ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ ಭೀತಿ

ಬಸವಕಲ್ಯಾಣಕ್ಕೆ ಬಂದ 12 ಸಾವಿರ ವಲಸೆ ಕಾರ್ಮಿಕರು
Last Updated 16 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಬೀದರ್‌: ಮಹಾರಾಷ್ಟ್ರದ ಮುಂಬೈ, ಪುಣೆ, ಸೊಲ್ಲಾಪುರ ಹಾಗೂ ಲಾತೂರ್‌ಗೆ ವಲಸೆ ಹೋಗಿದ್ದ ಸುಮಾರು 12 ಸಾವಿರ ಕಾರ್ಮಿಕರು ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಊರುಗಳಿಗೆ ಮರಳಿದ್ದಾರೆ. ಮತದಾನ ದಿನವೂ ನೂರಾರು ಸಂಖ್ಯೆಯಲ್ಲಿ ಜನ ಸೇರುವುದರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕ್ಷಿಪ್ರಗತಿಯಲ್ಲಿ ಹೆಚ್ಚಾಗುವ ಭೀತಿ ಎದುರಾಗಿದೆ.

ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ವಲಸೆ ಕಾರ್ಮಿಕರನ್ನು ಕರೆಸಿಕೊಳ್ಳುವುದು ಸಾಮಾನ್ಯ. ಕೋವಿಡ್‌ ಕಾರಣ ಈ ಬಾರಿ ಮುಂಬೈ, ಪುಣೆ ನಗರಗಳನ್ನು ಏಪ್ರಿಲ್ 30ರ ವರೆಗೆ ಲಾಕ್‌ಡೌನ್ ಮಾಡಲಾಗಿದೆ. ಆದರೆ, ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿಲ್ಲ. ಹೀಗಾಗಿ ಬಸ್, ಕ್ರೂಸರ್‌ ಹಾಗೂ ಮ್ಯಾಕ್ಸಿಕ್ಯಾಬ್‌ಗಳಲ್ಲಿ ಸಾವಿರಾರು ಕಾರ್ಮಿಕ ಕುಟುಂಬಗಳು ಊರಿಗೆ ಮರಳಿವೆ.

‘ಹೈದರಾಬಾದ್– ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಬಳಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳ ದಾಖಲೆ ಪ್ರಕಾರ ಐದು ದಿನಗಳಲ್ಲಿ 12 ಸಾವಿರಕ್ಕೂ ಹೆಚ್ಚು ಜನರು ಜಿಲ್ಲೆಯೊಳಗೆ ಪ್ರವೇಶ ಮಾಡಿದ್ದಾರೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣರೆಡ್ಡಿ ತಿಳಿಸಿದ್ದಾರೆ.

‘ಚಂಡಕಾಪುರ ಹಾಗೂ ಹಣಮಂತವಾಡಿ ಚೆಕ್‌ಪೋಸ್ಟ್‌ಗಳಲ್ಲಿ ಐದು ದಿನಗಳಲ್ಲಿ ತಪಾಸಣೆ ನಡೆಸಿದ ವೇಳೆ 202 ಶಂಕಿತ ಸೋಂಕಿತರು ಕಂಡು ಬಂದಿದ್ದಾರೆ. ಕೋವಿಡ್‌ ನೆಗೆಟಿವ್‌ ವರದಿ ಇಲ್ಲದೆ ಬಂದವರನ್ನು ವಾಪಸ್‌ ಕಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಗಡಿಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಪ್ರತಿಯೊಂದು ಮತಗಟ್ಟೆಗೆ ಎರಡು ಪಿಪಿಇ ಕಿಟ್‌ಗಳನ್ನು ವಿತರಿಸಿದೆ. ಮಾಸ್ಕ್‌ ಹಾಗೂ ಕೈಗವಸುಗಳ ವ್ಯವಸ್ಥೆಯನ್ನೂ ಮಾಡಿದೆ. ಮತಗಟ್ಟೆಗಳಲ್ಲಿ ಥರ್ಮಲ್‌ಸ್ಕ್ರೀನಿಂಗ್‌ ಮಾಡಲು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದ್ದಾರೆ.

20 ಜನ ಸೋಂಕಿತರ ಮತದಾನಕ್ಕೆ ವ್ಯವಸ್ಥೆ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ 20 ಜನ ಕೋವಿಡ್‌ ಸೋಂಕಿತರು ಮತದಾನ ಮಾಡುವ ಬಗ್ಗೆ ಅರ್ಜಿ ಕೊಟ್ಟಿದ್ದು, ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

‘ಪಿಪಿಇ ಕಿಟ್‌ ಧರಿಸಿದ ವೈದ್ಯಕೀಯ ಸಿಬ್ಬಂದಿ ಸೋಂಕಿತ ವ್ಯಕ್ತಿಗಳನ್ನು ಮತಗಟ್ಟೆಗೆ ತಂದು ಮತದಾನ ಮಾಡಿಸಿ ಒಯ್ಯಲಿದ್ದಾರೆ. ಇದರ ಹೊಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ವಹಿಸಲಾಗಿದೆ. ಸೋಂಕಿತರು ಮತದಾನ ಮಾಡಿದ ನಂತರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದ್ದಾರೆ.

ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗಾಗಿ ಮತಗಟ್ಟೆಗಳಲ್ಲಿ ವ್ಹೀಲ್‌ಚೇರ್‌ಗಳ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT