ಶನಿವಾರ, ಸೆಪ್ಟೆಂಬರ್ 18, 2021
21 °C
ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚನೆ

ಅಪಘಾತ ವಲಯ ಗುರುತಿಸಿ, ಎಚ್ಚರಿಕೆ ಫಲಕ ಅಳವಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆ ಮಾಡುವ ದಿಸೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ದೆಹಲಿಯಿಂದ ವಿಡಿಯೊ ಮೂಲಕ ಬೀದರ್ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

’ಅಪಘಾತ ವಲಯಗಳನ್ನು ಗುರುತಿಸಿ ಅಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆ ಮೇಲೆ ಮಣ್ಣು ಅಥವಾ ಜಲ್ಲಿಕಲ್ಲು ಹಾಕಿ ಹಾಗೆ ಬಿಟ್ಟರೆ ಅಪಘಾಗಳು ಹೆಚ್ಚಾಗುತ್ತವೆ. ರಸ್ತೆಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ರೋಡ್‌ ಹಂಪ್ಸ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಾಣ ಮಾಡಬೇಕು. ಅವುಗಳ ಮೇಲೆ ಸರಿಯಾಗಿ ಮಾರ್ಕ್‌ ಮಾಡಬೇಕು. ವಾಹನಗಳು ವೇಗವಾಗಿ ಬಂದರೂ ಹಂಪ್ಸ್‌ ಕಾಣುವಂತೆ ಇರಬೇಕು. ಅಂದಾಗ ಮಾತ್ರ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಾಧ್ಯವಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪಾದಚಾರಿಗಳ ಮಾರ್ಗಗಳಲ್ಲಿ ಆಗಿರುವ ಒತ್ತುವರಿ ತೆರವುಗೊಳಿಸಲಾಗುವುದು. ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ನಂತರ ತೆರವು ಕ್ರಮ ಕೈಗೊಳ್ಳುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಲಾಗುವುದು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಮಾತನಾಡಿ, ‘ಜಿಲ್ಲೆಯಲ್ಲಿ 21 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈಗಾಗಲೇ ಏಳು ಕಡೆಗಳಲ್ಲಿ ಕೆಲಸ ಪೂರ್ಣವಾಗಿದೆ. ಇನ್ನು 16 ಕಡೆಗಳಲ್ಲಿ ಕಾಮಗಾರಿ ಬಾಕಿ ಇದೆ’ ಎಂದು ಮಾಹಿತಿ ನೀಡಿದರು.

‘ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೇ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ದಂಢ ವಿಧಿಸಿ ಎಚ್ಚರಿಕೆ ನೀಡುವ ಕಾರ್ಯ ನಿರಂತರವಾಗಿ ನಡೆದಿದೆ’ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ದುರಸ್ತಿಗಾಗಿಯೇ ಕಾಯ್ದಿರಿಸಿರುವ ಅನುದಾನವನ್ನು ಬ್ಲಾಕ್ ಸ್ಪಾಟ್ ಕಾರ್ಯಕ್ಕೆ ಬಳಸಿಕೊಂಡು ತಗ್ಗು ಗುಂಡಿಗಳನ್ನು ಮುಚ್ಚಬೇಕು’ ಎಂದು ಖೂಬಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪೊಲೀಸ್‌ ಸಿಬ್ಬಂದಿ ಕೆಲ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಬ್ಯಾರಿಕೇಡ್‌ಗಳನ್ನು ರಸ್ತೆ ಮಧ್ಯದಲ್ಲಿ ಇಟ್ಟಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅದಕ್ಕೆ ಡಿಕ್ಕಿ ಹೊಡೆದು ಗಾಯಗೊಳ್ಳುತ್ತಿದ್ದಾರೆ.ಇಂತಹ ಸಣ್ಣ ವಿಷಯಗಳನ್ನು ನಿರ್ಲಕ್ಷಿಸಬಾರದು. ಅಗತ್ಯವಿದ್ದಾಗ ಮಾತ್ರ ಬ್ಯಾರಿಕೇಡ್‌ ಅಳವಡಿಸಬೇಕು. ನಂತರ ತಕ್ಷಣ ತೆರವುಗೊಳಿಸಬೇಕು’ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿ ಶಿವಶಂಕರ ಹೇಳಿದರು.

‘ರಸ್ತೆ ಬದಿಯಲ್ಲಿ ಲೇನ್‌ ಮಾರ್ಕಿಂಗ್, ಕ್ರಾಸಿಂಗ್‌ಗಳಲ್ಲಿ ಕ್ಯಾಟ್‌ಐಸ್‌ ಅಳವಡಿಸುವ ಕಾರ್ಯ ನಡೆದಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ನಿರಂತರವಾಗಿ ನಡೆದಿದೆ’ ಎಂದು ಶಿವಶಂಕರ ಸಭೆಗೆ ಮಾಹಿತಿ ನೀಡಿದರು.

ಬೀದರ್ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಅಶೋಕುಮಾರ ಕರಂಜಿ, ವೈದ್ಯಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಮನ್ನಳ್ಳಿಯ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು ಹಾಗೂ ನಗರಸಭೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.