ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮನೆ ಬಾಗಿಲಿಗೆ ಸೇವೆ: ಸಚಿವ ಪ್ರಭು ಚವಾಣ್

68 ಸಂಚಾರಿ ಪಶು ಚಿಕಿತ್ಸಾ ಘಟಕ ‌ಉದ್ಘಾಟನೆ
Last Updated 31 ಜನವರಿ 2023, 14:02 IST
ಅಕ್ಷರ ಗಾತ್ರ

ಬೀದರ್‌: ‘ಜಾನುವಾರುಗಳ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ. ಅವರ ಕನಸಿನ ಕೂಸಾಗಿ 68 ’ಪಶು ಸಂಜೀವಿನಿ’ ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಸೇವೆಗೆ ಮುಕ್ತಗೊಳಿಸಲಾಗಿದೆ’ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಮಂಜೂರಾದ ‘ಪಶು ಸಂಜೀವಿನಿ’ ಸಂಚಾರಿ ಪಶು ಚಿಕಿತ್ಸಾ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಗೆ 13, ರಾಯಚೂರು ಜಿಲ್ಲೆಗೆ 11, ಕೊಪ್ಪಳ, ವಿಜಯನಗರ ಜಿಲ್ಲೆಗೆ ತಲಾ 10. ಬೀದರ್‌, ಯಾದಗಿರಿ ಹಾಗೂ ಬಳ್ಳಾರಿ ಜಿಲ್ಲೆಗೆ ತಲಾ 8 ವಾಹನಗಳನ್ನು ಕೊಡಲಾಗಿದೆ. ಪಶು ಸಂಜೀವಿನಿ ವಾಹನದಲ್ಲಿ ಪಶು ವೈದ್ಯರು, ಪಶು ವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ಇರುವರು. ಇವರು ರೈತರ ಮನೆ ಬಾಗಿಲಿಗೆ ಸೇವೆ ಕೊಡಲಿದ್ದಾರೆ’ ಎಂದರು.

‘ಈ ಹಿಂದೆ 15 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು, ಅವುಗಳ ಯಶಸ್ಸನ್ನು ಮನಗಂಡು ಕೇಂದ್ರ ಸರ್ಕಾರ 275 ಸಂಚಾರಿ ಚಿಕಿತ್ಸಾ ವಾಹನಗಳಿಗೆ ಮಂಜೂರಾತಿ ನೀಡಿದೆ. ರೈತರು 1962 ಅಥವಾ 8277100200ಗೆ ಕರೆ ಮಾಡುವ ಮೂಲಕ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಉಪಯೋಗ ಪಡೆಯಬಹುದು. ಈ ಯೋಜನೆಯ ನಿರ್ವಹಣೆ ವೆಚ್ಚವನ್ನು ಕೇಂದ್ರ ಸರ್ಕಾರ ಶೇಕಡ 60 ಹಾಗೂ ರಾಜ್ಯ ಶೇಕಡ 40 ರಷ್ಟು ಭರಿಸಲಿದೆ’ ಎಂದು ಮಾಹಿತಿ ನೀಡಿದರು.

‘ದೇಶದಲ್ಲಿ ಮೊದಲ ಬಾರಿಗೆ ಪ್ರಾಣಿ ಸಹಾಯವಾಣಿ ಕೇಂದ್ರ ಕರ್ನಾಟಕದಲ್ಲಿ ಆರಂಭಿಸಲಾಗಿದೆ. ಕರ್ನಾಟಕ ಪ್ರಾಣಿ ರಕ್ಷಣಾ ಮಂಡಳಿ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯ ಮೂಲಕ ರಾಜ್ಯದಲ್ಲಿ ಪ್ರಾಣಿಗಳ ರಕ್ಷಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ಕಾಯ್ದೆಯಡಿ 2,500 ಪ್ರಕರಣಗಳು ದಾಖಲಾಗಿವೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಈಚೆಗೆ ಚರ್ಮಗಡ್ಡೆ ರೋಗಕ್ಕೆ ಬಾಧಿತವಾದ ಜಾನುವಾರುಗಳಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಈ ರೋಗದಿಂದ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಧನ ಕೊಟ್ಟಿದ್ದಾರೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಒತ್ತುವರಿಯಾಗಿದ್ದ 1,500 ಎಕರೆ ಗೋಮಾಳ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಗೋಶಾಲೆಗಳನ್ನು ಅವಲೋಕಿಸಿ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ಆರಂಭಿಸಲಾಗಿದೆ. ಬರುವ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು. ಎಲ್ಲ ಗೋಶಾಲೆಗಳನ್ನು ಸ್ವಾವಲಂಬಿ ಗೋಶಾಲೆಗಳನ್ನಾಗಿ ಮಾಡುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ‘ಗೋವುಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ಪುಣ್ಯಕೋಟಿ ಯೋಜನೆಯಡಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹ 3.10 ಲಕ್ಷ ಅನುದಾನದಲ್ಲಿ 31 ಹಸುಗಳನ್ನು ದತ್ತು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

ಔರಾದ್‌ ತಾಲ್ಲೂಕಿನ ಜಂಬಗಿ ಗ್ರಾಮದ ಸಿದ್ದರಾಮಯ್ಯ ಕುರಿ ಉಣ್ಣೆ ಉತ್ಪಾದಕರ ಸಂಘ ಹಾಗೂ ಭಾಲ್ಕಿ ತಾಲ್ಲೂಕಿನ ವಿಳಾಸಪುರದ ಭಕ್ತ ಕನಕದಾಸ ಕುರಿ ಉಣ್ಣೆ ಉತ್ಪಾದಕರ ಸಂಘಕ್ಕೆ ವಿದ್ಯುತ್ ಚಾಲಿತ ಉಣ್ಣೆ ಕಟಾವು ಯಂತ್ರವನ್ನು ಸಚಿವ ಚವಾಣ್ ಹಸ್ತಾಂತರ ಮಾಡಿದರು. ಚರ್ಮ ಗಂಟು ರೋಗದಿಂದ ಮೃತಪಟ್ಟ ಜಾನುವಾರು ಮಾಲೀಕರಿಗೆ ಪರಿಹಾರ ಧನ ಚೆಕ್ ವಿತರಿಸಿದರು.

ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ರಾಯಚೂರಿನ ಜಂಟಿ ನಿರ್ದೇಶಕ ಡಾ.ಕೃಷ್ಣಮೂರ್ತಿ, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ ವೀರಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ ಬಾಬು, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಸಂತ ಬಿರಾದಾರ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ನರಸಪ್ಪ ಎ.ಡಿ., ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಉಪ ನಿರ್ದೇಶಕರು ಇದ್ದರು.

ಭಾನುಪ್ರಿಯಾ ಅರಳಿ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಮಂಜುನಾಥ ಎಸ್. ಪಾಳೆಗಾರ ಸ್ವಾಗತಿಸಿದರು. ಜಾನುವಾರು ಆರೋಗ್ಯ ವಿಭಾಗದ ನಿರ್ದೇಶಕ ಪಿ.ಟಿ.ಶ್ರೀನಿವಾಸ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಮುಖರ ಗೈರು
ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ರಾಜ್ಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ಜಿಲ್ಲಾಧಿಕಾರಿ ಗೋವಿಂದ ರಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಗೈರಾಗಿದ್ದರು. ಸರ್ಕಾರದ ಶಿಷ್ಟಾಚಾರ ಉಲ್ಲಂಘಿಸಿ ಬಿಜೆಪಿ ಮುಖಂಡರೇ ವೇದಿಕೆಯಲ್ಲಿ ಆಸೀನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT