇಶ್ವರ ನಾಯಕ, ಶರಣಬಸವ ವಿ.ವಿಯ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಕಲ್ಯಾಣರಾವ ಪಾಟೀಲ, ರಾಜಕುಮಾರ ಹೆಬ್ಬಾಳೆ, ವೀರಶೆಟ್ಟಿ ಮೈಲೂರಕರ್ ಪಾಲ್ಗೊಂಡಿದ್ದರು. ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಕಾಲೇಜು ಪ್ರಾಚಾರ್ಯರು, ಅಧ್ಯಾಪಕರು ಪ್ರೊ. ಎಸ್.ಆರ್. ನಿರಂಜನ್ ಅವರನ್ನು ಸನ್ಮಾನಿಸಿದರು.

ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಬಹಳ ಕಡಿಮೆ. ಇದು ಕಳವಳಕಾರಿ ಸಂಗತಿ.

  –ಪ್ರೊ. ಎಸ್.ಆರ್. ನಿರಂಜನ್ ಉಪಾಧ್ಯಕ್ಷ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT