ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ಗುರುತಿಸಿ

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Last Updated 17 ಜುಲೈ 2021, 16:40 IST
ಅಕ್ಷರ ಗಾತ್ರ

ಬೀದರ್‌: ಬೀದಿ ಬದಿ ವ್ಯಾಪಾರಿಗಳು ಕೆಲ ಕಡೆ ರಸ್ತೆಯಲ್ಲೇ ವ್ಯಾಪಾರ ನಡೆಸುತ್ತಿರುವ ದೂರುಗಳು ಬರುತ್ತಿವೆ. ಅವರಿಗೆ ವ್ಯಾಪಾರ ನಡೆಸಲು ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದರ್‌ ನಗರದಲ್ಲಿ ರಸ್ತೆ ಮೇಲೆ ವ್ಯಾಪಾರ ವಹಿವಾಟು ಮಾಡುವುದು ಅಲ್ಲಲ್ಲಿ ಕಂಡು ಬರುತ್ತಿದೆ. ನಗರಸಭೆ ಹಾಗೂ ಪೊಲೀಸ್‌ ಅಧಿಕಾರಿಗಳು ಇದನ್ನು ತಡೆಯಬೇಕು ಎಂದು ಸೂಚನೆ ನೀಡಿದರು.

ನಗರದಲ್ಲಿ ನಯಾಕಮಾನ್, ಗುಂಪಾ ಹಾಗೂ ನೌಬಾದ್ ಹೀಗೆ ಒಟ್ಟು ಎಂಟು ಕಡೆ ಬೀದಿ ವ್ಯಾಪಾರಿಗಳಿಗೆ ಸ್ಥಳ ಗುರುತಿಸಲಾಗಿದೆ. ಸರ್ಕಾರಕ್ಕೂ ಪ್ರಸ್ತಾವ ಕಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೀದರ್ ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ಸಭೆಗೆ ಮಾಹಿತಿ ನೀಡಿದರು.

ರಾತ್ರಿ ವೇಳೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಣೆ ಮಾಡುವ ವಾಹನಗಳು ಸರಿಯಾಗಿ ಕಾಣದ ಕಾರಣ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗುತ್ತಿರುವ ದೂರುಗಳು ಬಂದಿವೆ. ಕಬ್ಬು ಸಾಗಣೆ ಮಾಡುವ ಟ್ರ‍್ಯಾಕ್ಟರ್, ಲಾರಿ ಹಾಗೂ ಇತರೆ ಸರಕು ಸಾಗಣೆ ವಾಹನಗಳಿಗೆ ರಿಫ್ಲೆಕ್ಟರ್‌ಗಳನ್ನು ಅಳವಡಿಸುವಂತೆ ವಾಹನ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರಿಗೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿರ್ಮಾಣ ಹಂತದಲ್ಲಿರುವ ಬೀದರ್-ಭಾಲ್ಕಿ ಮಾರ್ಗದ ರಾಷ್ಟ್ರೀಯ ಹೆದ್ದಾರಿಯ ಕೆಲವೊಂದು ಕಡೆಗಳಲ್ಲಿ ರಸ್ತೆ ಮೇಲೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ‍ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೀದರ್-ಭಾಲ್ಕಿ ನಡುವಿನ 45 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಉಳಿದ 9.34 ಕಿ ಮೀ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಆದ್ಯತೆಯ ಮೇಲೆ ಪೂರ್ಣಗೊಳಿಸಲು ಪ್ರಯತ್ನಿಸಿದರೆ ಸುಗಮ ಸಾರಿಗೆ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಆರ್‌ಟಿಒ ಶಿವಶಂಕರ ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಲೋಕೋಪಯೋಗಿ ಎಂಜಿನಿಯರ್ ಶಿವಪ್ರಸಾದ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT