ಬುಧವಾರ, ಆಗಸ್ಟ್ 4, 2021
26 °C
ಸ್ವಚ್ಛತೆಗೆ ಆದ್ಯತೆ ಕೊಡದಿದ್ದರೆ ಶಿಸ್ತು ಕ್ರಮ: ಸಚಿವ ಎಚ್ಚರಿಕೆ

ಬೀದರ್ ನಗರದಲ್ಲಿ ಫಾಗಿಂಗ್‌ ಚುರುಕುಗೊಳಿಸಿ: ಪ್ರಭು ಚವಾಣ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಾದ್ಯಂತ ಸ್ವಚ್ಛತೆಯ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಜಿಲ್ಲೆಯಾದ್ಯಂತ ರಸ್ತೆ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆಗಾಲ ಆರಂಭವಾಗಿರುವುದರಿಂದ ಮಲೇರಿಯಾ, ಡೆಂಗಿ ಸೇರಿದಂತೆ ವಿವಿಧ ರೋಗಗಳು ಉಲ್ಬಣಿಸುವ ಸಾಧ್ಯತೆ ಇರುತ್ತದೆ. ಹಾಗೆಯೇ ಕೊರೊನಾ ಸೋಂಕಿನ ಕಾರಣ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ತುಂಬಿಕೊಂಡಿರುವ ಚರಂಡಿಗಳನ್ನು ಶುಚಿಗೊಳಿಸಬೇಕು. ರಸ್ತೆಗಳನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಕೊರೊನಾ ಸೋಂಕಿತ ಅಧಿಕಾರಿ ಸಂಪರ್ಕಕ್ಕೆ ಬಂದಿರುವ ಕಾರಣ ವೈದ್ಯರ ಸಲಹೆಯ ಮೇರೆಗೆ ಕ್ವಾರಂಟೈನ್‍ಗೆ ಒಳಗಾಗಿರುವ ಸಚಿವರು, ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಬೀದರ್ ನಗರ ಮತ್ತು ವಿವಿಧ ತಾಲ್ಲೂಕುಗಳಲ್ಲಿ ಚರಂಡಿಗಳು ತುಂಬಿಕೊಂಡು ದುರ್ನಾತ ಬೀರುತ್ತಿರುವ ಬಗ್ಗೆ ಜನರು ದೂರವಾಣಿ ಮೂಲಕ ದೂರು ನೀಡುತ್ತಿದ್ದಾರೆ. ಲಾಕ್‍ಡೌನ್ ಪ್ರಯುಕ್ತ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವ ಕಾರಣ ಅಂಗಡಿ ಮುಂದಿನ ಚರಂಡಿಗಳನ್ನು ಸ್ವಚ್ಛಗೊಳಿಸಲು ಅನುಕೂಲಕರ ವಾತಾವರಣ ಇದೆ. ಜನ ಸಂಚಾರವೂ ಕಡಿಮೆ ಇರುವುದರಿಂದ ಆದಷ್ಟು ಶೀಘ್ರ ಚರಂಡಿ ಸ್ವಚ್ಛತೆ ಕೈಗೊಳ್ಳಬಹುದಾಗಿದೆ. ಸ್ವಚ್ಛತಾ ಕಾರ್ಯದ ಬಗ್ಗೆ ತಮಗೆ ವ್ಯಾಟ್ಸ್‌ಆ್ಯಪ್‍ನಲ್ಲಿ ಫೊಟೋ ಕಳುಹಿಸಬೇಕು ಎಂದು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ನಗರದೆಲ್ಲೆಡೆ ಫಾಗಿಂಗ್, ಸ್ಯಾನಿಟೈಸೇಷನ್, ಬ್ಲೀಚಿಂಗ್ ಪೌಡರ್ ಸಿಂಪಡಿಸುವ ಕಾರ್ಯ ಚುರುಕುಗೊಳಿಸಬೇಕು. ನಗರ ಸ್ವಚ್ಛತೆಗೆ ಗಮನ ಕೊಡದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಗರ ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಆದೇಶಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.