ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಅಹವಾಲು ಸ್ವೀಕಾರಕ್ಕೆ ಕಚೇರಿ: ಖಂಡ್ರೆ

Published 25 ಜುಲೈ 2023, 15:21 IST
Last Updated 25 ಜುಲೈ 2023, 15:21 IST
ಅಕ್ಷರ ಗಾತ್ರ

ಬೀದರ್‌: ‘ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ನನ್ನ ಕಚೇರಿ ಆರಂಭಿಸಲಾಗಿದೆ. ಸಹಾಯಕ ಸಿಬ್ಬಂದಿಯನ್ನು ನೇಮಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದ್ದು, ಜನರು ಅವರಿಗೆ ಅಹವಾಲು ಸಲ್ಲಿಸಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತ ಸಮೀಪದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸುವುದಕ್ಕಾಗಿಯೇ ಕಚೇರಿ ಆರಂಭಿಸಲಾಗಿದೆ. ಜನ ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು. ಕಾನೂನಾತ್ಮಕ ಸಮಸ್ಯೆಗಳಿದ್ದರೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ತಿಳಿಸಿದರು.

ಹಿಂದಿನ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿದ್ದ ₹3 ಸಾವಿರ ಕೋಟಿ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ಖರ್ಚು ಮಾಡಿದ. ಪ್ರಸಕ್ತ ಸಾಲಿನಲ್ಲಿ ಕೆಕೆಆರ್‌ಡಿಬಿಯಲ್ಲಿರುವ ₹5 ಸಾವಿರ ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುವುದು. ಕಳೆದ ವರ್ಷ ಕೆಕೆಆರ್‌ಡಿಬಿ ಅನುದಾನದಲ್ಲಿ ಆರಂಭವಾದ ಸಾಕಷ್ಟು ಯೋಜನೆಗಳು ನನೆಗುದಿಗೆ ಬಿದ್ದಿವೆ. ಅವುಗಳನ್ನು ಪುನಃ ಚಾಲನೆ ಕೊಡಲಾಗುವುದು ಎಂದರು.

 ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮತ್ತು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲಿರುವ ಆಸ್ಪತ್ರೆಗೆ ಬೇಕಾಗುವ ಮೂಲಭೂತ ಸೌಕರ್ಯಕ್ಕೆ ಕೆಕೆಆರ್‌ಡಿಬಿಯಿಂದ ಅನುದಾನಕ್ಕಾಗಿ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ 30ರಷ್ಟು ಹೆಚ್ಚಿನ ಮಳೆಯಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಿ ಪ್ರವಾಹ ಸಂಭವಿಸುವ ಮುನ್ಸೂಚನೆಗಳಿವೆ. ಈಗಾಗಲೇ ಜಿಲ್ಲಾಡಳಿತದಿಂದ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರವಾಹ ಉಂಟಾಗಿ ಜೀವ ಹಾನಿ, ಮನೆ ಹಾನಿ, ರಸ್ತೆ ಹಾನಿ, ದನಕರುಗಳು ಮೃತಪಟ್ಟರೆ, ಮೂಲಸೌಕರ್ಯಕ್ಕೆ ಪೆಟ್ಟು ಬಿದ್ದರೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿ ಸಮೀಕ್ಷೆ ನಡೆಸಲು ಸೂಚಿಸಿರುವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಗ್ರಾಮ ಒನ್, ಕರ್ನಾಟಕ ಒನ್, ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣವಾಗಿ ಉಚಿತವಾಗಿದ್ದು ‌ಯಾರಾದರೂ ಹಣ ಕೇಳಿದಲ್ಲಿ ಜಿಲ್ಲಾಧಿಕಾರಿ ಅಥವಾ ನನ್ನ ಗಮನಕ್ಕೆ ತಂದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ., ಎಸ್ಪಿ ಚನ್ನಬಸವಣ್ಣ ಎಸ್.ಎಲ್., ಉಪ ಅರಣ್ಯ ಸಂರಕ್ಷಾಣಾಧಿಕಾರಿ ವಾನತಿ.ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT